
ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್‌ನಲ್ಲಿ ಕಾಲಿನ್ಸ್ ಏರೋಸ್ಪೇಸ್ ಕಂಪನಿ ಸ್ಥಾಪಿಸಿರುವ ‘ಕಾಲಿನ್ಸ್ ಇಂಡಿಯಾ ಆಪರೇಷನ್ ಸೆಂಟರ್’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಉದ್ಘಾಟಿಸಿದರು.
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಬೆಂಗಳೂರು ಸೇರಿದಂತೆ ರಾಜ್ಯದ ಐದು ಕಡೆ ವಿಶ್ವದರ್ಜೆಯ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ, ಮೈಸೂರು, ತುಮಕೂರು ಮತ್ತು ಚಾಮರಾಜನಗರದಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ತಲೆ ಎತ್ತಲಿವೆ ಎಂದು ಅವರು ಹೇಳಿದರು.
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ(ಕೆಐಎಡಿಬಿ) ಏರೋಸ್ಪೇಸ್ ಪಾರ್ಕ್‌ನಲ್ಲಿ ಕಾಲಿನ್ಸ್ ಏರೋಸ್ಪೇಸ್ ಕಂಪನಿ ಸ್ಥಾಪಿಸಿರುವ ಕಾಲಿನ್ಸ್ ಇಂಡಿಯಾ ಆಪರೇಷನ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ಅವರು, ನೂತನ ಘಟಕದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಕೌಶಲ ಉದ್ಯೋಗ ಸೃಷ್ಟಿ ಆಗಲಿವೆ ಎಂದರು.
ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ತೊಡಗಿಸಿಕೊಂಡಿರುವ ಎರಡು ಸಾವಿರಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಉದ್ಯಮಗಳು ರಾಜ್ಯದಲ್ಲಿವೆ. ಈ ವಲಯಕ್ಕೆ ರಾಜ್ಯದ ಕೊಡುಗೆ ಶೇ 65ರಷ್ಟಿದೆ. ಮುಂದಿನ ಐದು ವರ್ಷಗಳಲ್ಲಿ ₹45 ಸಾವಿರ ಕೋಟಿ ಹೂಡಿಕೆ ಆಕರ್ಷಿಸಿ 60 ಸಾವಿರ ಉದ್ಯೋಗ ಸೃಷ್ಟಿಸುವ ಗುರಿ ಇದೆ ಎಂದು ಅವರು ತಿಳಿಸಿದರು.
ರಾಜ್ಯದ ಹೊಸ ಕೈಗಾರಿಕಾ ನೀತಿಯಲ್ಲಿ ಹೈಟೆಕ್ ವಲಯಗಳಾಗಿರುವ ವೈಮಾಂತರಿಕ್ಷ, ರಕ್ಷಣೆ ಮತ್ತು ವಿದ್ಯುನ್ಮಾನಕ್ಕೆ ಒತ್ತು ಕೊಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು. ಭಾರತದಲ್ಲಿ ಕಾಲಿನ್ಸ್ ಕಂಪನಿಯ ಮೊದಲ ಘಟಕ ಇದಾಗಿದೆ. ಬೋಯಿಂಗ್, ಏರ್‌ಬಸ್ ವೈಮಾನಿಕ ಉದ್ಯಮಗಳಿಗೆ ಸೇವೆ ಒದಗಿಸಲಿದೆ ಎಂದರು.
ಐಟಿ,ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಾದ ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ ಮತ್ತು ಸಂಸದ ಡಾ.ಕೆ. ಸುಧಾಕರ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಹಾಗೂ ಕಾಲಿನ್ಸ್ ಏರೋಸ್ಪೇಸ್ ಕಂಪನಿ ಹಿರಿಯ ಉಪಾಧ್ಯಕ್ಷ ರಾಯ್ ಗಲಿಕ್ಸನ್ ಇದ್ದರು.
ಬೆಂಗಳೂರು ಜ್ಞಾನ ತಂತ್ರಜ್ಞಾನದ ನಗರವಾಗಿ ಗುರುತಿಸಿಕೊಂಡಿದೆ. ಏರೋಸ್ಪೇಸ್ ತಂತ್ರಜ್ಞಾನ ಕಂಪನಿಗಳು ಮತ್ತು ತಂತ್ರಜ್ಞರು ಬೆಂಗಳೂರನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು. ಏರೋಸ್ಪೇಸ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಪ್ರಸ್ತುತ ಕಂಪನಿಗೆ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡಲಿದೆ. ಇದರ ಜೊತೆಗೆ ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲೂ ಕೈಗಾರಿಕೆಗಳ ಸ್ಥಾಪನೆಗೆ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.