
ಆನೇಕಲ್: ತಾಲ್ಲೂಕಿನ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಹುಲಿಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪರ್ಕ ರಸ್ತೆಗಳು ಗುಂಡಿಮಯವಾಗಿದ್ದು, ಶೀಘ್ರವೇ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು ಎಂದು ಒತ್ತಾಯಿಸಿ ಅಪಾರ್ಟ್‌ಮೆಂಟ್ ನಿವಾಸಿಗಳು ಪಂಚಾಯಿತಿ ಮುಂಭಾಗದಲ್ಲಿ ಪ್ರತಿಭಟನೆ ಮೌನ ನಡೆಸಿದರು.
ಅಪಾರ್ಟ್‌ಮೆಂಟ್ ಮತ್ತು ಬಡಾವಣೆ ನಿವಾಸಿಗಳು ಫಲಕಗಳನ್ನು ಹಿಡಿದು ರಸ್ತೆಗುಂಡಿಗಳೇ ತುಂಬಿರುವ ರಸ್ತೆಯಲ್ಲಿ ಮೌನ ಪ್ರತಿಭಟನೆ ನಡೆಸಿದ ಬಳಿಕ ಪಂಚಾಯಿತಿ ಮುಂಭಾಗದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದರು.
ಹುಲಿಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಯೋ ಟೌನ್, ಸ್ಮೊಂಡೊವಿಲ್ಲೆ ಅಪಾರ್ಟ್‌ಮೆಂಟ್ ಸಂಪರ್ಕ ರಸ್ತೆ ಸೇರಿದಂತೆ ಹಲವು ರಸ್ತೆಗಳು ಕಳೆಪಯಿಂದ ಕೂಡಿದೆ. ಈ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟವಾಗಿದೆ. ಹಿರಿಯರು ಈ ರಸ್ತೆಯಲ್ಲಿ ಸಂಚರಿಸಲು ಭಯ ಪಡುತ್ತಾರೆ. ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ತೆರಳುವವರು ಹರಸಾಹಸ ಪಟ್ಟು ಓಡಾಡಬೇಕಾಗಿದೆ ಎಂದು ಪ್ರತಿಭಟನನಿರತರು ಅಳಲು ತೋಡಿಕೊಂಡರು.
ತುರ್ತು ಸಂದರ್ಭದಲ್ಲಿ ಸಂಚರಿಸಲು ಯೋಗ್ಯವಿಲ್ಲ. ಹಾಗಾಗಿ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು. ಅವಶ್ಯಕ ಮೂಲಸೌಲಭ್ಯಗಳನ್ನು ಕಲ್ಪಿಸಬೇಕಾದುದ್ದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಹಾಗಾಗಿ ಇವರಿಗೆ ಮಾಹಿತಿ ನೀಡಲು ಮೌನ ಪ್ರತಿಭಟನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಸ್ಥಳೀಯರಾದ ಅಂಜನ್ ಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.