ADVERTISEMENT

ಆನೇಕಲ್: ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2024, 6:07 IST
Last Updated 2 ಮಾರ್ಚ್ 2024, 6:07 IST
ಆನೇಕಲ್ ತಾಲ್ಲೂಕಿನ ಚಿಕ್ಕನಾಗಮಂಗಲ ಗ್ರಾಮದಲ್ಲಿ ವಿವೇಕ ಯೋಜನೆಯಡಿ ನಿರ್ಮಸಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಶಾಸಕ ಬಿ.ಶಿವಣ್ಣ ಉದ್ಘಾಟಿಸಿದರು
ಆನೇಕಲ್ ತಾಲ್ಲೂಕಿನ ಚಿಕ್ಕನಾಗಮಂಗಲ ಗ್ರಾಮದಲ್ಲಿ ವಿವೇಕ ಯೋಜನೆಯಡಿ ನಿರ್ಮಸಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಶಾಸಕ ಬಿ.ಶಿವಣ್ಣ ಉದ್ಘಾಟಿಸಿದರು   

ಆನೇಕಲ್: ತಾಲ್ಲೂಕಿನ ಶಾಂತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಾಗಮಂಗಲ ಗ್ರಾಮದಲ್ಲಿ ವಿವೇಕ ಯೋಜನೆಯಡಿ ನಿರ್ಮಸಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಶಾಸಕ ಬಿ.ಶಿವಣ್ಣ ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಬೇಕಾದರೆ ಮೂಲ ಸೌಕರ್ಯ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ತಾಲ್ಲೂಕಿನ ಸರ್ಕಾರಿ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗಿದೆ. ನೆರಳೂರು, ಕರ್ಪೂರು, ಅತ್ತಿಬೆಲೆಗಳಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಸರ್ಕಾರಿ ಶಾಲೆಗಳ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರಿದ್ದು ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಹಾಗಾಗಿ ಸರ್ಕಾರಿ ಶಾಲೆಗಳ ಬಗೆಗಿನ ಮನೋಭಾವನೆ ಬದಲಾಯಿಸಿಕೊಂಡು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡಬೇಕು ಎಂದರು.

ADVERTISEMENT

ಸರ್ಕಾರಿ ಶಾಲೆಗಳಲ್ಲಿ ನುರಿತ ಮತ್ತು ತರಬೇತಿ ಪಡೆದ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಈ ಶಾಲೆಗಳ ಬಗ್ಗೆ ಗ್ರಾಮ ಪಂಚಾಯಿತಿ, ಸಂಘ ಸಂಸ್ಥೆಗಳು, ಹಳೆಯ ವಿದ್ಯಾರ್ಥಿಗಳು ಕಾಳಜಿ ವಹಿಸಿ ನಮ್ಮ ಶಾಲೆ ಎಂಬ ಮನೋಭಾವನೆಯಿಂದ ಕೆಲಸ ಮಾಡಿದರೆ ಸರ್ಕಾರಿ ಶಾಲೆಗಳ ಚಿತ್ರಣವೇ ಬದಲಾಗುತ್ತದೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಲಕ್ಷಾಂತರ ಮಂದಿ ಉನ್ನತ ಉದ್ಯೋಗಗಳಲ್ಲಿದ್ದಾರೆ. ಕೆಎಎಸ್‌, ಐಎಎಸ್‌ ಅಧಿಕಾರಿಗಳಾಗಿದ್ದಾರೆ. ರಾಜಕೀಯ ಧುರಿಣರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಮಾಡಲು ವಿವಿಧ ಕಾರ್ಯಕ್ರಮ ತಾಲ್ಲೂಕಿನಲ್ಲಿ ರೂಪಿಸಲಾಗಿದೆ. ಸುಸಜ್ಜಿತ ಕಟ್ಟಡ, ಗ್ರಂಥಾಲಯ, ಪ್ರಯೋಗಾಲಯ, ಆಟದ ಮೈದಾನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಗ್ರಾಮಸ್ಥರು ಶ್ರಮಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಶಾಂತಿಪುರ ಗುರು ಮಾತನಾಡಿ, ಗ್ರಾಮದಲ್ಲಿ ನೂತನ ಶಾಲಾ ಕಟ್ಟಡ ನಿರ್ಮಾಣವಾಗಿದೆ. ಈ ಭಾಗದಲ್ಲಿ ಸರ್ಕಾರಿ ಶಾಲೆಗೆ ಹೆಚ್ಚಿನ ವಿದ್ಯಾರ್ಥಿಗಳು ದಾಖಲಾಗುತ್ತಿರುವುದು ಸಂತಸ ತಂದಿದೆ. ಶಾಲೆಗೆ ಬೇಕಾದ ಎಲ್ಲಾ ಸೌಲಭ್ಯ ಕಲ್ಪಿಸಿಕೊಡಲಾಗುವುದು. ಪೋಷಕರು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್‌.ವೈ.ರಮೇಶ್‌, ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎಂ.ಜಯಲಕ್ಷ್ಮೀ, ಜಿಲ್ಲಾ ಪಂಚಾಯಿತಿ ಸಹಾಯಕ ಅಭಿಯಂತರ ಚಿನ್ನಪ್ಪ ಹಂಚಿನಾಳ್‌, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೆಹಮಾನ್‌ ಷರಿಫ್‌, ಗಟ್ಟಹಳ್ಳಿ ಸೀನಪ್ಪ, ಸರ್ಪೇಶ್‌, ಸೋಮಣ್ಣ, ಮುನಿಯಪ್ಪ, ಗೋವಿಂದರಾಜು, ಇಸಿಓ ದತ್ತಗುರು, ಸಿಆರ್‌ಪಿ ಹಸಂತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.