ADVERTISEMENT

ಸಚಿವರೇ ಕೊಳೆಚೆ ನೀರಿನ ನದಿಗೊಂದು ಹೆಸರಿಡಿ: ಅರ್ಕಾವತಿ ನದಿ ಹೋರಾಟ ಸಮಿತಿ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 4:24 IST
Last Updated 2 ಆಗಸ್ಟ್ 2025, 4:24 IST
<div class="paragraphs"><p>ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಗೆ ಶುಕ್ರವಾರ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಅರ್ಕಾವತಿ ನದಿ ಹೋರಾಟ ಸಮಿತಿ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಸ್ವಾಗತಿಸಿದರು</p></div>

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಗೆ ಶುಕ್ರವಾರ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಅರ್ಕಾವತಿ ನದಿ ಹೋರಾಟ ಸಮಿತಿ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಸ್ವಾಗತಿಸಿದರು

   

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ವ್ಯಾಪ್ತಿಯಿಂದ ಹರಿದು ಬರುವ ಒಳಚರಂಡಿ ಕೊಳಚೆ ನೀರಿನ ನದಿಗೆ ಹೆಸರಿಡುವಂತೆ ಅರ್ಕಾವತಿ ನದಿ ಹೋರಾಟ ಸಮಿತಿ ಸದಸ್ಯರು ಶುಕ್ರವಾರ ಭಿತ್ತಿಪತ್ರ ಪ್ರದರ್ಶಿಸಿದರು.  

ತಾಲ್ಲೂಕಿನ ಬಾಶೆಟ್ಟಿಹಳ್ಳಿಗೆ ಶುಕ್ರವಾರ ಸಂಜೆ ಇಂದಿರಾ ಕ್ಯಾಂಟೀನ್‌ ಉದ್ಘಾಟನೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಎದುರು ಭಿತ್ತಿಪತ್ರ ಪ್ರದರ್ಶಿಸಿದರು.

ADVERTISEMENT

ಅರ್ಕಾವತಿ ನದಿ ಹೋರಾಟ ಸಮಿತಿ ಸದಸ್ಯ ವಸಂತಕುಮಾರ್‌, ಸತೀಶ್‌ ಮಾತನಾಡಿ, ಮಜರಾಹೊಸಹಳ್ಳಿ, ದೊಡ್ಡತುಮಕೂರು ಕೆರೆಗಳಿಗೆ ಬಾಶೆಟ್ಟಿಹಳ್ಳಿ, ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಿಂದ ಹರಿದು ಬರುತ್ತಿರುವ ಒಳಚರಂಡಿ ನೀರಿನಿಂದ ಈ ಭಾಗದ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ 17 ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ದೊರೆಯದಾಗಿವೆ. ದೊಡ್ಡಬಳ್ಳಾಪುರದಲ್ಲಿ ಕಾರ್ಯನಿರ್ವಹಿಸಬೇಕಿರುವ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಒಳಚರಂಡಿ ಕೊಳಚೆ ನೀರನ್ನು ಮೂರು ಹಂತದಲ್ಲಿ ಶುದ್ಧೀಕರಿಸುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಲೇ ಬರುತ್ತಿದ್ದರೂ ಕ್ರಮ ಕೈಗೊಳ್ಳದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಹೋರಾಟ ಸಮಿತಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಶಾಸಕ ಧೀರಜ್‌ ಮುನಿರಾಜ್‌, ಒಳಚರಂಡಿ ನೀರಿನ ಸಮಸ್ಯೆ ತೀವ್ರವಾಗಿದೆ. ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ₹57 ಕೋಟಿ ನೀಡಲು ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ ಶುದ್ಧೀಕರಣ ಘಟಕ ಸ್ಥಾಪನೆಗೆ ಜಮೀನು ಖರೀದಿಗೆ ಹಣದ ಕೊರತೆ ಇದೆ. ಈ ಎಲ್ಲ ಸಮಸ್ಯೆಗಳ ಕುರಿತಂತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಆಗಸ್ಟ್‌ 5 ರಂದು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ವಿವಿಧ ಇಲಾಖೆ ಹಾಗೂ ಹೋರಾಟ ಸಮಿತಿ ಸದಸ್ಯರ ಸಭೆ ನಡೆಸಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಮಾತನಾಡಿ, ಕೊಳಚೆ ನೀರಿನ ಶುದ್ಧೀಕರಣ ಸಮಸ್ಯೆ ಪರಿಹಾರಕ್ಕೆ ಸರ್ಕಾರದಿಂದ ಆಗಬೇಕಿರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.