ADVERTISEMENT

ಸಂವಿಧಾನದ ಕರ್ತವ್ಯ ಅರಿವು ಅಗತ್ಯ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 4:47 IST
Last Updated 28 ನವೆಂಬರ್ 2022, 4:47 IST
ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ನ್ಯಾಯಾಧೀಶ ಪ್ರೇಮ್‌ಕುಮಾರ್ ಮಾತನಾಡಿದರು
ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ನ್ಯಾಯಾಧೀಶ ಪ್ರೇಮ್‌ಕುಮಾರ್ ಮಾತನಾಡಿದರು   

ದೊಡ್ಡಬಳ್ಳಾಪುರ:ಸಮಾಜ ಕಲ್ಯಾಣ ಇಲಾಖೆಯಿಂದ ಭಾರತದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಶನಿವಾರ ನಡೆಯಿತು. ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಟಿ. ವೆಂಕಟರಮಣಯ್ಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಭಾರತದ ಜನತೆಯಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮ ನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್, ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಳದ ಅಧ್ಯಕ್ಷ ವೆಂಕಟೇಶ್ ಬಾಬು, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ. ಲಕ್ಷ್ಮೀನಾರಾಯಣ್ ಇದ್ದರು.

ADVERTISEMENT

ಸರ್ಕಾರಿ ಪ್ರಥಮದರ್ಜೆ ಕಾಲೇಜು:ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಮತ್ತು ಕಾನೂನು ಸೇವಾ ಪ್ರಾಧಿಕಾರದಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಪ್ರೇಮ್‌ಕುಮಾರ್ ಮಾತನಾಡಿ, ದೇಶದಲ್ಲಿ ನಾವು ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದರೆ ಅದು ನಮ್ಮ ಸಂವಿಧಾನದಿಂದ ಮಾತ್ರ ಸಾಧ್ಯವಾಗಿದೆ. ಸಂವಿಧಾನ ಹಕ್ಕುಗಳನ್ನು ನೀಡಿದೆ. ಅದರ ಜೊತೆಗೆ ಕರ್ತವ್ಯಗಳನ್ನೂ ತಿಳಿಸಿದೆ. ನಾವು ಶಿಕ್ಷಣ ಪಡೆದಾಗ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ. ಕಾನೂನು ಹಾಗೂ ಸಂವಿಧಾನದ ಅರಿವು ಎಲ್ಲರಿಗೂ ಇರಬೇಕು ಎಂದರು.

ವಕೀಲ ರೇಣುಕಾ ಮೂರ್ತಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್. ಶ್ರೀನಿವಾಸಯ್ಯ ಅಧ್ಯಕ್ಷತೆವಹಿಸಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಂ.ಎಸ್. ನಾಗರಾಜ್ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು. ಪ್ರಾಧ್ಯಾಪಕರಾದ ಡಾ.ಸದಾಶಿವ ರಾಮಚಂದ್ರಗೌಡ, ಸತೀಶ್, ಡಾ.ಪ್ರಕಾಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.