ADVERTISEMENT

ಬಾಲ ಕಾರ್ಮಿಕ ಪದ್ಧತಿ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಕಾನೂನುಗಳ ಕುರಿತು ಅರಿವು ಮೂಡಿಸಲು ಕ್ರಮ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 13:38 IST
Last Updated 12 ಜೂನ್ 2020, 13:38 IST
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಆಟೊ ಜಾಗೃತಿಗೆ ಜಿಲ್ಲಾದಿಕಾರಿ ಪಿ.ಎನ್‌.ರವೀಂದ್ರ ಚಾಲನೆ ನೀಡಿದರು
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಆಟೊ ಜಾಗೃತಿಗೆ ಜಿಲ್ಲಾದಿಕಾರಿ ಪಿ.ಎನ್‌.ರವೀಂದ್ರ ಚಾಲನೆ ನೀಡಿದರು   

ದೊಡ್ಡಬಳ್ಳಾಪುರ: ಬಾಲ ಕಾರ್ಮಿಕ ಪದ್ಧತಿಯಂತಹ ಸಮಾಜ ವಿರೋಧಿ ಆಚರಣೆ ಕುರಿತು ಇರುವ ಕಾನೂನುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು.

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ‌ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಆಯೋಜಿಸಲಾಗಿದ್ದ ಆಟೊ ಜನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸಾರ್ವಜನಿಕರು ಹಾಗೂ ಅಧಿಕಾರಿಗಳು ಒಗ್ಗೂಡಿ ಕಾರ್ಯನಿರ್ವಹಿಸಬೇಕಿದೆ ಎಂದರು.

ADVERTISEMENT

14 ವರ್ಷದ ಒಳಗಿನ ಯಾವುದೇ ಮಕ್ಕಳನ್ನು, ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದ ಒಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಬಾರದು. ಮಕ್ಕಳಿಂದ ದುಡಿಸಿಕೊಂಡವರಿಗೆ 6 ತಿಂಗಳಿಂದ ಎರಡು ವರ್ಷದವರೆಗ ಜೈಲು ಶಿಕ್ಷೆ ಮತ್ತು ₹ 20 ಸಾವಿರದಿಂದ 50 ಸಾವಿರದವರೆಗೂ ದಂಡ ವಿಧಿಸಲು ಕಾನೂನಿನಲ್ಲಿ‌ ಅವಕಾಶವಿದೆ ಎಂದರು.

ಬಾಲ್ಯಾವಸ್ಥೆಯಲ್ಲಿ ಮಕ್ಕಳಿಗೆ ಒಳ್ಳೆಯ ಆರೋಗ್ಯ ಮತ್ತು ಶಿಕ್ಷಣ ನೀಡಬೇಕು. ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳನ್ನು ಕೆಲಸಕ್ಕೆ ದೂಡಿದರೆ, ಇಂತಹ ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಕುಗ್ಗಲಿದ್ದಾರೆ. ಬಾಲ ಕಾರ್ಮಿಕ ವ್ಯವಸ್ಥೆ ನಿರ್ಮೂಲನೆಗಾಗಿ ಪ್ರತಿಯೊಬ್ಬರು ಸಹಕರಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನೆರವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪುಷ್ಪ.ಜಿ.ರಾಯರ್, ಸಹಾಯಕ ಕಾರ್ಮಿಕ ಆಯುಕ್ತ ಸಂತೋಷ್ ‌ಹಿಪ್ಪರಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎನ್.ಎಸ್.ಮಹೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಎಸ್‌.ಸುಬ್ಬಾರಾವ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ನಾಗೇಶ್, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಅನಿತಾಲಕ್ಷ್ಮಿ, ಕಾರ್ಮಿಕ ನಿರೀಕ್ಷಕ ಪ್ರದೀಪ್, ಸುರೇಶ್, ಸಂದೀಪ್ ಸೇವಾ ನಿಲಯಂ ಸಂಸ್ಥೆ ವ್ಯವಸ್ಥಾಪಕ ಪ್ರಭಾಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.