ADVERTISEMENT

ಬನ್ನೇರುಘಟ್ಟ: ಸೂರಿಲ್ಲದವರಿಗೆ ಸೂರು ಕಲ್ಪಿಸಲು 20 ಎಕರೆ ಜಾಗ ಮೀಸಲು

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 2:24 IST
Last Updated 12 ಫೆಬ್ರುವರಿ 2026, 2:24 IST
ಆನೇಕಲ್‌ ತಾಲ್ಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನೀರಿನ ಸರಬರಾಜು ಮತ್ತು ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಸಿ.ಮಂಜುನಾಥ್‌ ಉದ್ಘಾಟಸಿದರು
ಆನೇಕಲ್‌ ತಾಲ್ಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನೀರಿನ ಸರಬರಾಜು ಮತ್ತು ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಸಿ.ಮಂಜುನಾಥ್‌ ಉದ್ಘಾಟಸಿದರು   

ಬನ್ನೇರುಘಟ್ಟ (ಆನೇಕಲ್‌): ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನೀರಿನ ಸರಬರಾಜು ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಬುಧವಾರ ನಡೆಯಿತು.

ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಅಂಗವಿಕಲರಿಗೆ ಅಗತ್ಯ ಸಲಕರಣೆ ವಿತರಣೆ, ಸ್ತ್ರೀಶಕ್ತಿ ಸಂಘಗಳ ಮಹಿಳೆಯರಿಗೆ ಸಾಲ ಸೌಲಭ್ಯ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬನ್ನೇರುಘಟ್ಟ ಗ್ರಾಮದ ಪ್ರಮುಖ ಬೀದಿಗಳಲ್ಲಿ 10ಕ್ಕೂ ಹೆಚ್ಚು ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಿ ಚಂಪಕಧಾಮ ದೇವಾಲಯದ ಮುಂಭಾಗದಲ್ಲಿ ಹಾಕಲಾಗಿದ್ದ ವೇದಿಕೆಯಲ್ಲಿ ಸೌಲಭ್ಯ ವಿತರಿಸಲಾಯಿತು.

ADVERTISEMENT

ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಸಿ.ಮಂಜುನಾಥ್‌ ಮಾತನಾಡಿ, ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಕಾಡಂಚಿನ ಗ್ರಾಮಗಳಿಂದ ಕೂಡಿದೆ. ಈ ಗ್ರಾಮಗಳಿಗೆ ಕಾವೇರಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಿ ಉದ್ಘಾಟಿಸಲಾಗಿದೆ. ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯ ಕಡಿಮೆ ಮಾಡಬೇಕೆಂಬ ಪ್ರಕರಣವಿದ್ದು ಸೂಕ್ಷ್ಮ ವಲಯವು ಈಗಿರುಷ್ಟೇ ಇರುವುದರಿಂದ ಈ ಭಾಗದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಸೂರಿಲ್ಲದವರಿಗೆ ಸೂರು ಕಲ್ಪಿಸಲು ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 20 ಎಕರೆ ಜಾಗ ಮೀಸಲಿಡಲಾಗಿದೆ. ಹಕ್ಕಿಪಿಕ್ಕಿ ಕಾಲೋನಿಗೆ ಸಾರ್ವಜನಿಕರಿಗೆ ಹಕ್ಕುಪತ್ರ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಬನ್ನೇರುಘಟ್ಟದವರೆಗೂ ಮೆಟ್ರೋ ವಿಸ್ತರಣೆಯಾಗುವ ನಿಟ್ಟಿನಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದರು.

ಪಿಡಿಒ ರಮೇಶ್‌ ಮಾತನಾಡಿ, ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಸಮಿತಿಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧವಾಗಿದ್ದು ಶೀಘ್ರದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ವಿತರಿಸಲಿದ್ದಾರೆ. ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸೌಲಭ್ಯ ತಲುಪಿಸಲಾಗಿದೆ ಎಂದರು.

ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥ್‌, ಎಡಿಎಲ್‌ಆರ್‌ ಮದನ್‌, ಸಿಡಿಪಿಒ ಮಹೇಶ್‌, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್‌, ವಿನೋದ್‌ ಕುಮಾರ್‌, ಅಚ್ಯುತರಾಜು, ನವೀನ್‌, ಸುಮಿತ್ರಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.