ADVERTISEMENT

ದೇವನಹಳ್ಳಿ ವಿಮಾನ ನಿಲ್ದಾಣ: ಖಾಸಗಿ ಟ್ಯಾಕ್ಸಿ ಚಾಲಕರಿಗೆ ಪ್ರತ್ಯೇಕ ಮೊಬೈಲ್ ಆ್ಯಪ್

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 23:36 IST
Last Updated 29 ಜನವರಿ 2026, 23:36 IST
ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿರಿಗೆ ಉಂಟಾಗುತ್ತಿರುವ ಸಮಸ್ಯೆ ಕುರಿತು ಚಾಲಕರ ಒಕ್ಕೂಟದ ಪದಾಧಿಕಾರಿಗಳು ಸಂಸದ ಡಾ. ಕೆ. ಸುಧಾಕರ್ ಅವರನ್ನು ಭೇಟಿ ಮಾಡಿ ವಿಮಾನ ನಿಲ್ದಾಣದ ಪಾರ್ಕಿಂಗ್ ನಿಯಮಗಳ ಕುರಿತು ಚರ್ಚಿಸಿದರು
ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿರಿಗೆ ಉಂಟಾಗುತ್ತಿರುವ ಸಮಸ್ಯೆ ಕುರಿತು ಚಾಲಕರ ಒಕ್ಕೂಟದ ಪದಾಧಿಕಾರಿಗಳು ಸಂಸದ ಡಾ. ಕೆ. ಸುಧಾಕರ್ ಅವರನ್ನು ಭೇಟಿ ಮಾಡಿ ವಿಮಾನ ನಿಲ್ದಾಣದ ಪಾರ್ಕಿಂಗ್ ನಿಯಮಗಳ ಕುರಿತು ಚರ್ಚಿಸಿದರು   

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿಗೊಂಡಿರುವ ಹೊಸ ಪಾರ್ಕಿಂಗ್ ನಿಯಮಗಳಿಂದ ತೊಂದರೆ ಅನುಭವಿಸುತ್ತಿರುವ ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಕುರಿತು ಖಾಸಗಿ ಟ್ಯಾಕ್ಸಿ ಚಾಲಕರ ಒಕ್ಕೂಟದ ಪದಾಧಿಕಾರಿಗಳು ಸಂಸದ ಡಾ. ಕೆ. ಸುಧಾಕರ್ ಅವರನ್ನು ಭೇಟಿ ಮಾಡಿ ಈಚೆಗೆ ಚರ್ಚಿಸಿದರು.

ಭೇಟಿಯ ವೇಳೆ ಮಾತನಾಡಿದ ಡಾ. ಸುಧಾಕರ್, ಹೊಸ ಪಾರ್ಕಿಂಗ್ ನಿಯಮಗಳಿಂದ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಖಾಸಗಿ ಟ್ಯಾಕ್ಸಿ ಚಾಲಕರಿಗೆ ಪ್ರತ್ಯೇಕ ಮೊಬೈಲ್ ಆಪ್ ಅಭಿವೃದ್ಧಿಪಡಿಸುವುದು ಹಾಗೂ ಅಗತ್ಯ ಸ್ಥಳಾವಕಾಶ ಒದಗಿಸುವುದಾಗಿ ವಿಮಾನ ನಿಲ್ದಾಣದ ಆಡಳಿತ ವರ್ಗ ತೀರ್ಮಾನಿಸಿದೆ ತಿಳಿಸಿದರು.

ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಹಿನ್ನೆಲೆಯಲ್ಲಿ ಎರಡು ವಾರಗಳ ಹಿಂದೆ ವಿಮಾನ ನಿಲ್ದಾಣದ ಆಡಳಿತ, ಜಿಲ್ಲಾಡಳಿತ, ಪೊಲೀಸ್ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಂಧಾನ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಚಾಲಕರ ಸಮಸ್ಯೆಗಳನ್ನು ವಿಸ್ತೃತವಾಗಿ ಚರ್ಚಿಸಿ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು ಎಂದು ಹೇಳಿದರು.

ADVERTISEMENT

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಖುದ್ದಾಗಿ ಭೇಟಿಯಾಗಿ ಈ ಸಮಸ್ಯೆಯನ್ನು ಅವರ ಗಮನಕ್ಕೂ ತರಲಾಗಿದೆ. ನಂತರ ಸಚಿವರು ಸಹ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ ಎಂದರು.

ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವವರೆಗೂ ತಮ್ಮ ಬೆಂಬಲ ಮುಂದುವರಿಯಲಿದೆ. ಅಗತ್ಯ ಬಿದ್ದರೆ ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾಗಿ ಸಮಸ್ಯೆಯನ್ನು ಅವರ ಗಮನಕ್ಕೂ ತರಲಾಗುವುದು. ಜೊತೆಗೆ ಮುಂಬರುವ ಬಜೆಟ್ ಅಧಿವೇಶನದಲ್ಲಿ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.