ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡುವ ಪ್ರಸ್ತಾಪ ಜುಲೈ2 ರಂದು ನಂದಿಬೆಟ್ಟದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗಾಗಿ ಮಂಡಿಸಲಾಗುತ್ತಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣಗೊಂಡ ನಂತರ ಈಗ ಹೆಸರಿನ ಬದಲಾವಣೆ ಸರದಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯದ್ದಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರಿನಲ್ಲಿ ಯಾವುದೇ ಐತಿಹಾಸಿಕ ಹಿನ್ನೆಲೆ ಇಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಹೇಳಿದ್ದಾರೆ.
ಬೆಂಗಳೂರು ಜಿಲ್ಲೆಯಿಂದ 1986ರ ಜುಲೈ 31ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಪ್ರತ್ಯೇಕಿಸಲಾಯಿತು. ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ,ರಾಮನಗರ,ಮಾಗಡಿ,ಕನಕಪುರ,ಚನ್ನಪಟ್ಟಣ ತಾಲ್ಲೂಕು ಒಳಗೊಂಡು ಪ್ರತ್ಯೇಕ ಜಿಲ್ಲೆ ಅಸ್ತಿತ್ವಕ್ಕೆ ಬಂತು.
2007ರ ಆಗಸ್ಟ್ 3ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮತ್ತೇ ರಾಮನಗರ ಜಿಲ್ಲೆಯಾಗಿ ವಿಭಜಿಸಲಾಗಿತ್ತು. ರಾಮನಗರ,ಮಾಗಡಿ,ಕನಕಪುರ,ಚನ್ನಪಟ್ಟಣ ತಾಲ್ಲೂಕುಗಳನ್ನು ಈ ಜಿಲ್ಲೆ ಒಳಗೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಇದುವರೆಗೂ ಯಾವುದೇ ಜಿಲ್ಲಾ ಕೇಂದ್ರ ಇಲ್ಲ. ಹಾಗಾಗಿ ಜಿಲ್ಲಾ ಕೇಂದ್ರವೇ ಇಲ್ಲದ ರಾಜ್ಯದ ಏಕೈಕ ಜಿಲ್ಲೆ ಬೆಂಗಳೂರು ಗ್ರಾಮಾಂತರ.
ಅಂತರರಾಷ್ಟ್ರೀಯ ಮಟ್ಟದಲ್ಲಿ ‘ಬೆಂಗಳೂರು’ ಹೆಸರು ಹೆಚ್ಚು ಪ್ರಚಲಿತ ಮತ್ತು ಚಿರಪರಿಚಿತವಾಗಿದೆ. ಇದರಿಂದಾಗಿಯೇ ರಾಮನಗರ ಬದಲು ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಗ್ರಾಮಾಂತರದ ಬದಲು ಬೆಂಗಳೂರು ಉತ್ತರ ಎಂದಾದರೆ ‘ಬ್ರಾಂಡ್’ ನಿರ್ಮಾಣವಾಗುತ್ತದೆ ಎನ್ನುವ ಯೋಚನೆ ಸರ್ಕಾರದ್ದು. ಹೆಸರು ಬದಲಾದ ತಕ್ಷಣ ಆರ್ಥಿಕ ಚಟುವಟಿಕೆ ಬದಲಾಗುವುದಿಲ್ಲ ಎನ್ನುವುದು ಸಾರ್ವಜನಿಕರ ಅಭಿಪ್ರಾಯ.
ಪ್ರಸ್ತುತ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ದೇವನಹಳ್ಳಿ,ಹೊಸಕೋಟೆ,ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕುಗಳು ಇವೆ. ಈಗಾಗಲೇ ಬೆಂಗಳೂರು ವಿಶ್ವ ವಿದ್ಯಾಲಯವನ್ನು ವಿಭಜನೆ ಮಾಡಿದ ಸಂದರ್ಭದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಒಳಗೊಂಡಂತೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.