ADVERTISEMENT

ಬೆಂಗಳೂರು ಉತ್ತರ ಜಿಲ್ಲೆಯಲ್ಲಿ 269 ಅಪೌಷ್ಟಿಕ ಮಕ್ಕಳು: ಜಿಲ್ಲಾಧಿಕಾರಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 2:31 IST
Last Updated 9 ಡಿಸೆಂಬರ್ 2025, 2:31 IST
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಮಾತನಾಡಿದರು
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಮಾತನಾಡಿದರು   

ದೇವನಹಳ್ಳಿ: ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ ಅಪೌಷ್ಟಿಕತೆ ನಿವಾರಣೆಗೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೋಮವಾರ ನಡೆದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 269 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆ ಮಕ್ಕಳಿಗೆ ಸೂಕ್ತ ಆಹಾರ, ಆರೋಗ್ಯ ಸೇವೆ ನೀಡಬೇಕು. ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೌಷ್ಠಿಕ ಆಹಾರಗಳನ್ನು ಸಮಯಕ್ಕೆ ಸರಿಯಾಗಿ ವಿತರಿಸಬೇಕು. ವ್ಯರ್ಥ ಮಾಡದಂತೆ ನೋಡಿಕೊಳ್ಳಬೇಕು ಎಂದು ಸಿಡಿಪಿಒಗಳಿಗೆ ಸೂಚಿಸಿದರು.

ADVERTISEMENT

ಜಿಲ್ಲೆಯಲ್ಲಿ ಒಟ್ಟು 1,277 ಅಂಗನವಾಡಿ ಕೇಂದ್ರಗಳಿವೆ, 999 ಸ್ವಂತ ಕಟ್ಟಡದಲ್ಲಿ, ಮೂರು ಪಂಚಾಯಿತಿ ಕಟ್ಟಡದಲ್ಲಿ, ಸಮುದಾಯ ಭವನದಲ್ಲಿ 53, ಶಾಲೆಗಳಲ್ಲಿ 83 ಹಾಗೂ ಬಾಡಿಗೆ ಕಟ್ಟಡಗಳಲ್ಲಿ 139 ಅಂಗನವಾಡಿ ಕಾರ್ಯನಿರ್ವಹಿಸುತ್ತಿವೆ. ಬಾಕಿ ಉಳಿದಿರುವ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಕೂಡಲೇ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಶೈಲ್ ಭೀಮಸೇನ ಭಾಗಡಿ ಮಾತನಾಡಿ, ಸಾಂತ್ವನ ಕೇಂದ್ರಗಳಲ್ಲಿ ಬಗೆಹರಿಸಲಾಗದ ಪ್ರಕರಣಗಳನ್ನು ಸಿಡಿಪಿಒಗಳು ಆದಷ್ಟು ಬೇಗ ಬಗೆಹರಿಸಲು ಪ್ರಯತ್ನ ಮಾಡಬೇಕು. ಇಲ್ಲವಾದಲ್ಲಿ, ಅಂತಹ ಪ್ರಕರಣಗಳನ್ನು ಬಗೆಹರಿಸಲು 15100 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎನ್.ಅನುರಾಧ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕ ಕೃಷ್ಣ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಂ.ಮುದ್ದಣ್ಣ ಉಪಸ್ಥಿತರಿದ್ದರು.

32 ಕೌಟುಂಬಿಕ ದೌರ್ಜನ್ಯ ಪ್ರಕರಣ

ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ 2025-26 ಸಾಲಿನ ಜುಲೈನಿಂದ ನವೆಂಬರ್ ವರೆಗೆ 32 ಪ್ರಕರಣ ದಾಖಲಾಗಿದ್ದು ಎಂಟು ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು. ಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ಸಕಾಲದಲ್ಲಿ ಆಪ್ತ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ದೌರ್ಜನ್ಯಗೊಳಗಾದ ಮಹಿಳೆಯರಿಗೆ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ನ್ಯಾಯ ಒದಗಿಸಬೇಕೆಂದು ನಿರ್ದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.