ಆನೇಕಲ್: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ರಸ್ತೆ ದಟ್ಟಣೆ ಸಮಸ್ಯೆ ಪರಿಹರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಗಳ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಯಿಂದಾಗಿ ರಸ್ತೆ ದಟ್ಟಣೆ ಹೆಚ್ಚಾಗಿರುವ ಬಗ್ಗೆ ಅ.12ರಂದು 'ಒಂದು ಕಿ.ಮೀ ಸಂಚಾರಕ್ಕೆ ಬೇಕು ಎರಡು ತಾಸು'ಅಡಿಬರಹದಲ್ಲಿ ‘ಪ್ರಜಾವಾಣಿ’ಯಲ್ಲಿ ಲೇಖನ ಪ್ರಕಟವಾಗಿತ್ತು.
ಈ ಸಂಬಂಧ ಹೆಬ್ಬಗೋಡಿ ನಗರಸಭೆ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 44 ಹೆಬ್ಬಗೋಡಿ-ಚಂದಾಪುರ-ಅತ್ತಿಬೆಲೆ ಸಂಚಾರ ದಟ್ಟಣೆ ಕಡಿಮೆ ಮಾಡಲು ಕ್ರಮ ಮತ್ತು ರಸ್ತೆ ಸುರಕ್ಷತೆ ನಿಟ್ಟಿನಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸರು ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ತಾಲ್ಲೂಕಿನಲ್ಲಿ ಐದು ಕೈಗಾರಿಕಾ ಪ್ರದೇಶಗಳಿರುವುದರಿಂದ ಹೆಚ್ಚಿನ ಜನಸಂಖ್ಯೆ ಇದೆ. ಪ್ರತಿನಿತ್ಯ ಸಾವಿರಾರು ವಾಹನಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತವೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ಸಂಚಾರ ಪೊಲೀಸ್ ಠಾಣೆ ಸ್ಥಾಪಿಸಲು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಗುವುದು. ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಕೆಆರ್‌ಐಡಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ಪ್ರಗತಿಯಲ್ಲಿದೆ. ವಿಸ್ತರಣೆ ಮಾಡುವ ಸಂದರ್ಭದಲ್ಲಿ ರಸ್ತೆಯಲ್ಲಿ ಡೆಬ್ರಿ ಬೀಳದಂತೆ ಕ್ರಮ ವಹಿಸಬೇಕು. ತಾಲ್ಲೂಕಿನ ನಾಲ್ಕು ಕಡೆ ವಾಹನಗಳ ಓವರ್ ಪಾಸ್ ನಿರ್ಮಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಹುಸ್ಕೂರು, ಗುಡ್ಡಹಟ್ಟಿ, ಚಂದಾಪುರ ಮತ್ತು ಬಳಗಾರನಹಳ್ಳಿಯಲ್ಲಿ ವಾಹನಗಳ ಓವರ್ ಪಾಸ್ ನಿರ್ಮಿಸಲಾಗುವುದು ಎಂದರು.
ರಾಷ್ಟ್ರೀಯ ಹೆದ್ದಾರಿ 44ರ ವ್ಯಾಪ್ತಿಯಲ್ಲಿ ಹೆಬ್ಬಗೋಡಿ ಸೇರಿದಂತೆ ಮೂರು ಕಡೆ ಸ್ಕೈವಾಕ್ ನಿರ್ಮಿಸಲು ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗಿದೆ. ನಾರಾಯಣ ಹೃದಯಾಲಯ ರಸ್ತೆಯಲ್ಲಿ ಪ್ರತಿನಿತ್ಯ 3-4 ಸಾವಿರ ವಾಹನಗಳು ಸಂಚರಿಸುತ್ತವೆ. ಜಿಗಣಿ ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಬೊಮ್ಮಸಂದ್ರ ಸೇರಿದಂತೆ ಎರಡು ಕಡೆ ರಾಷ್ಟ್ರೀಯ ಹೆದ್ದಾರಿ ನಿರ್ಗಮನ ಪಥ ನಿರ್ಮಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಟ್ಟಣೆ ಉಂಟಾಗದಂತೆ ಕ್ರಮ ವಹಿಸಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪೆಟ್ರೋಲಿಂಗ್ ಮತ್ತು ಪೊಲೀಸ್ ಗಸ್ತು ಹೆಚ್ಚು ಮಾಡಬೇಕು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಟ್ಟಣೆ ತಪ್ಪಿಸಬಹುದಾಗಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಸಬ್‌ವೇಗಳಲ್ಲಿ ಸ್ಥಳೀಯ ಸಂಸ್ಥೆಗಳು ಸ್ವಚ್ಛತೆಗೆ ಕ್ರಮ ವಹಿಸಬೇಕು. ಹೆಬ್ಬಗೋಡಿ ಸೇರಿದಂತೆ ಸಬ್‌ವೇಗಳಲ್ಲಿ ಪೌರಕಾರ್ಮಿಕರನ್ನು ನಿಯೋಜಿಸಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹೆಬ್ಬಗೋಡಿ ಕೆರೆ ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.
ತಾಲ್ಲೂಕಿನಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ಶೀಘ್ರದಲ್ಲಿ ಕರೆಯಲಾಗುವುದು. ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಪ್ರಗತಿ ವರದಿ ಅಧಿಕಾರಿಗಳಿಂದ ಪಡೆಯಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯತೀಶ್, ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕಿ ಅರ್ಚನಾ, ಡಿವೈಎಸ್ಪಿ ಮೋಹನ್ ಕುಮಾರ್, ಪೌರಾಡಳಿತ ಇಲಾಖೆ ಮಾಧವಿ, ಹೆಬ್ಬಗೋಡಿ ನಗರಸಭೆ ಅಧ್ಯಕ್ಷ ಸುಜಾತ ಹರೀಶ್, ಉಪಾಧ್ಯಕ್ಷ ಕೆ.ಪಿ.ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಜಯರಾಮ್, ನಗರಸಭೆ ಪೌರಾಯುಕ್ತ ಬಿ.ಎಲ್.ರಾಜೇಂದ್ರ, ಚಂದಾಪುರ ಪುರಸಭೆ ಅಧ್ಯಕ್ಷೆ ಶಾರದ ವರದರಾಜು, ಮುಖ್ಯಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.
ಸಾರ್ವಜನಿಕರ ಆಕ್ರೋಶ
ತಾಲ್ಲೂಕಿನ ಚಂದಾಪುರದ ರೈಲ್ವೆ ಸೇತುವೆ ಬಳಿ ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು ಭೇಟಿ ನೀಡಿದ ಹಿನ್ನೆಲೆಯಲ್ಲಿ ಸ್ಥಳೀಯರು ತಮ್ಮ ಸಮಸ್ಯೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು. ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಹಾಗಾಗಿ ಕಾಮಗಾರಿಗೆ ವೇಗ ನೀಡಬೇಕು ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.