
ವಿಜಯಪುರ (ದೇವನಹಳ್ಳಿ): ಮತ ಕಳವು ವಿರೋಧಿಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಸಹಿ ಮಾಡುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಬಿಜೆಪಿ ಮತಗಳ್ಳತನ ಮೂಲಕ ಅಕ್ರಮವಾಗಿ ಅಧಿಕಾರಕ್ಕೆ ಬಂದು ಆಡಳಿತ ನಡೆಸುತ್ತಿದೆ. ಕಳೆದ ಲೋಕಾಸಭೆ ಚುನಾವಣೆಯಲ್ಲಿ ಸಾರ್ವಜನಿಕ ಅಭಿಪ್ರಾಯ, ಮಾಧ್ಯಮಗಳ ಅಭಿಪ್ರಾಯ ಎಲ್ಲವೂ ಸೇರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಬಿಜೆಪಿ ಮತಗಳ್ಳತನದಿಂದ ಅಧಿಕಾರಕ್ಕೆ ಬಂತು. ದೇಶದ ನೂರಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಆಗಿರುವ ಮತಗಳ್ಳತನದಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಆರೋಪಿಸಿದರು.
ರಾಷ್ಟ್ರೀಯ ಚುನಾವಣಾ ಆಯೋಗ ನಿಷ್ಪಕ್ಷಪಾತದಿಂದ ಮುಂಬರುವ ಚುನಾವಣೆಗಳನ್ನು ನಡೆಸುವಂತಾಗಲು ಸಹಿ ಸಂಗ್ರಹ ಅಭಿಯಾನವನ್ನು ಕಾಂಗ್ರೆಸ್ ಹಮ್ಮಿಕೊಂಡಿದ್ದು, ಮತ ಕಳವು ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಹಿ ಸಂಗ್ರಹಿಸಬೇಕು ಎಂದು ಹೇಳಿದರು.
ಪ್ರತಿ ಬೂತ್ ಮಟ್ಟದಲ್ಲಿಯೂ 300 ಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿಸುವ ಮೂಲಕ ದೇವನಹಳ್ಳಿ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿಸಬೇಕಾಗಿದೆ ಎಂದು ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರು ವೆಂಕಟೇಶ್ ಹೇಳಿದರು.
ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಹೆಚ್ಚಿನ ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು ಸಾಧಿಸಲು ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಆರ್.ವಿ.ವೆಂಕಟೇಶ್ ತಿಳಿಸಿದರು.
ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್, ಗ್ಯಾರಂಟಿ ಅನುಷ್ಠಾನಗಳ ಸಮಿತಿ ಅಧ್ಯಕ್ಷ ಬಿ.ರಾಜಣ್ಣ, ಬಯಪ್ಪ ಅಧ್ಯಕ್ಷ ಶಾಂತಕುಮಾರ್, ಸದಸ್ಯ ಪ್ರಸನ್ನ ಕುಮಾರ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ.ಮಂಜುನಾಥ್, ಪುರಸಭೆಯ ಅಧ್ಯಕ್ಷೆ ಭವ್ಯಾ ಮಹೇಶ್, ಅನಂತಕುಮಾರಿ ಚಿನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.