ADVERTISEMENT

ಸಮ್ಮೇಳನದಲ್ಲಿ ಕಪ್ಪುಪಟ್ಟಿ ಪ್ರದರ್ಶನ

ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ.ಸುಧಾಕರ್ ಅವರ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 2:52 IST
Last Updated 4 ಜನವರಿ 2021, 2:52 IST
ವಿಜಯಪುರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ 23ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಪ್ಪು ಪಟ್ಟಿ ಪ್ರದರ್ಶಿಸಿ ಪ್ರತಿಭಟಿಸಿದ ವಿವಿಧ ಸಂಘಟನೆಗಳು
ವಿಜಯಪುರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ 23ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಪ್ಪು ಪಟ್ಟಿ ಪ್ರದರ್ಶಿಸಿ ಪ್ರತಿಭಟಿಸಿದ ವಿವಿಧ ಸಂಘಟನೆಗಳು   

ವಿಜಯಪುರ: 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸದೇ 23ನೇ ಸಮ್ಮೇಳನ ನಡೆಸುವುದನ್ನು ಖಂಡಿಸಲಾಗುವುದು ಎಂದು ದೊಡ್ಡಬಳ್ಳಾಪುರ ಕನ್ನಡ ಪರ ಸಂಘಟನೆಗಳು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಕಪ್ಪು ಬಾವುಟ ಪ್ರದರ್ಶನ ಮಾಡಿ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ.ಸುಧಾಕರ್ ವಿರುದ್ಧ ಧಿಕ್ಕಾರ ಕೂಗಿದರು.

ಪಟ್ಟಣದ ಗಾಂಧಿಚೌಕದಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ 23ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿತ್ತು. ಬೆಳಿಗ್ಗೆ ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಕಲಾ ತಂಡಗಳೊಂದಿಗೆ ನಡೆಯಿತು. ವೇದಿಕೆ ಕಾರ್ಯಕ್ರಮದಲ್ಲಿ ಸಮ್ಮೇಳನಾಧ್ಯಕ್ಷರ ಪರಿಚಯ ಮತ್ತು ನಾಡಗೀತೆ, ರೈತಗೀತೆ, ಹಾಗೂ ಭರತ ನಾಟ್ಯದೊಂದಿಗೆ ಆರಂಭವಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ.ಸುಧಾಕರ್, ಪ್ರಾಸ್ತಾವಿಕ ನುಡಿ ಆರಂಭಿಸುತ್ತಿದ್ದಂತೆ ವೇದಿಕೆ ಮುಂಭಾಗದಲ್ಲಿ ಎದ್ದು ನಿಂತ ಹೋರಾಟಗಾರರು ಕಪ್ಪುಪಟ್ಟಿ ಪ್ರದರ್ಶನ ಮಾಡಿ, ಧಿಕ್ಕಾರ ಕೂಗಿದರು. ಕೆಲಕಾಲ ವೇದಿಕೆ ಮುಂಭಾಗದಲ್ಲಿ ಪ್ರತಿಭಟನೆಯನ್ನೂ ನಡೆಸಿದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷರು ಸರ್ವಾಧಿಕಾರಿ ಧೋರಣೆ ಮಾಡುತ್ತಿದ್ದಾರೆ. 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೊರೊನಾ ಸಂಕಷ್ಟದಿಂದಾಗಿ ಮುಂದೂಡಲಾಗಿತ್ತು. ಜ.28ಕ್ಕೆ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದ್ದು, ಅದನ್ನು ನೆರವೇರಿಸದೆ ತರಾತುರಿಯಲ್ಲಿ ಸಮ್ಮೇಳನ ಮಾಡಲಾಗುತ್ತಿದೆ. ಈ ರೀತಿಯಾಗಿ 22ನೇ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಿಗೆ ಅಪಮಾನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೊಡ್ಡಬಳ್ಳಾಪುರ ಸಾಹಿತ್ಯ ಪರಿಷತ್‌ ನಿರ್ದೇಶಕ ವಿ.ಕಿರಣ್ ಮಾತನಾಡಿ, ಜಿಲ್ಲಾ ಕಸಾಪ ಘಟಕದಿಂದ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗುತ್ತಿದೆ. ಜಿಲ್ಲಾ ಘಟಕದ ಅಧ್ಯಕ್ಷ ಏಕಚಕ್ರಾಧಿಪತ್ಯ ನಡೆಸುತ್ತಿದ್ದಾರೆ. 22ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಂದ 23ನೇ ಸಮ್ಮೇಳನಾಧ್ಯಕ್ಷರಿಗೆ ಕನ್ನಡದ ಬಾವುಟ ಹಸ್ತಾಂತರಿಸುವುದು ಶಿಷ್ಟಾಚಾರ, ಸಮ್ಮೇಳನವೇ ನಡೆಯದೇ ಇರುವಾಗ ಹಸ್ತಾಂತರ ಮಾಡುವವರು ಯಾರು, ಈ ವಿಚಾರ ಅವರಿಗೆ ಗೊತ್ತಿದ್ದರೂ ತ.ನಾ.ಪ್ರಭುದೇವ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ. ಸುಧಾಕರ ಮಾತನಾಡಿ, ’ಶಿಷ್ಟಾಚಾರ ಉಲ್ಲಂಘನೆ ಆಗಿದ್ದರೆ ನಾನು ಆದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೆನೆ ಎಂದು ಹೇಳಿದ ಅವರು, ಇದೇ ತಿಂಗಳು 28ಕ್ಕೆ ಸಾಹಿತ್ಯ ಸಮೇಳನ ದೊಡ್ಡಬಳ್ಳಾಪುರದಲ್ಲಿ ಮಾಡುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.