ADVERTISEMENT

ಕರ್ನಾಟಕ ಬಂದ್‌ಗೆ ಆನೇಕಲ್‌ನಲ್ಲಿ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 7:24 IST
Last Updated 29 ಸೆಪ್ಟೆಂಬರ್ 2020, 7:24 IST
ಆನೇಕಲ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು
ಆನೇಕಲ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು   

ಆನೇಕಲ್: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಮಾಡಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ತಾಲ್ಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ಬಂದಿದೆ.

ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸೋಮವಾರ ವಿವಿಧ ಸಂಘಟನೆಗಳ ಮುಖಂಡರುಗಳು ಆನೇಕಲ್‌, ಅತ್ತಿಬೆಲೆ, ಸರ್ಜಾಪುರ, ದೊಮ್ಮಸಂದ್ರ, ಜಿಗಣಿ, ಚಂದಾಪುರ ಸೇರಿದಂತೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸೋಮವಾರ ಬೆಳಗ್ಗೆ ಕೆಲ ಕಾಲ ರಸ್ತೆ ಸಂಚಾರ ಸ್ಥಗಿತವಾಗಿತ್ತು. ನಂತರ ಸಂಚಾರ ಯಥಾಸ್ಥಿತಿಯಲ್ಲಿತ್ತು. ಬೆಳಗ್ಗೆ 10ರ ನಂತರ ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸಂಚಾರ ಯಥಾಸ್ಥಿತಿಯಲ್ಲಿತ್ತು.

ADVERTISEMENT

ಆನೇಕಲ್‌ನಲ್ಲಿ ಸಿಪಿಐ(ಎಂ) ಕಾರ್ಯಕರ್ತರು ಮತ್ತು ರೈತಪರ ಸಂಘಟನೆಗಳು ಎತ್ತಿನ ಗಾಡಿಯ ಮೆರವಣಿಗೆ ನಡೆಸಿ ಪ್ರತಿಭಟಿಸಿದರು. ಕನ್ನಡ ಪರ ಸಂಘಟನೆಗಳು ಅತ್ತಿಬೆಲೆ ಗಡಿಯಲ್ಲಿ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಜಾಗೃತಿ ವೇದಿಕೆ, ಬಿಎಸ್‌ಪಿ, ಸಿಪಿಐ(ಎಂ), ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಗಳಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.