ADVERTISEMENT

ಅರಣ್ಯ ನಾಶ ಆತಂಕಕಾರಿ ಬೆಳವಣಿಗೆ: ವಿ.ಪ್ರಸಾದ್

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 3:51 IST
Last Updated 14 ಫೆಬ್ರುವರಿ 2021, 3:51 IST
ಕಾರ್ಯಾಗಾರದಲ್ಲಿ ಶ್ರೀಗಂಧ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್
ಕಾರ್ಯಾಗಾರದಲ್ಲಿ ಶ್ರೀಗಂಧ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್   

ದೇವನಹಳ್ಳಿ: ಅಭಿವೃದ್ಧಿ ಹೆಸರಿನಲ್ಲಿ ಪ್ರತಿನಿತ್ಯ ಅರಣ್ಯ ನಾಶ ಜಾಗತಿಕ ತಾಪಮಾನ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಕಳವಳ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಹಾಗೂ ಸಾಮಾಜಿಕ ಅರಣ್ಯ ವಿಭಾಗ ವತಿಯಿಂದ ಶುಕ್ರವಾರ ನಡೆದ ಕೃಷಿ ಅರಣ್ಯ ಮತ್ತು ಶ್ರೀಗಂಧ ಬೇಸಾಯ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಅಪ್ಪಯ್ಯಣ್ಣ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಕಾರ್ಯಾಗಾರದಲ್ಲಿ ರೈತ ಮಹಿಳೆಯರು ಈ ಯೋಜನೆ ಸದುಪಯೋಗ ಪಡೆಯುವಂತಾಗಬೇಕು ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತ ಕುಮಾರಿ ಮಾತನಾಡಿ, ಅರಣ್ಯ ಇಲಾಖೆ ಸಹಯೋಗದೊಂದಿಗೆ ಪ್ರತಿ ವರ್ಷ ವನಮಹೋತ್ಸವ ಆಚರಿಸುವ ಮೂಲಕ ಅರಣ್ಯ ಅಭಿವೃದ್ಧಿ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ಕರಿಯಪ್ಪ ಮಾತನಾಡಿ, ನರೇಗಾ ಯೋಜನೆಯಡಿ ರೈತರ ಜಮೀನಿನಲ್ಲಿ ಬದುಗಳ ನಿರ್ಮಾಣ, ಕೃಷಿ ಹೊಂಡ ನಿರ್ಮಾಣಕ್ಕಾಗಿ ಹಣ ಬಿಡುಗಡೆ ಮಾಡಲಾಗಿದ್ದು, ಸದುಪಯೋಗಪಡಿಸಿಕೊಂಡು ಅಂತರ್ಜಲದ ಮಟ್ಟ ಹೆಚ್ಚಿಸುವ ಜತೆಗೆ ಮರಗಳನ್ನು ಪೋಷಿಸುವ ನಿಟ್ಟಿನಲ್ಲಿ ರೈತರು ಮುಂದಾಗಬೇಕು ಎಂದು ತಿಳಿಸಿದರು.

ಸಾಮಾಜಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾಧಿಕಾರಿ ಭಾಸ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದಲ್ಲಿ ಕರ್ನಾಟಕ ಮಳೆ ಆಧಾರಿತ ಕೃಷಿಯಲ್ಲಿ 2ನೇ ಸ್ಥಾನದಲ್ಲಿದೆ. ಕೃಷಿ ಜತೆಗೆ ಮರ ಬೆಳೆಸುವುದರಿಂದ ರೈತರಿಗೆ ಭವಿಷ್ಯದಲ್ಲಿ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಶೇ10ರಷ್ಟು ಮಾತ್ರ ಅರಣ್ಯ ಪ್ರದೇಶವಿರುವುದು ಆಘಾತಕಾರಿ ವಿಷಯವಾಗಿದೆ ಎಂದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ರೂಪಾ ಮರಿಯಪ್ಪ, ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕಾಂತಮ್ಮ, ರಾಜ್ಯ ಕೃಷಿ ಅರಣ್ಯ ಉಪ ಅಭಿಯೋಜನೆಯ ಸಲಹೆಗಾರ ಚಂದ್ರಪ್ರಭ, ಭಾರತೀಯ ಮರ ವಿಜ್ಞಾನ ಸಂಸ್ಥೆಯ ನಿವೃತ್ತ ವಿಜ್ಞಾನಿ ಡಾ. ವಿ.ಪಿ.ಸೋಮಶೇಖರ್, ಭಾರತೀಯ ಮರ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳಾದ ಡಾ.ಕೆ.ಟಿ.ಚಂದ್ರಶೇಖರ್, ಜಿ.ರವಿಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.