ADVERTISEMENT

ಅರ್ಥಪೂರ್ಣ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2022, 6:09 IST
Last Updated 21 ಅಕ್ಟೋಬರ್ 2022, 6:09 IST
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ಲತಾ ಮಾತನಾಡಿದರು
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ಲತಾ ಮಾತನಾಡಿದರು   

ದೇವನಹಳ್ಳಿ: ‘ಕನ್ನಡ ನಾಡು, ನುಡಿ, ಪರಂಪರೆಯ ವೈಭವ ಬಿಂಬಿಸುವ ರೀತಿಯಲ್ಲಿ ಈ ಬಾರಿ ನ. 1ರಂದು ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಆರ್. ಲತಾ ಹೇಳಿದರು.

ತಾಲ್ಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ 67ನೇ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಕಳೆದ ಬಾರಿ ಕೋವಿಡ್ ಕಾರಣದಿಂದ ಸರಳವಾಗಿ ರಾಜ್ಯೋತ್ಸವ ಆಚರಿಸಲಾಗಿತ್ತು. ಈ ಬಾರಿ ಸುರಕ್ಷತಾ ಕ್ರಮಗಳೊಂದಿಗೆ ಕರ್ನಾಟಕ ಏಕೀಕರಣ ಚಳವಳಿ, ಕನ್ನಡತನ ಬಿಂಬಿಸುವ ಮಾದರಿಯಲ್ಲಿ ವೇದಿಕೆ ನಿರ್ಮಿಸಿ ಅಲಂಕರಿಸಬೇಕು ಎಂದರು.

ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಾಜ್ಯೋತ್ಸವಕ್ಕೆ ಮೆರುಗು ತರಬೇಕು. ಉತ್ತಮ ಕಾರ್ಯಕ್ರಮಗಳನ್ನು ಪರಿಶೀಲಿಸಿ ಆಯ್ಕೆ ಮಾಡಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಸುರಕ್ಷತಾ ಕ್ರಮ ಹಾಗೂ ಪ್ರಥಮ ಚಿಕಿತ್ಸಾ ಕ್ರಮಗಳ ಬಗ್ಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ADVERTISEMENT

ಕಾರ್ಯಕ್ರಮ ನಡೆಯಲಿರುವ ದೇವನಹಳ್ಳಿಯ ಪದವಿಪೂರ್ವ ಕಾಲೇಜು ಕ್ರೀಡಾಂಗಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಬೇಕು. ಕ್ರೀಡಾಂಗಣದಲ್ಲಿ ವೇದಿಕೆ ಸಿದ್ಧತೆ, ಕುಡಿಯುವ ನೀರು, ಲಘು ಉಪಹಾರ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಬೇಕು. ಪೊಲೀಸ್ ತುಕಡಿಗಳಿಂದ ಕವಾಯತು, ಪಥ ಸಂಚಲನ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ವಿವೇದಿಕೆ ಮುಂಭಾಗ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಾನಪದ ಕಲಾ ತಂಡಗಳ ಪ್ರದರ್ಶನ ಆಯೋಜಿಸುವಂತೆ ಶಿಕ್ಷಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ
ತಿಳಿಸಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಗುಣವಂತ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಡೊಳ್ಳಿನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.