ADVERTISEMENT

ದೇವನಹಳ್ಳಿ | ಸಾವಿರ ದಿನದಲ್ಲಿ ಅಭಿವೃದ್ಧಿ ಶೂನ್ಯ: ಮಾಜಿ ಸಂಸದ ಮುನಿಸ್ವಾಮಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2026, 4:49 IST
Last Updated 15 ಫೆಬ್ರುವರಿ 2026, 4:49 IST
ದೇವನಹಳ್ಳಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಮುನಿಸ್ವಾಮಿ ಮಾತನಾಡಿದರು
ದೇವನಹಳ್ಳಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಮುನಿಸ್ವಾಮಿ ಮಾತನಾಡಿದರು   

ದೇವನಹಳ್ಳಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸಾವಿರ ದಿನ ಪೂರೈಸಿದೆ. ಆದರೆ ಅಭಿವೃದ್ಧಿಯ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಂಸದ ಎಸ್. ಮುನಿಸ್ವಾಮಿ ಆರೋಪಿಸಿದರು.

ಸಾವಿರ ದಿನಗಳ ಸಂಭ್ರಮ ಆಚರಿಸುತ್ತಿರುವ ಸರ್ಕಾರ ಪಂಚ ಗ್ಯಾರಂಟಿಗಳನ್ನು ಹೊರತುಪಡಿಸಿ ಯಾವುದೇ ಮಹತ್ವದ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಘೋಷಿತ ಯೋಜನೆಗಳೂ ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ. ರಾಜ್ಯದ ಅಭಿವೃದ್ಧಿ ಕನಸಿನ ಮಾತಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

ಬೆಲೆ ಏರಿಕೆ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಆಡಳಿತದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳೇ ಹೆಚ್ಚಾಗಿವೆ ಎಂಬ ಆರೋಪವನ್ನೂ ಅವರು ಮಾಡಿದರು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ದುರ್ಬಲಗೊಂಡಿದೆ ಎಂದು ಹೇಳಿದರು.

ADVERTISEMENT

ಸರ್ಕಾರಿ ಇಲಾಖೆಗಳಲ್ಲಿರುವ ಎರಡು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿಲ್ಲ. ವಿವಿಧ ಅನುಮತಿಗಳ ಹೆಸರಿನಲ್ಲಿ ಜನರನ್ನು ಕಚೇರಿಗಳ ಸುತ್ತಾಟಕ್ಕೆ ತಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಧಾರ್ಮಿಕ ವಿಚಾರಗಳಲ್ಲಿ ಸರ್ಕಾರದ ನಡೆ ಪಕ್ಷಪಾತಪೂರ್ಣವಾಗಿದೆ ಎಂದು ಅವರು ಹೇಳಿದರು.

ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಆಡಳಿತ ವ್ಯವಸ್ಥೆಯಲ್ಲಿ ಕಾರ್ಯಕ್ಷಮತೆ ಕಾಣುತ್ತಿಲ್ಲ. ಸರ್ವೇ, ಖಾತೆ, ಇಸ್ವತ್ತು ಸೇರಿದಂತೆ ವಿವಿಧ ಕಚೇರಿಗಳಲ್ಲಿ ಕೆಲಸಗಳು ವಿಳಂಬವಾಗುತ್ತಿವೆ. ಲಂಚ-ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ. ರವಿಕುಮಾರ್, ತಾಲೂಕು ಮಂಡಲ ಅಧ್ಯಕ್ಷ ಅಂಬರೀಶ್ ಗೌಡ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.