ಚನ್ನರಾಯಪಟ್ಟಣ(ದೇವನಹಳ್ಳಿ): ಗುಣಮಟ್ಟದ ಶಿಕ್ಷಣ ನೀಡಿದರೇ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಲಿದೆ ಎಂಬುದಕ್ಕೆ ಬೆಟ್ಟಕೋಟೆ ಸರ್ಕಾರಿ ಶಾಲೆ ಸಾಕ್ಷಿ. 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಯಲ್ಲಿ ಓದುತ್ತಿರುವುದು ಸಂತಸ ತಂದಿದೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬೆಟ್ಟಕೋಟೆ ಸರ್ಕಾರಿ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಸಿಎಸ್‌ಆರ್ ಅನುದಾನದಲ್ಲಿ ಇಲ್ಲಿನ ಶಾಲೆಯನ್ನು ಅಭಿವೃದ್ಧಿಗೊಳಿಸಿದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿದೆ ಎಂದು ಹೇಳಿದರು.
ತಾಲ್ಲೂಕಿನಲ್ಲಿ ಹಲವು ಕೈಗಾರಿಕೆಗಳಿವೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಮಾದರಿ ಶಾಲೆ ನಿರ್ಮಾಣಕ್ಕೆ ಸಿಎಸ್‌ಆರ್ ನಿಧಿ ಬಳಕೆ ಮಾಡಬೇಕು ಎಂದು ತಿಳಿಸಲಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿಯೂ ಉತ್ಕೃಷ್ಟ ವಿದ್ಯಾಭ್ಯಾಸ ದೊರೆಯಲು ಸಾಧ್ಯ ಎಂದರು.
‘ಸರ್ಕಾರಿ ಶಾಲೆಯಲ್ಲಿಯೇ ನಾವೆಲ್ಲ ವಿದ್ಯಾಭ್ಯಾಸ ಮಾಡಿ, ರಾಜಕೀಯ ಮೂಲಕ ದೇಶ ಸೇವೆ ಮಾಡಿದ್ದೇವೆ. ಸಿಎಸ್‌ಆರ್ ಅನುದಾನ ಬಳಸಿಕೊಂಡು ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಮಾಡಿರುವುದು ಅನುಕರ್ಣೀಯವಾದದ್ದು’ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯಿಲಿ ತಿಳಿಸಿದರು.
ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಜಿ.ಪಂ ಮಾಜಿ ಸದಸ್ಯ ಲಕ್ಷ್ಮೀನಾರಾಯಣ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ರಾಜಣ್ಣ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರವಿ. ಬೆಟಿಕೋಟೆ ಗ್ರಾ.ಪಂ ಅಧ್ಯಕ್ಷ ಡಿ.ವಿ.ಭೀಮೇಶ್, ರಾಮಕೃಷ್ಣ ಗ್ರಾಮಾಂತರ ಪ್ರೌಢ ಶಾಲೆಯ ಮುಖ್ಯ ಶಿಕ್ಷ ಕೆ.ಪ್ರಕಾಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.