
ದೇವನಹಳ್ಳಿ: ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ–2031 ವರದಿಗಳನ್ನು ತಯಾರಿಸುವಲ್ಲಿ ಎಲ್ಲಾ ಇಲಾಖೆಗಳ ಪಾತ್ರ ಮಹತ್ವದಾಗಿದ್ದು, ವಾಸ್ತವ ಮತ್ತು ನಿಖರ ಅಂಕಿ–ಅಂಶಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.
ಜಿಲ್ಲೆಯ ಪ್ರಸ್ತುತ ಸ್ಥಿತಿ ಹಾಗೂ ಮುಂದಿನ ಐದು ವರ್ಷಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸರಿಯಾದ ದತ್ತಾಂಶ ಸಂಗ್ರಹಿಸಬೇಕು. ಜಿಲ್ಲೆಯ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಕೃಷಿ, ಕುಡಿಯುವ ನೀರು ಸೇರಿದಂತೆ ವಿವಿಧ ಕ್ಷೇತ್ರಗಳ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸಿ ವರದಿ ತಯಾರಿಸಿದರೆ, ಜನರ ಜೀವನಮಟ್ಟ ಸುಧಾರಣೆಗೂ ಮತ್ತು ತಲಾ ಆದಾಯ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ–2031 ವರದಿಗಾಗಿ 117 ಅಂಶಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸ್ಥಳೀಯ ಸಂಪನ್ಮೂಲಗಳ ಬಳಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಯೋಜನಾ ಇಲಾಖೆಯ ಹಿರಿಯ ನಿರ್ದೇಶಕ ಎಸ್. ಬಸವರಾಜ ಹೇಳಿದರು. ಈ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಐಎಸ್‌ಇಸಿ ಸಂಸ್ಥೆಯ ಪ್ರೊ. ಕೃಷ್ಣರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.