ADVERTISEMENT

ಬಾಣಂತಿಯರ, ಶಿಶು ಸಾವು ತಡೆಗೆ ತರಬೇತಿ: ಸಂಸದ ಡಾ.ಕೆ. ಸುಧಾಕರ್‌

ದಿಶಾ ಸಮಿತಿ ಸಭೆಯಲ್ಲಿ ಸಂಸದ ಡಾ.ಕೆ. ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 17 ಜನವರಿ 2025, 14:21 IST
Last Updated 17 ಜನವರಿ 2025, 14:21 IST
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಸಂಸದ ಡಾ. ಕೆ. ಸುಧಾಕರ್ ಮಾತನಾಡಿದರು
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಸಂಸದ ಡಾ. ಕೆ. ಸುಧಾಕರ್ ಮಾತನಾಡಿದರು   

ದೇವನಹಳ್ಳಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ನರ್ಸ್‌ಗಳಿಗೆ ಕಾರ್ಯಾಗಾರ ಏರ್ಪಡಿಸಿ ಗರ್ಭಿಣಿ, ಬಾಣಂತಿಯರ ಹಾಗೂ ಶಿಶು ಲಾಲನೆ–ಪಾಲನೆ, ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ನೀಡಬೇಕು. ಇದರಿಂದ ಗರ್ಭಿಣಿಯರ, ಶಿಶುಗಳ ಸಾವು ಸಂಭವಿಸುವುದನ್ನು ತಪ್ಪಿಸಬಹುದು ಎಂದು ಸಂಸದ ಡಾ.ಕೆ. ಸುಧಾಕರ್‌ ಹೇಳಿದರು.

ತಾಲ್ಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಎರಡನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಬಾಲ್ಯವಿವಾಹ ಹಾಗೂ ಪೊಕ್ಸೋ ಪ್ರಕರಣ ತಡೆಗೆ ಸಂಬಂಧಪಟ್ಟ ಇಲಾಖೆ ಜತೆಗೆ ಪೋಲಿಸ್ ಇಲಾಖೆ ಜಂಟಿಯಾಗಿ ಕೆಲಸ  ಮಾಡಬೇಕು. ಬಾಲ್ಯ ವಿವಾಹ ಪ್ರಕರಣ ದಾಖಲಾಗಿ ಇತ್ಯರ್ಥ ಆಗುವ ವರೆಗೆ ವರದಿ ಪಡೆದು ನಿಗಾ ವಹಿಸಬೇಕು ಎಂದರು.

ADVERTISEMENT

‘ಆಯುಷ್ಮಾನ್‌’ ಅರಿವು ಮೂಡಿಸಿ: ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ ₹5 ಲಕ್ಷ ವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಜನಸಾಮಾನ್ಯರಿಗೆ ₹ 5 ಲಕ್ಷದವರೆಗಿನ ಉಚಿತ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಪ್ರತಿಯೊಬ್ಬರು ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಿ ಎಂದು ನಿರ್ದೇಶಿಸಿದರು.

ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳ ಪ್ರಸ್ತಾವನೆ, ಅನುದಾನ, ಕಾಮಗಾರಿ ಹಾಗೂ ಇನ್ನಿತರ ಬಾಕಿ ಇರುವ ಕೆಲಸಗಳ ಬಗ್ಗೆ ಸಂಬಂಧಪಟ್ಟ ಆಯಾ ಇಲಾಖೆಗಳು ವರದಿ ಸಿದ್ಧಪಡಿಸಿ ಮಾಹಿತಿ ನೀಡಿ, ವರದಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕಾರ್ಯ ರೂಪಕ್ಕೆ ತರಲಾಗುವುದು ಎಂದು ಸುಧಾಕರ್‌ ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ತ್ಯಾಜ್ಯ ನಿರ್ವಹಣಾ ಘಟಕಗಳು ಸರಿಯಾದ ರೀತಿಯಲ್ಲಿ ಸದ್ಬಳಕೆ ಆಗುತ್ತಿದೆಯೇ ಇಲ್ಲವೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ. ಗ್ರಾಮೀಣ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹ, ಒಣ ಕಸ-ಹಸಿ ಕಸ ವಿಂಗಡಣೆ ಜತೆಗೆ ವೈಜ್ಞಾನಿಕವಾಗಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಒಂದು ದೇಶ ಒಂದು ಪಡಿತರ ಯೋಜನೆ ಜಾರಿಯಾಗಿ ದೇಶದ ಜನರು ದೇಶದ ಯಾವುದೇ ಪಡಿತರ ಅಂಗಡಿಯಲ್ಲಿ ಬೇಕಾದರೂ ಪಡಿತರ ಪಡೆಯಬಹುದಾದ ಸೌಲಭ್ಯವಿದೆ. ಆದರೆ ಹೊರ ರಾಜ್ಯದಿಂದ ಬಂದು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ನಮ್ಮ ರಾಜ್ಯದಲ್ಲಿ ಪಡಿತರ ಪಡೆಯಲು ಆಗುತ್ತಿಲ್ಲ ಎಂಬ ಮಾಹಿತಿ ಬಂದಿದ್ದು ರಾಜ್ಯ ಸರ್ಕಾರಕ್ಕೆ ಇದರ ಬಗ್ಗೆ ವರದಿ ಸಲ್ಲಿಸಿ ಎಂದರು.

ಬೆಳೆ ವಿಮೆ ನೋಂದಣಿ ಹೆಚ್ಚಿಸಿ: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ 4,885 ರೈತರು ನೋಂದಣಿ ಯಾಗಿದ್ದಾರೆ. ಜಿಲ್ಲೆಯ ರೈತರು ತೋಟಗಾರಿಕೆ ಹಾಗೂ ಕೃಷಿ ವಾಣಿಜ್ಯ ಬೆಳೆ ಹೆಚ್ಚು ಬೆಳೆಯುತ್ತಾರೆ. ಒಮ್ಮೆ ನಷ್ಟವಾದರೆ ರೈತರಿಗೆ ಬಹಳ ತೊಂದರೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳೆ ವಿಮೆ ಮಾಡಿಸುವುದರಿಂದ ಆಗುವಂತಹ ಅನುಕೂಲಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ರೈತರಿಗೆ ಅರಿವು ಮೂಡಿಸಿ ಈ ವರ್ಷ ನೋಂದಣಿ ಹೆಚ್ಚಿಸಿ ಎಂದು ಸೂಚಿಸಿದರು.

ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎನ್.ಶಿವಶಂಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎನ್ ಅನುರಾಧ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಪಂ ಕಾರ್ಯನಿರ್ವಹಕಾಧಿಕಾರಿಗಳು ಉಪಸ್ಥಿತರಿದ್ದರು.

ದಿಶಾ ಸಮಿತಿ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

ಗ್ಯಾಸ್‌ ಸಂಪರ್ಕ ಇಲ್ಲದ 3098 ಕುಟುಂಬ

ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಅಕ್ಕಿಯನ್ನು ಕೇಂದ್ರ ಸರ್ಕಾರ ಪೂರೈಸುತ್ತಿದೆ. ಒಂದು ಕೆ.ಜಿ ಅಕ್ಕಿಗೆ ₹29 ಮಾತ್ರ. ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸಿ. ಗ್ಯಾಸ್ ಸಂಪರ್ಕ ಹೊಂದಿಲ್ಲದ 3098 ಕುಟುಂಬಗಳ ಜಿಲ್ಲೆಯಲ್ಲಿದ್ದು ಅಂತವರಿಗೆ ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ಕಲ್ಪಿಸಲು ಕ್ರಮ ವಹಿಸಿ ಎಂದು ಡಾ.ಕೆ.ಸುಧಾಕರ್‌ ಸೂಚಿಸಿದರು. ಅಧಿಕಾರಿಗಳ ನಿರ್ಲಕ್ಷ್ಯ ಸಲ್ಲ ಸರ್ಕಾರಿ ಕಚೇರಿಗಳಲ್ಲಿ ಕೆಲಸ ವಿಳಂಬ ಆಗುತ್ತಿರುವ ಬಗ್ಗೆ ಜನಸಾಮಾನ್ಯರಿಂದ ದೂರು ಕೇಳಿಬರುತ್ತಲೇ ಇದೆ. ಅಧಿಕಾರಿಗಳು ಸಮಯ ಪ್ರಜ್ಞೆಯಿಂದ ಕೆಲಸ ಮಾಡಬೇಕು. ಜನಸಾಮಾನ್ಯರ ಕೆಲಸಕ್ಕೆ ಆದ್ಯತೆ ನೀಡಿ ಕೆಲಸ ಮಾಡಬೇಕು. ಅಧಿಕಾರಿಗಳ ಹತ್ತಿರ ಕೆಲಸ ಆಗದಿದ್ದಾಗ ಮಾತ್ರ ಜನರು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಇದರಿಂದ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಕೆಲಸ ಮಾಡಬೇಕು ಎಂದರು. ಮಕ್ಕಳೊಂದಿಗೆ ಬಿಸಿಯೂಟ ತಿನ್ನಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರಗತಿ ಸಾಧಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ತಿಂಗಳಿಗೊಮ್ಮೆ ಎಲ್ಲಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಜತೆಗೆ ಮಧ್ಯಾಹ್ನದ ಬಿಸಿಯೂಟ ಮಾಡಬೇಕು. ಇದರಿಂದ ಆಹಾರದ ಗುಣಮಟ್ಟ ಹಾಗೂ ಅಧಿಕಾರಿಗಳ ಕಾರ್ಯಕ್ಷಮತೆ ಕಾಣಬಹುದು ಎಂದು ಡಾ.ಕೆ. ಸುಧಾಕರ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.