ADVERTISEMENT

‘ಅಭಿವೃಧ್ಧಿ ಕೆಲಸಗಳೇ ಮೊಯಿಲಿ ಗೆಲುವಿಗೆ ಶ್ರೀರಕ್ಷೆ’

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 13:39 IST
Last Updated 11 ಏಪ್ರಿಲ್ 2019, 13:39 IST
ಶಾಸಕ ನಿಸರ್ಗ ನಾರಾಯಣಸ್ವಾಮಿ ಮತಯಾಚಿಸಿದರು
ಶಾಸಕ ನಿಸರ್ಗ ನಾರಾಯಣಸ್ವಾಮಿ ಮತಯಾಚಿಸಿದರು   

ದೇವನಹಳ್ಳಿ: ‘ಸಮ್ಮಿಶ್ರ ಸರ್ಕಾರ ಮತ್ತಷ್ಟು ಗಟ್ಟಿಗೊಳಿಸಲು ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯಿಲಿ ಅವರಿಗೆ ಮತ ನೀಡಿ’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಮನವಿ ಮಾಡಿದರು.

ಇಲ್ಲಿನ ಕೊಡಗುರ್ಕಿ ಕತ್ತಿ ಮಾರಮ್ಮ ದೇವಾಲಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಪೂಜೆ ಸಲ್ಲಿಸಿ,ಮನೆ ಮನೆ ಪ್ರಚಾರ ಕೈಗೊಂಡು ಮತಯಾಚಿಸಿ ಮಾತನಾಡಿದರು.

ಜೆಡಿಎಸ್‌ನಲ್ಲಿ ಯಾವುದೇ ಗೊಂದಲ ಇಲ್ಲ. ವರಿಷ್ಠರ ಸೂಚನೆ ಮೇರೆಗೆ ಜಂಟಿ‌ ಪ್ರಚಾರ ನಡೆಯುತ್ತಿದೆ. ಎಲ್ಲಾ ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ವೀರಪ್ಪ ಮೊಯಿಲಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಅವರು ಮಾಡಿರುವ ಅಭಿವೃದ್ಧಿ ಕೆಲಸವೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ಹೇಳಿದರು.

ADVERTISEMENT

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿ, ‘ವೀರಪ್ಪ ಮೊಯಿಲಿ ಸುಳ್ಳುಗಾರ, ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಆರೋಪ ಸತ್ಯಕ್ಕೆ ದೂರವಾದ ಮಾತು. ಎತ್ತಿನಹೊಳೆ ಯೋಜನೆ, ಹೆಬ್ಬಾಳ– ನಾಗವಾರ ವ್ಯಾಲಿ ಯೋಜನೆ, ಜಿಲ್ಲಾಡಳಿತ ನೂತನ ಸಂಕೀರ್ಣ, ನಮ್ಮ ಗ್ರಾಮ ನಮ್ಮ ರಸ್ತೆ, ಹಸಿವು ಮುಕ್ತ ಯೋಜನೆಯಡಿ ಉಚಿತ ಅಕ್ಕಿ, ಈ ಹಿಂದಿನ ಕಾಂಗ್ರೆಸ್ ಆಡಳಿತ ಮತ್ತು ಪ್ರಸ್ತುತ ಸಮ್ಮಿಶ್ರ ಸರ್ಕಾರದ ಜನಪರ ಯೋಜನೆಗಳು ಗೆಲುವಿಗೆ ಕಾರಣವಾಗಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಅಧ್ಯಕ್ಷ ಬಿ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಸದಸ್ಯೆ ರಾಧಮ್ಮ ಮುನಿರಾಜು, ಎಪಿಎಂಸಿ ಅಧ್ಯಕ್ಷ ಕೆ.ವಿ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ನಂದಿನಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕುಮಾರ್, ಎಂಪಿಸಿ‌ಎಸ್ ಅಧ್ಯಕ್ಷ ಎಸ್.ಪಿ.ಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯ ಕಾರಹಳ್ಳಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ಮಮತ, ವಿಎಸ್‌ಎಸ್ಎನ್ ನಿರ್ದೇಶಕ ಚಿಕ್ಕನಾರಾಯಣಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.