ADVERTISEMENT

ಪ್ರತಿ ತಿಂಗಳು ಅಂಗವಿಕಲರ ಕುಂದುಕೊರತೆ ಸಭೆ: ಜಿಲ್ಲಾಧಿಕಾರಿ ಸೂಚನೆ

3ನೇ ಸೋಮವಾರ ತಹಶೀಲ್ದಾರ್‌ ನೇತೃತ್ವದಲ್ಲಿ ಸಭೆ ನಡೆಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 5:39 IST
Last Updated 29 ಜನವರಿ 2026, 5:39 IST
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀಶೈಲ ಭೀಮಸೇನ ಭಾಗಡಿ, ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀಶೈಲ ಭೀಮಸೇನ ಭಾಗಡಿ, ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು   

ದೇವನಹಳ್ಳಿ: ಪ್ರತಿ ತಿಂಗಳ 3ನೇ ಸೋಮವಾರ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಅಂಗವಿಕಲರ ಕುಂದುಕೊರತೆ ಸಭೆ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಅಂಗವಿಕಲರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಶೇ 5ರಷ್ಟು ಅನುದಾನವನ್ನು ಹೇಗೆ ಬಳಸಲಾಗಿದೆ ಎಂಬ ಮಾಹಿತಿಯನ್ನು ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಸಲ್ಲಿಸಬೇಕು ಎಂದರು.

ADVERTISEMENT

ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರು ಸುಗಮವಾಗಿ ಸಂಚರಿಸಲು ರ‍್ಯಾಂಪ್‌ ಅಳವಡಿಸಬೇಕು. ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜಿಸಿ ಅಂಗವಿಕಲರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಂಗವಿಕಲರ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಬೇಕು. ಸಾರ್ವಜನಿಕ ಸಾರಿಗೆಯಲ್ಲಿ, ವಿಶೇಷವಾಗಿ ಬಸ್‌ಗಳಲ್ಲಿ ಅಂಗವಿಕಲರು ಸುಲಭವಾಗಿ ಹತ್ತಿ ಇಳಿಯಲು ಅನುಕೂಲಕರ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶಿಸಿದರು.

ಅಂಗವಿಕಲರಿಗೆ ಸರ್ಕಾರದಿಂದ ದೊರೆಯುವ ಎಲ್ಲಾ ಯೋಜನೆಗಳು ಮತ್ತು ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಸತೀಶ್ ಪಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮುದ್ದಣ್ಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರೇಮ ಉಪಸ್ಥಿತರಿದ್ದರು.

ಮನೆ ಬಾಗಿಲಿಗೆ ಆಧಾರ್‌

ಕೆಲ ಅಂಗವಿಕಲರು ಬಯೋಮೆಟ್ರಿಕ್ ಸಮಸ್ಯೆಯಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಸಭೆ ಗಮನಕ್ಕೆ ತರಲಾಯಿತು. ತೀವ್ರ ಅಂಗವಿಕಲರ ಮನೆ ಬಾಗಿಲಿಗೆ ಆಧಾರ್ ಸೌಲಭ್ಯ ಒದಗಿಸುವ ಕುರಿತು ಚರ್ಚಿಸಲಾಯಿತು.

ಆದ್ಯತೆ ಮೇರೆಗೆ ಪ್ರಕರಣ

ಶೀಘ್ರ ಇತ್ಯರ್ಥ ಅಂಗವಿಕಲರಿಗೆ ಸಂಬಂಧಿಸಿದ ನ್ಯಾಯಾಲಯದ ದಾವೆಗಳನ್ನು ಆದ್ಯತೆ  ಮೇರೆಗೆ ಶೀಘ್ರ ಇತ್ಯರ್ಥಪಡಿಸಲಾಗುವುದು. ಅಂಗವಿಕಲರಿಗೆ ಉಚಿತ ಕಾನೂನು ನೆರವು ನೀಡಲಾಗುವುದು. ಅವರ ಹಕ್ಕುಗಳ ರಕ್ಷಣೆ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಕಾನೂನು ಸೇವೆಗಳ ಪ್ರಾಧಿಕಾರ ಸದಾ ಕಾರ್ಯನಿರತವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀಶೈಲ ಭೀಮಸೇನ ಭಾಗಡಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.