ADVERTISEMENT

ಮತದಾರರ ಪಟ್ಟಿಯಿಂದ ಹೆಸರು ಬಿಟ್ಟು ಹೋಗದಿರಲಿ–ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 6 ಜನವರಿ 2019, 13:35 IST
Last Updated 6 ಜನವರಿ 2019, 13:35 IST

ದೇವನಹಳ್ಳಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ಎಚ್ಚರ ವಹಿಸಿ ಪಟ್ಟಿ ತಯಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸುವ ಸಂಬಂಧ ಸ್ವೀಪ್ (ಮತದಾನದ ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣೆಯಲ್ಲಿ ಮತದಾರರ ಸಹಭಾಗಿತ್ವ) ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಲು ಹಾಗೂ ಮತದಾನದ ದಿನ ತಪ್ಪದೇ ಮತ ಚಲಾಯಿಸುವಂತೆ ತಿಳಿವಳಿಕೆ ನೀಡಲು ಹೆಚ್ಚಿನ ಪ್ರಚಾರ ನೀಡಬೇಕೆಂದು ಹೇಳಿದರು.

ADVERTISEMENT

ಈಗಾಗಲೇ ನೋಂದಾಯಿಸಿರುವ ಮತದಾರರಿಗೆ ಗುರುತಿನ ಚೀಟಿ ನೀಡಬೇಕು. ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ಹಾಗೂ ಅರ್ಹ ಕಾಲೇಜು ವಿದ್ಯಾರ್ಥಿಗಳನ್ನು ನೋಂದಾಯಿಸಿಕೊಳ್ಳಲು ಕ್ಯಾಂಪಸ್ ರಾಯಭಾರಿಗಳ ಮೂಲಕ ಹೆಚ್ಚಿನ ಪ್ರಚಾರ ಮಾಡಬೇಕು. ಅಲ್ಲದೆ, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಸ್ಥಳೀಯ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾನ ದಿನವನ್ನು ಇದೇ 25 ರಂದು ಆಚರಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ಮತದಾನ ದಿನವನ್ನು ಆಚರಿಸಲಾಗುವುದು ಎಂದರು.

ಅಂದು ದೇವನಹಳ್ಳಿಯ ಪ್ರಮುಖ ಬೀದಿಗಳಲ್ಲಿ ಮ್ಯಾರಥಾನ್ ಅಲ್ಲದೆ, ಓಟು ಹಾಕೋಣ ಬನ್ನಿ ಎಂಬ ಬೀದಿನಾಟಕ ಪ್ರದರ್ಶನ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ಲತಾ ಸಭೆಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಟಿ.ಆರ್. ಶೋಭಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.