ADVERTISEMENT

ಸಾಹಿತ್ಯ ಸಮ್ಮೇಳನಕ್ಕೆ ಕನಸವಾಡಿ ಸಜ್ಜು

ನಾಳೆಯಿಂದ ಟಿ.ಕೆಂಪಣ್ಣ ಸರ್ವಾಧ್ಯಕ್ಷತೆಯಲ್ಲಿ ಕಾರ್ಯಕ್ರಮ । ಗೊ.ರು.ಚನ್ನಬಸಪ್ಪರಿಂದ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 15:59 IST
Last Updated 10 ಏಪ್ರಿಲ್ 2025, 15:59 IST
ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿದರು. ಪದಾಧಿಕಾರಿಗಳು ಇದ್ದರು
ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿದರು. ಪದಾಧಿಕಾರಿಗಳು ಇದ್ದರು   

ದೊಡ್ಡಬಳ್ಳಾಪುರ: ತಾಲ್ಲೂಕಿನ ಕನಸವಾಡಿಯಲ್ಲಿ ಏಪ್ರಿಲ್‌ 12, 13 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಹೇಳಿದರು.

ಜಿಲ್ಲಾ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಪೂರ್ಣಗೊಂಡಿವೆ. ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿವಂಗತ ಜಿ.ಗೋಪಿನಾಥ್ ಮತ್ತು ಮಹಾದ್ವಾರಕ್ಕೆ ಮುತ್ಸದ್ದಿ ರಾಜಕಾರಣಿ ದಿವಂಗತ ಸಿ.ಡಿ. ಸತ್ಯನಾರಾಯಣಗೌಡ ಅವರ ಹೆಸರು ಇಡಲಾಗಿದೆ. ಹಿರಿಯ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ಕಲಾವಿದ ಟಿ.ಕೆಂಪಣ್ಣ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ, ತಾಲ್ಲೂಕು ಆಡಳಿತ ಹಾಗೂ ಮಧುರೆ ಹೋಬಳಿಯ ಸ್ಥಳೀಯ ಆಡಳಿತ, ಮುಖಂಡರು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ್‌ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಕೆ.ಸುಧಾಕರ್, ಶಾಸಕ ಧೀರಜ್‌ ಮುನಿರಾಜ್‌ ಸೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ADVERTISEMENT

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅವರು ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧ ವಿಚಾರಗೋಷ್ಠಿ, ಕವಿಗೋಷ್ಠಿಗಳು ನಡೆಯಲಿವೆ. 50ಕ್ಕೂ ಹೆಚ್ಚಿನ ಸಾಧಕ ಗಣ್ಯರಿಗೆ ಪುರಸ್ಕಾರ ನೀಡಲಾಗುತ್ತಿದೆ. ಜಿಲ್ಲಾಡಳಿತ ವಿವಿಧ ಇಲಾಖೆಗಳಿಂದ ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆಯಲಿದೆ. ಪುಸ್ತಕ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಕಾರ್ಯದರ್ಶಿ ಅಶ್ವತ್ಥಗೌಡ, ಜಿಲ್ಲಾ ಪ್ರತಿನಿಧಿ ಶರಣಯ್ಯ ಹಿರೇಮಠ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ನಂಜೇಗೌಡ, ನೆಲಮಂಗಲ ತಾಲ್ಲೂಕು ಕಾರ್ಯದರ್ಶಿ ಸದಾನಂದ ಆರಾಧ್ಯ, ಭಾನುಪ್ರಕಾಶ್, ಮಧುರೆ ಹೋಬಳಿ ಕಾರ್ಯದರ್ಶಿ ಚಂದ್ರಶೇಖರಯ್ಯ, ಕಸಬಾ ಹೋಬಳಿ ಕಾರ್ಯದರ್ಶಿ ಸುರೇಶ್, ತಾಲ್ಲೂಕು ಘಟಕದ ಪ್ರತಿನಿಧಿ ಸಫೀರ್ ಇದ್ದರು.

ಸಮ್ಮೇಳನದ ಕಾರ್ಯಕ್ರಮಗಳಿವು...

ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಮೊದಲ ದಿನ ಧ್ವಜಾರೋಹಣ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಉದ್ಘಾಟನಾ ಕಾರ್ಯಕ್ರಮ ಕನ್ನಡದ ಅರಿವು ಮತ್ತು ಅಭಿಯಾನ ಕುರಿತ ವಿಚಾರಗೋಷ್ಠಿ ತ.ನ.ಪ್ರಭುದೇವ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಚಿಂತಕ ಕೆ.ರಾಜಕುಮಾರ್ ವಿಚಾರ ಮಂಡನೆ ಮಾಡಲಿದ್ದಾರೆ. ಯುವ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗೋವಿಂದರಾಜು ಹೇಳಿದರು. 2ನೇ ದಿನವಾದ ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ದಿ ಮತ್ತು ಆತಂಕಗಳು ಕುರಿತ ವಿಚಾರಗೋಷ್ಠಿ ವಿಮರ್ಶಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಾವಯವ ಕೃಷಿ ತಜ್ಞ ಡಾ.ಶಿವನಾಪುರ ರಮೇಶ್ ಜಗನ್ನಾಥ್‌ ಪ್ರಕಾಶ್‌ ವಿಷಯ ಮಂಡನೆ ಮಾಡಲಿದ್ದಾರೆ. ಬಳಿಕ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಬಹಿರಂಗ ಅಧಿವೇಶನ ಸನ್ಮಾನ ಹಾಗೂ ಸಮಾರೋಪ ನಡೆಯಲಿವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.