ADVERTISEMENT

ದೇವನಹಳ್ಳಿ: ಕುಡಿವ ನೀರಿಗೆ ಆಗ್ರಹಿಸಿ ಗ್ರಾ.ಪಂಗೆ ಬೀಗ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 1:45 IST
Last Updated 22 ಜುಲೈ 2025, 1:45 IST
ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಕುಡಿಯುವ ನೀರನ್ನು ಸರಬರಾಜು ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಕುಡಿಯುವ ನೀರನ್ನು ಸರಬರಾಜು ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.   

ದೇವನಹಳ್ಳಿ: ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಮಾಡುವಂತೆ ಒತ್ತಾಯಿಸಿ ಸೋಮವಾರ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು, ಖಾಲಿ ಬಿಂದಿಗೆ ಹಿಡಿದು ವಿವಿಧ ಗ್ರಾಮಗಳ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ತಾಲ್ಲೂಕಿನಲ್ಲಿ ಬೂದಿಗೆರೆ ಗ್ರಾಮ ಪಂಚಾಯತಿಯೂ ಒಂದೆಡೆ ಬೆಂಗಳೂರು ಮಹಾನಗರದೊಂದಿಗೆ ಗಡಿ ಹಂಚಿಕೊಂಡಿದೆ. ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದೊಂದಿಗೆ ಹೊಂದಿಕೊಂಡಿರುವ ಹಾಗೂ ತಾಲ್ಲೂಕಿನಲ್ಲಿ ಹೆಚ್ಚು ಜನಸಾಂದ್ರತೆ ಇರುವ ಪ್ರದೇಶವಾಗಿದೆ.

ಇಲ್ಲಿನ ಸ್ಥಳೀಯರು ಈಗಾಗಲೇ ಸಾಕಷ್ಟು ಬಾರಿ ಕುಡಿಯುವ ನೀರು ಸಮರ್ಪಕವಾಗಿ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟಿಸಿದ್ದು, ಮಳೆಗಾಲದಲ್ಲಿಯೂ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.

ADVERTISEMENT

ಗ್ರಾ.ಪಂ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುವ ವಾಟರ್‌ಮ್ಯಾನ್‌ಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. 20 ದಿನ ಕಳೆದರೂ ನೀರು ಬರುತ್ತಿಲ್ಲ. ಖಾಸಗಿ ಟ್ಯಾಂಕರ್‌ ಮಾಲೀಕರಿಗೆ ದುಬಾರಿ ಹಣ ತೆತ್ತು ನೀರು ಪಡೆಯುವ ದುಸ್ಥಿತಿ ನಿರ್ಮಾಣ ಆಗಿದೆ. ಈ ಕೂಡಲೇ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಪ್ರತಿಭಟನನಿರತರು ಒತ್ತಾಯಿಸಿದರು.

ಮಾತಿನ ಚಕಮಕಿ

ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಿಡಿಒ ಚನ್ನಪ್ಪ ಅಧ್ಯಕ್ಷೆ ವರಲಕ್ಷ್ಮೀ ಪ್ರತಿಭಟನನಿರತರೊಂದಿಗೆ ಮಾತುಕತೆ ನಡೆಸಿದರು.  ಮಾತು ವಿಕೋಪಕ್ಕೆ ಹೋಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಕೂಡಲೇ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದರು. ಸಮಸ್ಯೆ ಬಗೆಹರಿಸಲು ಸಮಯಾವಕಾಶ ಕೇಳಿದ ಪಿಡಿಒ ಮತ್ತು ಅಧ್ಯಕ್ಷೆ ಮೂರು ದಿನಗಳಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಡುಕೊಳ್ಳುವ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.