
ಕುಂದಾಣ (ದೇವನಹಳ್ಳಿ): ತಾಲ್ಲೂಕಿನ ದ್ಯಾವರಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಕೆರೆ ಅಂಗಳದಲ್ಲೇ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿ, ದ್ಯಾವರಹಳ್ಳಿ ಕೆರೆಯು ಸುಮಾರು 8 ಎಕರೆ ವಿಸ್ತೀರ್ಣ ಹೊಂದಿದ್ದು, ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಸುಮಾರು ₹1 ಕೋಟಿ ಸಿಎಸ್ಆರ್ ಅನುದಾನದಡಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದಉ.
ಕೆರೆ ಉಳೆತ್ತುವಿಕೆ, ಕೆರೆ ಏರಿಗಳಿಗೆ ಕಲ್ಲು ಹಾಸುವಿಕೆ, ಏರಿ ದುರಸ್ತಿ, ನಾಲಾ ಅಭಿವೃದ್ಧಿ, ಕೋಡಿ ಹಾಗೂ ತೂಬು ದುರಸ್ತಿ ಸೇರಿದಂತೆ ಸಮಗ್ರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಕೆರೆ ಅಭಿವೃದ್ಧಿಯಿಂದ ಮಳೆನೀರನ್ನು ಸಂಗ್ರಹಿಸಿ ಸಂರಕ್ಷಿಸುವ ಸಾಧ್ಯತೆ ಹೆಚ್ಚಾಗಲಿದ್ದು, ಅಂತರ್ಜಲ ಮಟ್ಟ ವೃದ್ಧಿಯಾಗುತ್ತದೆ. ಇದರಿಂದ ಸುತ್ತಮುತ್ತಲಿನ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ನೆರವು ದೊರೆಯಲಿದೆ ಎಂದರು.
ಕೆರೆಗಳು ಗ್ರಾಮೀಣ ಪ್ರದೇಶದ ಜೀವನಾಡಿಗಳಾಗಿದ್ದು, ಅವುಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಕೆರೆ ಅಭಿವೃದ್ಧಿಯೊಂದಿಗೆ ಪರಿಸರ ಸಂರಕ್ಷಣೆಗೂ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಗ್ರಾಮಸ್ಥರು ಕೆರೆ ಸ್ವಚ್ಛತೆ ಹಾಗೂ ಸಂರಕ್ಷಣೆಯಲ್ಲಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಅಭಿವೃದ್ಧಿ ಕಾಮಗಾರಿಗಳು ಸಮಯಬದ್ಧವಾಗಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಯಪ ಅಧ್ಯಕ್ಷ ಶಾಂತಕುಮಾರ್, ಕುಂದಾಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಾ, ಪಿಡಿಒ ಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.