ADVERTISEMENT

‘ಸ್ಕೌಟ್ಸ್, ಗೈಡ್ಸ್ ಚಟುವಟಿಕೆಗೆ ಒತ್ತು ನೀಡಿ’

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 3:20 IST
Last Updated 7 ಜನವರಿ 2021, 3:20 IST
ಪೂರ್ವಭಾವಿ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥ್ ನಾರಾಯಣ ಮಾತನಾಡಿದರು
ಪೂರ್ವಭಾವಿ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥ್ ನಾರಾಯಣ ಮಾತನಾಡಿದರು   

ದೇವನಹಳ್ಳಿ: ಕೋವಿಡ್–19 ಪರಿಣಾಮ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಪ್ರಸ್ತುತ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥ್ ನಾರಾಯಣ ಹೇಳಿದರು.

ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಬಿ.ಆರ್.ಸಿ. ಕೇಂದ್ರದಲ್ಲಿ ಬುಧವಾರ ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರಿಗೆ ನಡೆದ ಶೈಕ್ಷಣಿಕ ಪೂರ್ವಭಾವಿ ಚಟುವಟಿಕೆ ಕಾರ್ಯಾಗಾರದಲ್ಲಿ ಮಾತನಾಡಿದರು.

ಆನ್‌ಲೈನ್ ಯೋಜನೆಯಿಂದ ಹೊರಬಂದು ಜ. 1ರಿಂದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಶಿಕ್ಷಕರಿಂದ ಮಕ್ಕಳಿಗೆ ನೇರವಾಗಿ ಬೋಧನೆ ಆರಂಭಗೊಂಡಿದೆ. ಈವರೆಗೆ ಯಾವುದೇ ರೀತಿಯ ಅಡ್ಡಿಯಾಗಿಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಂಡುಬಂದಿಲ್ಲ. ಇದೊಂದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ADVERTISEMENT

ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರಿಗೆ ಬಹಳಷ್ಟು ಜವಾಬ್ದಾರಿಗಳಿವೆ. ತಳಮಟ್ಟದ ಶಿಕ್ಷಣದ ಜೊತೆಗೆ ಶಿಸ್ತು, ಸಮಯಪಾಲನೆ, ದೇಶಾಭಿಮಾನ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಿಂದ ಮಾತ್ರ ಸಾಧ್ಯ. ಸರ್ಕಾರದ ಮಾರ್ಗಸೂಚಿ ಅನ್ವಯ ಕಾರ್ಯ ಚಟುವಟಿಕೆ ಇರಬೇಕು ಎಂದು ಹೇಳಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ನಾಗರಾಜ್ ಮಾತನಾಡಿ, ಜಿಲ್ಲೆಯ ನಾಲ್ಕು ತಾಲ್ಲೂಕಿನ ವ್ಯಾಪ್ತಿಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆ ಚುರುಕುಗೊಳಿಸಲಾಗಿದೆ. ದೇವನಹಳ್ಳಿ ತಾಲ್ಲೂಕಿನಲ್ಲಿ ಅತಿಹೆಚ್ಚು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿದ್ದಾರೆ ಎಂದುತಿಳಿಸಿದರು.

ತೃತೀಯ ಸೋಪಾನ ಮತ್ತು ರಾಜ್ಯ ಪುರಸ್ಕಾರದ ಕಾರ್ಯ ಯೋಜನೆಗಳ ವೇಳಾಪಟ್ಟಿ ಸಿದ್ಧತೆ ಮಾಡಿಕೊಳ್ಳಬೇಕು. ಶಾಲೆಗಳ ಮುಖ್ಯಶಿಕ್ಷಕರ ಸಹಕಾರ ಪಡೆದು ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

ಜಿಲ್ಲಾ ಆಯುಕ್ತ ಮೋಹನ್ ಬಾಬು, ಪ್ರಧಾನ ಕಾರ್ಯದರ್ಶಿ ಪ್ರಸಾದ್, ಜಿಲ್ಲಾ ಖಜಾಂಚಿ ಗೋಪಾಲಸ್ವಾಮಿ, ತಾಲ್ಲೂಕು ಅಧ್ಯಕ್ಷ ಶ್ರೀರಾಮಯ್ಯ, ಕಾರ್ಯದರ್ಶಿ ಶಿವಶಂಕರ್ ಇದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಯೋಧ ವೆಂಕಟೇಶ್ ಸ್ಕೌಟ್ಸ್‌ಗೆ ಸೇರ್ಪಡೆಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.