ದೇವನಹಳ್ಳಿ: ಎತ್ತಿನಹೊಳೆ ಯೋಜನೆಯು 2027ಕ್ಕೆ ಪೂರ್ಣಗೊಳ್ಳುವ ವಿಶ್ವಾಸವಿದ್ದು, ಬಯಲು ಸೀಮೆ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ಸಿಗಲಿದೆ ಎಂದು ಆಹಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಇತ್ತೀಚೆಗೆ ನಂದಿ ಗಿರಿಧಾಮದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದಂತೆ ಎತ್ತಿನಹೊಳೆ ಯೋಜನೆಗೆ ಪರಿಷ್ಕೃತ ವೆಚ್ಚದ ಬಗ್ಗೆ ಮುಖ್ಯಮಂತ್ರಿಗಳು ತಿಳಿಸಿದ್ದು, 2027ಕ್ಕೆ ಕೋಲಾರ ಭಾಗದವರೆಗೆ ಎತ್ತಿನಹೊಳೆ ನೀರು ಹರಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10,000 ನಿವೇಶನ ನೀಡುವ ಗುರಿ ಹೊಂದಲಾಗಿದೆ. ಬಡವರಿಗೆ ಮನೆ, ನಿವೇಶನ ನೀಡುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ನಿವೇಶನ ಅಭಿವೃದ್ಧಿಪಡಿಸುವ ಕಾರ್ಯ ಭರದಿಂದ ಸಾಗಿದೆ. ಹಂತ ಹಂತವಾಗಿ ನಿವೇಶನ ಹಂಚಲಾಗುವುದು. ಈಗಾಗಲೇ 2,500 ಮನೆಗಳು ಮಂಜೂರಾಗಿದ್ದು ,ಮುಂದಿನ ದಿನಗಳಲ್ಲಿ ಇದನ್ನು ಬಡವರಿಗೆ ಹಂಚಲಾಗುತ್ತದೆ ಎಂದರು.
ಜಿಲ್ಲಾಸ್ಪತ್ರೆಗೆ ಹಣ ಬಿಡುಗಡೆ ಮಾಡಲು ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು. ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳಿಂದ 250 ಹಾಸಿಗೆ ಸಾಮರ್ಥ್ಯದವರೆಗೆ ಮೇಲ್ದರ್ಜೆಗೇರಿಸಲು ಚರ್ಚಿಸಲಾಗುವುದು ಎಂದು ತಿಳಿಸಿದರು.
ಪಡಿತರ ವಿತರಣೆ ವೇಳಾಪಟ್ಟಿ ಪ್ರದರ್ಶಿಸಿ: ಪಡಿತರ ವಿತರಿಸುವ ದಿನಾಂಕ, ಸಮಯ, ಒಬ್ಬ ಫಲಾನುಭವಿಗೆ ಎಷ್ಟು ಆಹಾರಧಾನ್ಯ ವಿತರಿಸಲಾಗುವುದು ಎಂಬುದರ ಬಗ್ಗೆ ಪ್ರತಿ ಪಡಿತರ ಅಂಗಡಿ ಮುಂದೆ ಸಾರ್ವಜನಿಕವಾಗಿ ಫಲಕ ಹಾಕಬೇಕು. ಗ್ರಾಮೀಣ ಪ್ರದೇಶದಲ್ಲಿ 500 ರೇಷನ್ ಕಾರ್ಡ್‌ಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಕಾರ್ಡ್‌ಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.
ಅಗತ್ಯವಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಸಾರ್ವಜನಿಕರು ರಸ್ತೆ ದಾಟಲು ಸ್ಕೈವಾಕ್ ನಿರ್ಮಾಣಕ್ಕೆ ಅಧಿಕಾರಿಗಳಿಗೆ ತಿಳಿಸಲಾಗುವುದು. ಜೊತೆಗೆ ಬೆಂಗಳೂರು ಮತ್ತು ಕುಣಿಗಲ್ ಮಾರ್ಗದಲ್ಲಿ ರಜೆ ದಿನಗಳಲ್ಲಿ ಹೆಚ್ಚು ವಾಹನಗಳು ಓಡಾಡುತ್ತದೆ. ಅಲ್ಲಿ ಗಂಟೆಗಟ್ಟಲೆ ವಾಹನ ದಟ್ಟಣೆ ಇರುತ್ತದೆ. ಅದನ್ನು ಕಡಿಮೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಗ್ಯಾರಂಟಿ ತಲುಪಬೇಕು ಎಂಬುದು ಸರ್ಕಾರದ ಉದ್ದೇಶ. ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದೀವಿ. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿದೆ ಎಂದರು.
ಸಭೆಯಲ್ಲಿ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ನೆಲಮಂಗಲ ಶಾಸಕ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಸೂರಜ್ ಎಂ.ಹೆಗಡೆ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಕೆ.ಎನ್.ಅನುರಾಧ, ಎಸ್‌ಪಿ ಸಿ.ಕೆ.ಬಾಬಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೆಡಿಪಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಕಾನೂನು ಬಾಹಿರ ಕಸ ವಿಲೇವಾರಿ: ಕ್ರಮಕ್ಕೆ ಶಾಸಕ ಆಗ್ರಹ
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಕಸ ವಿಲೇವಾರಿ ಘಟಕದಲ್ಲಿ ಯಾವುದೇ ಮಾನದಂಡಗಳನ್ನು ಅನುಸರಿಸದೆ ಗ್ರಾಮ ಪಂಚಾಯಿತಿಯಿಂದ ಅನುಮತಿ ಇಲ್ಲದೆ ದಿನ ನಿತ್ಯ ಟನ್‌ಗಟ್ಟಲೆ ಬಿಬಿಎಂಪಿ ಕಸ ಸುರಿಯುತ್ತಿದೆ. ಇದರಿಂದ ಸುತ್ತಮುತ್ತಲಿನ ದೊಡ್ಡಬೆಳವಂಗಲ ಹಾಗೂ ಸಾಸಲು ಹೋಬಳಿಯ ಹಲವು ಗ್ರಾಮಗಳಲ್ಲಿ ಅಂತರ್ಜಲ ಕಲುಷಿತಗೊಂಡಿದೆ. ಇದರಿಂದ ಪರಿಸರ ವಾಯುಮಾಲಿನ್ಯ ಹೆಚ್ಚಾಗಿದೆ. ಇದರ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಯು ವರದಿ ನೀಡಿದ್ದರು. ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಅವರು ಸಚಿವರಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಕೆ.ಎಚ್.ಮುನಿಯಪ್ಪ ಸರ್ಕಾರದ ಹಂತದಲ್ಲಿ ಉಪಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಈ ವಿಷಯಕ್ಕೆ ಸಂಬಂಧಿಸಿ ಸಭೆ ಕರೆದು ನಿಮ್ಮನ್ನು ಆಹ್ವಾನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.