ADVERTISEMENT

ವಿದ್ಯಾರ್ಥಿಗಳಿಗೆ ಪುಸ್ತಕಗಳೇ ಸ್ನೇಹಿತರು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2020, 3:42 IST
Last Updated 16 ಅಕ್ಟೋಬರ್ 2020, 3:42 IST
ದೇವನಹಳ್ಳಿ ಪಟ್ಟಣದಲ್ಲಿ ನಡೆದ ಗುರುವಂದನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷ ಬಿ.ಕೆ. ನಾರಾಯಣಸ್ವಾಮಿ ಉದ್ಘಾಟಿಸಿದರು
ದೇವನಹಳ್ಳಿ ಪಟ್ಟಣದಲ್ಲಿ ನಡೆದ ಗುರುವಂದನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷ ಬಿ.ಕೆ. ನಾರಾಯಣಸ್ವಾಮಿ ಉದ್ಘಾಟಿಸಿದರು   

ದೇವನಹಳ್ಳಿ: ‘ವಿದ್ಯಾರ್ಥಿಗಳು ಪುಸ್ತಕಗಳನ್ನೇ ಆಪ್ತ ಗೆಳೆಯರನ್ನಾಗಿ ಮಾಡಿಕೊಳ್ಳಬೇಕು’ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷ ಬಿ.ಕೆ. ನಾರಾಯಣಸ್ವಾಮಿ ಸಲಹೆ ನೀಡಿದರು.

ಪಟ್ಟಣದ ನಗರೇಶ್ವರ ಕಲ್ಯಾಣ ಮಂದಿರದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ನಡೆದ ಗುರುವಂದನೆ ಮತ್ತು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಕನ್ನಡ ಪ್ರಥಮ ಭಾಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶತಮಾನದ ಇತಿಹಾಸ ಹೊಂದಿರುವ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿಗೆ ಮೊದಲು ಅಧ‍್ಯಕ್ಷರಾಗಿದ್ದವರು ನಂಜುಂಡಯ್ಯ. 1915ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಅವರು ಕನ್ನಡ ಭಾಷೆಯ ಬೆಳವಣಿಗೆಯ ದೂರದೃಷ್ಟಿಯ ಫಲವಾಗಿ ಪರಿಷತ್‌ ಜನ್ಮ ತಾಳಿತು. ಅಂದಿನಿಂದ ಇಂದಿನವರೆಗೆ ಅನೇಕ ಸಾಹಿತಿಗಳು, ಚಿಂತಕರು ಪರಿಷತ್‌ಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.

ADVERTISEMENT

‘ಕೋವಿಡ್‌–19 ಸೋಂಕು ಹರಡದಂತೆ ಪ್ರತಿಯೊಬ್ಬರು ಎಚ್ಚರವಹಿಸಬೇಕಿದೆ. ಮಾಸ್ಕ್ ಇಲ್ಲದೆ ತಿರುಗಾಡುವುದು, ಉಗುಳುವುದು ಸಲ್ಲದು ಎಂದ ಅವರು, ಪೋಷಕರು ಮಕ್ಕಳ ಭವಿಷ್ಯದ ಶಿಕ್ಷಣಕ್ಕೆ ಒತ್ತು ನೀಡಬೇಕು’ ಎಂದರು.

ನಿವೃತ್ತ ಶಿಕ್ಷಕ ಶರಣಯ್ಯ ಹಿರೇಮಠ್ ಮಾತನಾಡಿ, ‘ಮಾನವ ಪ್ರಕೃತಿಯ ಮೇಲೆ ಮಾಡಿದ ಸವಾರಿಯ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಕೋವಿಡ್‌ ಇದಕ್ಕೊಂದು ನಿದರ್ಶನ. ಪ್ರಕೃತಿ ಮತ್ತು ಮಾನವನ ನಡುವೆ ಅವಿನಾಭಾವ ಸಂಬಂಧವಿದೆ. ಈ ಕೊಂಡಿ ಕಳಚಿಕೊಂಡರೆ ಮನುಕುಲ ಸರ್ವನಾಶವಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಸಾಹಿತ್ಯಕ್ಕೆ ಪ್ರಾದೇಶಿಕ ಪ್ರಕೃತಿ ಮತ್ತು ಜನಪದ ಸಂಸ್ಕೃತಿಯೇ ಪ್ರೇರಣೆ. ನಾಡಿನಲ್ಲಿ ನೂರಾರು ಸಾಹಿತಿಗಳು ಲಕ್ಷಾಂತರ ಪುಸ್ತಕಗಳನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು ಪ್ರತಿದಿನ ಪುಸ್ತಕ, ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು
ಹೇಳಿದರು.

‘ಶಿಕ್ಷಕರು ವಿದ್ಯಾರ್ಥಿಗಳಿಗೆ ನೈಜ ಪರಿಕಲ್ಪನೆಗಳನ್ನು ಅರ್ಥ ಮಾಡಿಸಬೇಕು. ತಮ್ಮ ವೃತ್ತಿಗೆ ವಂಚನೆ ಮಾಡಬಾರದು. ಅಂಕಗಳಿಕೆಯ ಜೊತೆಗೆ ಮಕ್ಕಳ ವ್ಯಕ್ತಿತ್ವ ರೂಪಿಸುವತ್ತಲೂ ಚಿಂತಿಸಬೇಕು’ ಎಂದು ಹೇಳಿದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಕೆ. ನಂಜೇಗೌಡ ಅಧ್ಯಕ್ಷತೆವಹಿಸಿದ್ದರು. ಡಿಡಿಪಿಐ ಗಂಗಾ ಮಾರೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಉಪಾಧ‍್ಯಕ್ಷ ವೆಂಕಟಾಚಲ, ದೈಹಿಕ ಶಿಕ್ಷಣ ಪರಿವೀಕ್ಷಕ ಜನಾರ್ಧನ್, ಕಸಾಪ ತಾಲ್ಲೂಕು ಘಟಕದ ಗೌರವಾಧ‍್ಯಕ್ಷ ಜಯರಾಮೇಗೌಡ, ಉಪಾಧ್ಯಕ್ಷ ರಾಮಾಂಜಿನಪ್ಪ, ಕಾರ್ಯಾಧ್ಯಕ್ಷ ಸಿ. ಮೋಹನ್ ಬಾಬು, ಸಂಘಟನಾ ಕಾರ್ಯದರ್ಶಿ ಮಾರೇಗೌಡ, ನಗರ ಘಟಕದ ಅಧ್ಯಕ್ಷ ರಮೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಪರಮೇಶ್, ಮುಖಂಡರಾದ ಚಂದ್ರೇಗೌಡ, ಅಮರ್, ಸುರೇಶ್, ಶ್ರೀರಾಮಯ್ಯ, ಚನ್ನಬಸಪ್ಪ, ಪುಟ್ಟಸ್ವಾಮಿ, ರಂಗಸ್ವಾಮಿ, ಅಶ್ವಥನಾರಾಯಣ ಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.