ADVERTISEMENT

ಸರ್ಕಾರಿ ಶಾಲೆ ದಾಖಲಾತಿ ಹೆಚ್ಚಳಕ್ಕೆ ಗುಣಮಟ್ಟದ ಶಿಕ್ಷಣ: ಡಾ.ಪಿ.ಸಿ.ಜಾಫರ್

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 2:13 IST
Last Updated 16 ಅಕ್ಟೋಬರ್ 2025, 2:13 IST
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ಸಾಮಾನ್ಯಸಭೆಯಲ್ಲಿ ಪಿ.ಸಿ.ಜಾಫರ್ ಮಾತನಾಡಿದರು. ಜಿಲ್ಲಾಧಿಕಾರಿ ಎ.ಬಿ. ಬಸವರಾಜ್‌, ಜಿ.ಪಂ ಸಿಇಒ ಕೆ.ಎನ್‌.ಅನುರಾಧ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಉಪಸ್ಥಿತರಿದ್ದರು
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ಸಾಮಾನ್ಯಸಭೆಯಲ್ಲಿ ಪಿ.ಸಿ.ಜಾಫರ್ ಮಾತನಾಡಿದರು. ಜಿಲ್ಲಾಧಿಕಾರಿ ಎ.ಬಿ. ಬಸವರಾಜ್‌, ಜಿ.ಪಂ ಸಿಇಒ ಕೆ.ಎನ್‌.ಅನುರಾಧ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಉಪಸ್ಥಿತರಿದ್ದರು   

ದೇವನಹಳ್ಳಿ: ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಗುಣಮಟ್ಟದ ಶಿಕ್ಷಣ ನೀಡಬೇಕು. ಗುಣಮಟ್ಟದ ಶಿಕ್ಷಣ ಹಾಗೂ ಆಧುನಿಕ ಮೂಲ ಸೌಕರ್ಯ ಒಂದು ಶಾಲೆಗೆ ಒದಗಿಸಿದರೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗಲಿದೆ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ.ಪಿ.ಸಿ.ಜಾಫರ್ ತಿಳಿಸಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾ–ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಉತ್ತಮ ಫಲಿತಾಂಶ ತರಲು ಕ್ರಮ ವಹಿಸಬೇಕು. ಮುಂಬರುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಒಟ್ಟಾರೆ ಫಲಿತಾಂಶ ಹಾಗೂ ವಿದ್ಯಾರ್ಥಿಗಳು ವೈಯಕ್ತಿಕ ಸಾಧನೆ ಮಾಡುವಂತೆ ಶಿಕ್ಷಕರು ಮತ್ತು ಶಿಕ್ಷಣ ಅಧಿಕಾರಿಗಳು ಮಕ್ಕಳಿಗೆ ತರಬೇತಿ ನೀಡಬೇಕು ಎಂದರು.

ADVERTISEMENT

ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ನವೆಂಬರ್ ತಿಂಗಳಿನಲ್ಲಿ ಕಾಲುಬಾಯಿ ರೋಗಕ್ಕೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈ ಬಾರಿ 61,513 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗಿದೆ. ರಾಗಿ ಬೆಳೆಗೆ ₹4,886 ಬೆಂಬಲ ಬೆಲೆ ನೀಡಲಾಗುತ್ತಿದೆ. ಮುಂಗಾರು ಹಂಗಾಮಿಗೆ 3,698 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದೆ. 3,304 ಕ್ವಿಂಟಾಲ್ ವಿತರಿಸಲಾಗಿದೆ. ಪ್ರಸ್ತುತ 31,799 ಮೆಟ್ರಿಕ್ ಟನ್ ಮುಂಗಾರು ಹಂಗಾಮಿನ ರಸಗೊಬ್ಬರ ಬೇಡಿಕೆ ಇದೆ. ಹಾಗಾಗಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಶೀಘ್ರವೇ ರಸಗೊಬ್ಬರ ಬೇಡಿಕೆ ನಿವಾರಿಸಿ ಎಂದು ಡಾ.ಪಿ.ಸಿ.ಜಾಫರ್ ನಿರ್ದೇಶಿಸಿದರು.

ಸಭೆಯಲ್ಲಿ ಎಲ್ಲಾ ಇಲಾಖೆಗಳ ಪ್ರಗತಿಯನ್ನು ಉದ್ದೇಶಿಸಿ ಮುಂದಿನ ಬಾರಿ ಯಾವುದೇ ಕಾರಣಗಳನ್ನು ನೀಡದೆ ಬಾಕಿ ಉಳಿದಿರುವ ಕಾರ್ಯಗಳನ್ನು ಸಮಯಕ್ಕೆ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎನ್. ಅನುರಾಧ, ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್ ಉಪಸ್ಥಿತರಿದ್ದರು.

ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆಯ ಅಧಿಕಾರಿಗಳು

ಸಿದ್ಧ ಉಡುಪುಗೆ ಮಾರುಕಟ್ಟೆ

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗದಿಂದ ಸಿದ್ಧ ಉಡುಪು ತಯಾರಿಸುತ್ತಿದ್ದು ಅವರಿಗೆ ಜಿಲ್ಲೆಯಲ್ಲಿ ಉತ್ಪಾದನಾ ಘಟಕಗಳಿಗೆ ಒಂದು ಮಾರುಕಟ್ಟೆಯ ಅವಶ್ಯಕತೆ ಇದೆ. ಹಾಗಾಗಿ ಒಂದು ಸ್ಥಳವನ್ನು ಗುರುತಿಸಿ ಅಲ್ಲಿ ಮಾರುಕಟ್ಟೆಯನ್ನು ನಿರ್ಮಿಸಿಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ.ಪಿ.ಸಿ.ಜಾಫರ್ ತಿಳಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಹಲವರು ತಮ್ಮ ಮನೆ ಕೆಲವರು ಬಾಡಿಗೆ ಮನೆಯಲ್ಲೇ ಕೈಮಗ್ಗ ಮತ್ತು ಜವಳಿ ಮಗ್ಗ ನಡೆಸುತ್ತಿದ್ದಾರೆ. ಇವರಿಗೆ ಎಸ್‌ಎಂಇ ಯೋಜನೆ ಹಾಗೂ ವಿವಿಧ ಯೋಜನೆಗಳಿಂದ ಲಭ್ಯವಿರುವ ಪ್ರೋತ್ಸಾಹ ಧನ ಸಹಾಯಧನ ಒದಗಿಸುವ ಮೂಲಕ ಉತ್ತೇಜನ ನೀಡಬೇಕು ಎಂದರು.

ನಿಗದಿತ ಅವಧಿಯಲ್ಲಿ ಸಮೀಕ್ಷೆ ಪೂರ್ಣಗೊಳಿಸಿ

ಇದುವರೆಗೆ ಜಿಲ್ಲೆಯ 301800 ಕುಟುಂಬಗಳಲ್ಲಿ  1010421 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದ್ದು ಶೇ ಶೇ 82.59 ರಷ್ಟು ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಐದು ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ. ಸಮೀಕ್ಷೆಯಲ್ಲಿ ಬಿಟ್ಟು ಹೋದ ಕುಟುಂಬಗಳು ಭಾಗವಹಿಸದೇ ಇರುವವರು ಸಹಾಯವಾಣಿ ಸಂಪರ್ಕಿಸಿದರೆ ಗಣತಿದಾರರು ನಿಮ್ಮ ಮನೆ ಬಾಗಿಲಿಗೆ ಬಂದು ಸಮೀಕ್ಷೆ ಮಾಡಲಿದ್ದಾರೆ. ನಿಗದಿತ ಅವಧಿಯೊಳಗೆ ಜಿಲ್ಲೆಯಲ್ಲಿ ಶೇಕಡ 100ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.