
ಚಂದಾಪುರ (ಆನೇಕಲ್): ರಾಜ್ಯ ಸರ್ಕಾರ ತರಾತುರಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ(ಜಿಬಿಎ) ಚುನಾವಣೆ ಸಿದ್ಧತೆ ನಡೆಸಿದೆ. ಜೆಡಿಎಸ್ ಪಕ್ಷ ಗೆಲುವು ಸಾಧಿಸುವ ಕ್ಷೇತ್ರಗಳನ್ನು ವಿಂಗಡನೆ ಮಾಡುವ ಮೂಲಕ ಅಧಿಕಾರ ಪಡೆಯಲು ಹುನ್ನಾರ ನಡೆಸಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ಆರೋಪಿಸಿದರು.
ಆನೇಕಲ್ ಅನ್ನು ಜಿಬಿಎಗೆ ಸೇರಿಸುವ ಸಂಬಂಧ ಹಲವು ಗೊಂದಲಗಳಿದ್ದು, ಸರ್ಕಾರದ ನಿರ್ಧಾರದ ನಂತರ ಜೆಡಿಎಸ್ ಪಕ್ಷ ಮುಂದಿನ ಕ್ರಮಗಳನ್ನು ಅನುಸರಿಸಲಿದೆ. ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಮುಂದಿನ ವಿಧಾನಸಭೆಗೆ ಕೆ.ಪಿ.ರಾಜು ಅವರು ಎನ್‌ಡಿಎ ಮೈತ್ರಿಕೂಟದ ಪ್ರಬಲ ಆಕಾಂಕ್ಷಿಯಾಗಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೈತ್ರಿಗೆ ಜಿಬಿಎ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ಜನ ಬೆಂಬಲ ನೀಡಲಿದ್ದಾರೆ. ಜಿಬಿಎನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ತಿಳಿಸಿದರು.
ಅಧಿಕಾರ ಶಾಶ್ವತವಲ್ಲ ಎಂಬುದನ್ನು ಕಾಂಗ್ರೆಸ್ ಪಕ್ಷ ತಿಳಿದುಕೊಳ್ಳಬೇಕು. ಕಾಂಗ್ರೆಸ್ ದುರಾಡಳಿತದಿಂದ ಕರ್ನಾಟಕದಲ್ಲಿ ಮುಂದಿನ 15 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದರು.
ಜೆಡಿಎಸ್ ಮುಖಂಡ ಕೆ.ಪಿ.ರಾಜು ಮಾತನಾಡಿದರು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪಟಾಪಟ್ ರವೀಂದ್ರ, ತಾಲ್ಲೂಕು ಅಧ್ಯಕ್ಷ ಹಾರೋಹಳ್ಳಿ ದೇವೇಗೌಡ, ಮುಖಂಡರಾದ ಶೆಟ್ಟಿಹಳ್ಳಿ ವಿನಯ್ ರೆಡ್ಡಿ ಇದ್ದರು.
22ಕ್ಕೆ ಕಾರ್ಯಕರ್ತರ ಸಭೆ: ಜ.22ರಂದು ತಾಲ್ಲೂಕಿನ ಸೂರ್ಯಸಿಟಿಯಲ್ಲಿ ಬೃಹತ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ಮುಖಂಡರು, ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ಸಭೆಯಲ್ಲಿ ಚರ್ಚಿಸಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯದಾಂದ್ಯ ಜೆಡಿಎಸ್ ಹೋರಾಟ ನಡೆಸಲಿದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.