ದೇವನಹಳ್ಳಿ: ದೀಪಾವಳಿ ಸಂದರ್ಭದಲ್ಲಿ ವಾಯುಮಾಲಿನ್ಯ ತಡೆಗಟ್ಟಲು ಪರಿಸರಸ್ನೇಹಿ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪಟಾಕಿ ಮಾರಾಟ ಸುರಕ್ಷತಾ ಸಭೆಯಲ್ಲಿ ಮಾತನಾಡಿದ ಅವರು, ಹಸಿರು ಪಟಾಕಿ ಬಿಟ್ಟು ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.
ಪಟಾಕಿ ಮಾರಾಟಗಾರರು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಸುರಕ್ಷತಾ ಕ್ರಮ ಅನುಸರಿಸಿದರೆ ಮಾತ್ರ ಪರವಾನಗಿ ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ಹಸಿರು ಪಟಾಕಿಯಲ್ಲದೆ ನಿಷೇಧಿತ ಪಟಾಕಿಗಳ ಉತ್ಪಾದನೆ, ದಾಸ್ತಾನು ಮತ್ತು ಮಾರಾಟ ಮಾಡುವಂತಿಲ್ಲ. ಮಳಿಗೆಗಳಲ್ಲಿ ಅನಧಿಕೃತವಾಗಿ ಪಟಾಕಿ ದಾಸ್ತಾನು ಮಾಡಿಕೊಳ್ಳುವಂತಿಲ್ಲ. ಒಂದು ವೇಳೆ ಆ ರೀತಿ ಮಾಡಿದರೆ ಇಡೀ ಗೋದಾಮು ಮುಟ್ಟುಗೋಲು ಹಾಕಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಟಾಕಿ ದಾಸ್ತಾನು, ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡುವ ಮುನ್ನ ಪೊಲೀಸರು ಎಲ್ಲ ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಬೇಕು. ಪಟಾಕಿ ದುರಂತ ಸಂಭವಿಸದಂತೆ ಪಟಾಕಿ ಮಾರಾಟಗಾರರು ಹಾಗೂ ಅಧಿಕಾರಿಗಳು ಮುಂಜಾಗ್ರತಾ ಹಾಗೂ ಸುರಕ್ಷತಾ ಕ್ರಮ ವಹಿಸಬೇಕು ಎಂದು ಸಲಹೆ ಮಾಡಿದರು.
ಹಬ್ಬದ ಸಂದರ್ಭದಲ್ಲಿ ರಾತ್ರಿ 8ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಿದೆ.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಡಿವೈಎಸ್‌ಪಿ ರವಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.