
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಬದಲಾವಣೆ ತಂದಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷರು ಎನ್.ವಿಶ್ವನಾಥರೆಡ್ಡಿ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಹಾಗೂ ಯುವನಿಧಿ ಜನಸಾಮಾನ್ಯರಿಗೆ ನೆಮ್ಮದಿ, ಆರ್ಥಿಕ ಭದ್ರತೆ ಮತ್ತು ಆತ್ಮವಿಶ್ವಾಸ, ಮಹಿಳೆಯರಿಗೆ ಕುಟುಂಬದ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಿದೆ ಎಂದರು.
ರಾಜ್ಯದಲ್ಲಿ ₹4 ಕೋಟಿಗೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಪ್ರತಿ ಪಕ್ಷಗಳು, ಬಂಡವಾಳಶಾಹಿಗಳು ಗ್ಯಾರಂಟಿಗಳನ್ನು ವಿರೋಧಿಸುವರು, ಟೀಕಿಸುತ್ತಿದ್ದವರೇ ದೇಶದ ಇತರೆ ರಾಜ್ಯಗಳಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ನಮ್ಮ ಯೋಜನೆಯನ್ನು ನಕಲು ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರದ ಯೋಜನೆ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 62,838 ಮಹಿಳೆಯರು ಫಲಾನುಭವಿಗಳಿದ್ದು, ಈವರೆಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ತಿಂಗಳಿಗೆ ₹2 ಸಾವಿರ ದಂತೆ ₹276 ಕೋಟಿ ನೇರವಾಗಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ 91,093 ಫಲಾನುಭವಿಗಳಿದ್ದು, 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದ್ದು 3,22,15,000 ಕೋಟಿ ಬಳಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು, ಬಡವ ಬಲ್ಲಿದರೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವದಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಇದು ರಾಜ್ಯ ಸರ್ಕಾರದ ಆಶಯವಾಗಿದ್ದು ‘ಕರ್ನಾಟಕ ಮಾದರಿ’ ಆಡಳಿತದ ಮೂಲ ಆಶಯ ಸಾಕಾರಗೊಳ್ಳಲು ಅಧಿಕಾರಿಗಳು ಸಹಕಾರ ನೀಡಬೇಕೆಂದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಹರ್ತಿ, ಸಿಡಿಪಿಒ ವಿನೋದ್ ಕುಮಾರ್, ಕೆಎಸ್‌ಆರ್‌ಟಿಸಿ ಡಿಪೊ ವ್ಯವಸ್ಥಾಪಕ ವೆಂಕಟರಾಮ್, ಆಹಾರ ಇಲಾಖೆ ಶಿರಸ್ತೆದಾರ್ ಶ್ರೀಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.