ದೇವನಹಳ್ಳಿ: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ‘ನಮ್ಮ ಸಮೀಕ್ಷೆ ನಮ್ಮ ಜವಾಬ್ದಾರಿ’ ಎಂಬ ಧ್ಯೇಯವಾಕ್ಯದಡಿ ಮನೆ ಮನೆ ಸಮೀಕ್ಷೆಯನ್ನು ಸೆ.22ರಿಂದ ಆರಂಭಿಸಲಿದೆ. ಗಣತಿದಾರರಿಗೆ ಜನರು ಸೂಕ್ತ ಮಾಹಿತಿ ನೀಡಿ ಸಹಕರಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಕೋರಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕುರಿತು ಜಿಲ್ಲೆಯ ಸಮುದಾಯ ಮುಖಂಡರು ಮತ್ತು ಗ್ರಾಮ ಪಂಚಾಯಿತಿಯ ಅಧ್ಯಕ್ಷರಿಗೆ ಸೋಮವಾರ ಹಮ್ಮಿಕೊಂಡಿದ್ದ ಅರಿವು ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳಿದ್ದು ಸಮೀಕ್ಷೆ ಕಾರ್ಯವನ್ನು ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದ ಮೇಲೆ ಸಮೀಕ್ಷಾದಾರರು ಸಮೀಕ್ಷೆ ಮಾಡಲಿದ್ದಾರೆ. ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆಧಾರ್ ಕಾರ್ಡ್, ಅಂಗವಿಕಲರಾಗಿದ್ದರೆ ಯುಐಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ ಸಿದ್ಧ ಮಾಡಿ ಇಟ್ಟುಕೊಂಡಿದ್ದರೆ ಸಮೀಕ್ಷೆ ಸುಲಭವಾಗುತ್ತದೆ ಎಂದು ತಿಳಿಸಿದರು.
ಜೊತೆಗೆ ಕುಟುಂಬದ ಎಲ್ಲಾ ಸದಸ್ಯರಗಳ ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್‌ಗೆ ಓಟಿಪಿ ಬರುವುದರಿಂದ ಆಧಾರ್ ಕಾರ್ಡ್‌ಗೆ ಮೊಬೈಲ್ ನಂಬರ್ ಲಿಂಕ್ ಆಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ ಎಂದರು.
ಸಮೀಕ್ಷೆ ಸಂಧರ್ಭದಲ್ಲಿ ಅವರ ಮನೆಯಲ್ಲಿ ಇಲ್ಲದಿದ್ದರೆ ಆ ಸಂಧರ್ಭದಲ್ಲಿ ಮನೆಯಲ್ಲಿ ಇರುವ ಸದಸ್ಯರು ಮನೆಯಲ್ಲಿ ಇಲ್ಲದಿರುವ ಸದಸ್ಯರಿಗೆ ಫೋನ್ ಮಾಡಿ ಒಟಿಪಿ ಪಡೆದು ಮಾಹಿತಿ ನೀಡಬೇಕಾಗುತ್ತದೆ ಎಂದರು.
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎನ್. ಅನುರಾಧ, ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ತಿಳಿದುಕೊಂಡು ರಾಜ್ಯದ ನೀತಿ ನಿರೂಪಣೆ ಕೈಗೊಳ್ಳುಲು ಆಧಾರವಾಗಿರುತ್ತದೆ. ಸಮೀಕ್ಷೆ ಕಾರ್ಯವೂ ಸೇವೆಯ ಒಂದು ಭಾಗವಾಗಿದೆ. ಈ ಕಾರ್ಯವನ್ನು ಅನುಷ್ಠಾನ ಆಗುವಂತೆ ಮಾಡುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ ಎಂದರು.
ಪ್ರಶ್ನಾವಳಿಯಲ್ಲಿ ಪ್ರತಿ ಸದಸ್ಯರ ವಿದ್ಯಾರ್ಹತೆ, ಕೌಶಲ್ಯ ತರಬೇತಿ ಅಗತ್ಯತೆ, ಆದಾಯ, ಕುಟುಂಬದ ಸ್ಥಿರ ಮತ್ತು ಚರಾಸ್ತಿ ವಿವರಗಳು ಧರ್ಮ, ಜಾತಿ, ಉಪಜಾತಿ ಹಾಗೂ ಕುಲಕಸುಬು ಮುಂತಾದ ವಿಷಯಗಳು ಸೇರಿದಂತೆ ಎಲ್ಲಾ ಪ್ರಶ್ನೆಗಳಿಗೂ ಕುಟುಂಬದ ಸದಸ್ಯರು ಸರಿಯಾದ ಮಾಹಿತಿ ನೀಡಬೇಕು ಎಂದರು.
ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಜಯ ಶ್ರೀ ಯಂಡೆಗಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಟಿ.ಎಲ್.ಎಸ್ ಪ್ರೇಮಾ, ಸಾಂಕಿಕ ಇಲಾಖೆಯ ಉಪ ನಿರ್ದೇಶಕ ಲಕ್ಷ್ಮೀ ಕಾಂತ್ ಉಪಸ್ಥಿತರಿದ್ದರು.
***
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಸಂಖ್ಯೆ: 8050770004. ವೆಬ್‌ಸೈಟ್ https://kscbc.karnataka.gov.in ಮೂಲಕ ಮಾಹಿತಿ ಪಡೆಯಬಹುದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.