
ದೇವನಹಳ್ಳಿ: ವಿದ್ಯಾರ್ಥಿ ನಿಲಯದ ಉಸ್ತುವಾರಿ ನೋಡುಕೊಳ್ಳುವ ವಾರ್ಡನ್‌ಗಳು ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಬೇಕು. ಮಕ್ಕಳು ಹೆಚ್ಚಿನ ಸಮಯ ಹಾಸ್ಟೆಲ್ ಗಳಲ್ಲಿ ಕಳೆಯುವುದರಿಂದ ನಿಮ್ಮ ಮಕ್ಕಳಂತೆ ಅವರ ಮೇಲೆ ಅದೇ ಕಾಳಜಿ ಇರಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಸಲಹೆ ನೀಡಿದರು.
ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ₹3.96 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಿ. ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಪ್ರತಿ ವಾರ ಹಾಸ್ಟೆಲ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಅಲ್ಲೇ ಊಟ ಮಾಡಿ, ವಿದ್ಯಾರ್ಥಿಗಳ ಕುಂದು ಕೊರತೆ ಆಲಿಸಿ, ಅವರಿಗೆ ಯಾವ ಸೌಲಭ್ಯ ಬೇಕು ಎನ್ನುವ ಬಗ್ಗೆ ನಮ್ಮ ಗಮನಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಾಸ್ಟೆಲ್‌ಗಳಲ್ಲಿ ಓದುವ ವಿದ್ಯಾರ್ಥಿಗಳು ಇಲ್ಲಿ ಸಿಗುವ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಸ್ಮಧಾತ್ಮಕ ಪರೀಕ್ಷೆ ಎದುರಿಸಿ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಸರ್ಕಾರ ಹುದ್ದೆಗಳನ್ನು ಅಲಂಕರಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಆರ್ಥಿಕವಾಗಿ ಹಿಂದುಳಿರಿರುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಸೌಲಭ್ಯದಿಂದಾಗಿ ಅವರ ಶೈಕ್ಷಣಿಕ ಅಭ್ಯಾಸಕ್ಕೆ ಅನುಕೂಲವಾಗಲಿದೆ. ಸರ್ಕಾರ ವಿದ್ಯಾರ್ಥಿಗಳ ಹಿತಕ್ಕಾಗಿ ನೀಡುವ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಸಾಧನೆ ಮಾಡಬೇಕು ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ, ಮಂಜುನಾಥ್ ಉಪಸ್ಥಿತರಿದ್ದರು.
₹3.96 ಕೋಟಿ ವೆಚ್ಚದಲ್ಲಿ ನಿರ್ಮಾಣ
ದೇವನಹಳ್ಳಿ ಟೌನ್ ನಲ್ಲಿ ನಿರ್ಮಿಸಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ನೂತನ ವಿದ್ಯಾರ್ಥಿ ನಿಲಯ(ಪರಿವರ್ತಿತ) ಕಟ್ಟಡದ ವಿಸ್ತೀರ್ಣ 1535 ಚ.ಮೀ ₹ 3.96 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದ್ದು 3 ಅಂತಸ್ತಿನ ಕಟ್ಟಡವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.