ADVERTISEMENT

ಕೋವಿಡ್ ಕುರಿತು ಗ್ರಾಮಗಳಲ್ಲಿ ಜನಜಾಗೃತಿ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 1:18 IST
Last Updated 19 ನವೆಂಬರ್ 2020, 1:18 IST
ಕೋವಿಡ್ 19ರ ಜಾಗೃತಿ ರಥಕ್ಕೆ ಚಾಲನೆ ನೀಡಿದ ಸಚಿವ ಆರ್.ಅಶೋಕ್
ಕೋವಿಡ್ 19ರ ಜಾಗೃತಿ ರಥಕ್ಕೆ ಚಾಲನೆ ನೀಡಿದ ಸಚಿವ ಆರ್.ಅಶೋಕ್   

ದೇವನಹಳ್ಳಿ: ಕೋವಿಡ್-19 ವೈರಸ್‌ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಶ್ರವ್ಯ ಮತ್ತು ದೃಶ್ಯ ಮಾಧ್ಯಮದ ಮೂಲಕ ಬೃಹತ್ ಎಲ್.ಇ.ಡಿ ಪರದೆ ಹೊಂದಿರುವ ಮೊಬೈಲ್ ವಾಹನದ ಮೂಲಕ ಪ್ರಚಾರ ಕಾರ್ಯಕ್ರಮಕ್ಕೆ ಬುಧವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸರ್ಕಾರ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಎಲ್.ಇ.ಡಿ ಹೊಂದಿರುವ ವಾಹನಗಳಿಂದ ಕೋವಿಡ್-19 ಕುರಿತ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿನ 105 ಗ್ರಾಮ ಪಂಚಾಯತಿ ವ್ಯಾಪ್ತಿಯ 180 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ ತಲಾ 45 ಗ್ರಾಮಗಳಂತೆ ಪ್ರತಿ ಗ್ರಾಮ ಪಂಚಾಯತಿಯಲ್ಲಿ 2 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಪ್ರತಿದಿನ 10 ಗ್ರಾಮಗಳಲ್ಲಿ ಕೋವಿಡ್-19 ಕುರಿತು ಜಾಗೃತಿ ಮೂಡಿಸಲಾಗುವುದು. 18 ದಿನಗಳ ಜಾಗೃತಿ ಕಾರ್ಯಕ್ರಮ ಇದಾಗಿದ್ದು ಜಿಲ್ಲೆಯಲ್ಲಿ 2 ಎಲ್.ಇ.ಡಿ ವಾಹನಗಳ ಸಂಚರಿಸಲಿದ್ದು, ಪ್ರತಿದಿನ ತಲಾ 5 ಗ್ರಾಮಗಳಂತೆ ಎರಡು ವಾಹನಗಳಿಂದ 10 ಗ್ರಾಮಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಪ್ರಭಾರ ಅಧ್ಯಕ್ಷೆ ಕನ್ಯಾಕುಮಾರಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ವೆಂಕಟರಮಣಯ್ಯ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರವಿ.ಡಿ.ಚನ್ನಣ್ಣನವರ್, ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್.ಎಂ.ನಾಗರಾಜು, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಎನ್.ಎಸ್.ಮಹೇಶ್, ಸಹಾಯಕ ನಿರ್ದೇಶಕಿ ಹೇಮಾವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.