ADVERTISEMENT

ಲಕ್ಷ ದೀಪೋತ್ಸವ: ಸಿದ್ಧತೆಗೆ ಸೂಚನೆ

4 ಲಕ್ಷ ಜನರು ಸೇರುವ ನಿರೀಕ್ಷೆ: ಆಕರ್ಷಕ ಬಾಣ ಬಿರುಸು ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 5:09 IST
Last Updated 7 ಡಿಸೆಂಬರ್ 2022, 5:09 IST
ದೇವನಹಳ್ಳಿಯ ಶ್ರೀವೇಣುಗೋಪಾಲಸ್ವಾಮಿ ದೇವಾಲಯದ ಪ್ರಾಂಗಣದಲ್ಲಿ ನಡೆದ ಲಕ್ಷ ದೀಪೋತ್ಸವದ ಪೂರ್ವ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌. ಲತಾ, ಶಾಸಕ ನಿಸರ್ಗ ನಾರಾಯಣಸ್ವಾಮಿ ಉಪಸ್ಥಿತರಿದ್ದರು
ದೇವನಹಳ್ಳಿಯ ಶ್ರೀವೇಣುಗೋಪಾಲಸ್ವಾಮಿ ದೇವಾಲಯದ ಪ್ರಾಂಗಣದಲ್ಲಿ ನಡೆದ ಲಕ್ಷ ದೀಪೋತ್ಸವದ ಪೂರ್ವ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌. ಲತಾ, ಶಾಸಕ ನಿಸರ್ಗ ನಾರಾಯಣಸ್ವಾಮಿ ಉಪಸ್ಥಿತರಿದ್ದರು   

ದೇವನಹಳ್ಳಿ: ಐತಿಹಾಸಿಕ ಶ್ರೀವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಇದೇ 8ರಂದು ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುಗಮ ಸಂಚಾರ, ಭದ್ರತೆ, ಸ್ವಚ್ಛತೆ, ಆರೋಗ್ಯ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಕೈಗೊಳ್ಳಬೇಕು. ಉತ್ಸವಕ್ಕಾಗಿ ರಚಿಸಿದ ಎಲ್ಲಾ ಉಪ ಸಮಿತಿಗಳಲ್ಲಿನ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಲತಾ
ಸೂಚಿಸಿದರು.

ಪಟ್ಟಣದ ಶ್ರೀವೇಣುಗೋಪಾಲಸ್ವಾಮಿ ದೇವಾಲಯದ ಪ್ರಾಂಗಣದಲ್ಲಿ ಸೋಮವಾರ ಸಂಜೆ ನಡೆದ ಲಕ್ಷ ದೀಪೋತ್ಸವ ಪೂರ್ವ ಸಿದ್ಧತಾ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು
ಮಾತನಾಡಿದರು.

ಲಕ್ಷ ದೀಪೋತ್ಸವವು ಈ ಭಾಗದಲ್ಲಿ ಬಹಳ ಮಹತ್ವ ಪಡೆದಿದೆ. ಈಗಾಗಲೇ, ಸೇವಾ ಸಮಿತಿಯಿಂದ ವೈವಿಧ್ಯಮಯ ಧಾರ್ಮಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ನಡೆಯುತ್ತಿವೆ. ಡಿ. 8ರಂದು ಮಹಾಭಿಷೇಕ, ತೀರ್ಥಪ್ರಸಾದ, ಸಕಲಾಭರಣಾಲಂಕೃತ ವೇಣು ಗೋಪಾಲಸ್ವಾಮಿಯ ಚಿತ್ರ ಗೋಪುರೋತ್ಸವ ಜರುಗಲಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಸುಮಾರು 3 ರಿಂದ 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಹಾಗಾಗಿ ಸಂಚಾರ, ಪಾರ್ಕಿಂಗ್, ಶೌಚಾಲಯ, ಕುಡಿಯುವ ನೀರು ಮೊದಲಾದ ಮಾಹಿತಿ ಒಳಗೊಂಡ ಮಾರ್ಗದರ್ಶಿ ಫಲಕಗಳನ್ನು ಅಳವಡಿಸಬೇಕು. ಸಾರ್ವಜನಿಕರಿಗೆ ಸುಲಭವಾಗಿ ಮಾಹಿತಿ ಸಿಗುವಂತೆ ಕ್ರಮವಹಿಸಬೇಕು ಎಂದು ನಿರ್ದೇಶಿಸಿದರು.

ಬೆಸ್ಕಾಂ ಅಧಿಕಾರಿಗಳು ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಗಮನ ನೀಡಬೇಕು. ದೇವನಹಳ್ಳಿಯ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಡಿ. 7 ಹಾಗೂ 8ರಂದು ವಿದ್ಯುತ್ ದೀಪಾಲಂಕಾರ ಮಾಡಬೇಕು ಎಂದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಸಂಚಾರ ನಿರ್ವಹಣೆಯು ಜವಾಬ್ದಾರಿಯುತವಾಗಿ ನಡೆಯಬೇಕು. ಆಕರ್ಷಕ ಬಾಣ ಬಿರುಸುಗಳ ಪ್ರದರ್ಶನದ ಸಂದರ್ಭದಲ್ಲಿ ಅಗ್ನಿಶಾಮಕ ಹಾಗೂ ತುರ್ತುಸೇವಾ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು‌ ಎಂದು
ಹೇಳಿದರು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಕ್ರಮವಹಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ, ಸಹಾಯಕ ಪೊಲೀಸ್ ಆಯುಕ್ತ ಬಾಲಕೃಷ್ಣ‌, ಜಿ.ಪಂ. ಉಪ ಕಾರ್ಯದರ್ಶಿ ಡಾ.ನಾಗರಾಜು, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಜಿ.ಜೆ. ಹೇಮಾವತಿ, ತಹಶೀಲ್ದಾರ್‌ ಕೆ. ಶಿವರಾಜು, ಸಂಚಾರ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಲಕ್ಷ್ಮಣ ನಾಯಕ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.