ADVERTISEMENT

ದೊಡ್ಡಬಳ್ಳಾಪುರ: ನಗರಸಭೆ ಮುಂದೆ ಮುಖಂಡರ ಪ್ರತಿಭಟನೆ

ಕಾಂಗ್ರೆಸ್‌, ಬಿಜೆಪಿಯಿಂದ ಪರಸ್ಪರ ಆರೋಪ, ಪ್ರತ್ಯಾರೋಪ

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 1:31 IST
Last Updated 23 ಜನವರಿ 2021, 1:31 IST
ಬಿಜೆಪಿ ಮುಖಂಡರು ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌ ಅವರಿಗೆ ಮನವಿ ಸಲ್ಲಿಸಿದರು
ಬಿಜೆಪಿ ಮುಖಂಡರು ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌ ಅವರಿಗೆ ಮನವಿ ಸಲ್ಲಿಸಿದರು   

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ ಈಚೆಗೆ ಶಾಸಕ ಟಿ.ವೆಂಕಟರಮಣಯ್ಯ ನಗರದ ಹಲವು ಕಡೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಾಗಿದೆ. ಈ ಸಂದರ್ಭದಲ್ಲಿ ಶಿಷ್ಟಾಚಾರ ಉಲ್ಲಂಘಿಸಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಬಿಜೆಪಿ ಮುಖಂಡರು ದೂರಿದ್ದಾರೆ.

ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಬಿಜೆಪಿ ನಗರ ಘಟಕದ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ಜಿಲ್ಲಾ ವಕ್ತಾರರಾದ ಪುಷ್ಪಾ ಶಿವಶಂಕರ್, ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಸಂತೋಷದ ವಿಷಯ. ಆದರೆ, ಈ ಕಾಮಗಾರಿ ಉದ್ಘಾಟನೆಗೆ ಶಿಷ್ಟಾಚಾರದಂತೆ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದರು.

ಸರ್ಕಾರದ ಅನುದಾನ ಶಾಸಕರ ಅನುದಾನವೆಂಬಂತೆ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಶಂಕುಸ್ಥಾಪನೆ ನಡೆದಿರುವುದು ಖಂಡನೀಯ. ಇನ್ನು ಮುಂದೆ ನಗರಸಭೆ ವ್ಯಾಪ್ತಿಯಿಂದ ನಡೆಯುವ ಕಾರ್ಯಕ್ರಮಗಳಿಗೆ ಶಿಷ್ಟಾಚಾರ ಅನುಸರಿಸಿ ಸಂಸದರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಾಗೂ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಇದೇ ರೀತಿ ಶಿಷ್ಟಾಚಾರ ಉಲ್ಲಂಘಿಸಿ ಕಾಮಗಾರಿ ನಡೆಸಿದರೆ ಪಕ್ಷದಿಂದ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಹ ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು. ಶಾಸಕರ ನೇತೃತ್ವದಲ್ಲಿ ನಡೆಯುತ್ತಿರುವ ನಗರದ ಅಭಿವೃದ್ಧಿ ಸಹಿಸಲಾರದೆ ಬಿಜೆಪಿ ಮುಖಂಡರು ನಗರದ ಅಭಿವೃದ್ಧಿ ಹಾಳು ಮಾಡುವ ಉದ್ದೇಶದಿಂದ ಅಡಚಣೆ ಮಾಡುತ್ತಿದ್ದಾರೆ. ನಗರದಲ್ಲಿನ ಕಾಮಗಾರಿಗಳಿಗೆ ಮಂಜೂರಾಗಿದ್ದ ₹8ಕೋಟಿ ಹಿಂದಕ್ಕೆ ಹೋಗುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿಗೆ ಪ್ರತಿಯಾಗಿ ಪ್ರತಿಭಟನೆ ಆರಂಭಿಸಿದರು.

ಸ್ಥಳಕ್ಕೆ ಆಗಮಿಸಿದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಆಚರಿಸಬೇಕಾದ್ದು ಅಧಿಕಾರಿಗಳ ಕೆಲಸವೇ ಹೊರತು ನನ್ನದಲ್ಲ. ಕೋವಿಡ್‌-19 ಕಾರಣ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಸೇರುವಂತಿಲ್ಲ ಎಂಬ ನಿಯಮವಿದೆ. ಆದಾಗ್ಯೂ ಮುಂದಿನ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.