ADVERTISEMENT

ಎಲ್ಲರಿಗೂ ಆರೋಗ್ಯ ಸೇವೆ ಸಿಗಲಿ: ಪಿ.ಎನ್.ರವೀಂದ್ರ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 1:53 IST
Last Updated 29 ಜನವರಿ 2021, 1:53 IST
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು   

ದೇವನಹಳ್ಳಿ: ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿ.ಪಿ.ಎಲ್.) ಕಾರ್ಡ್‌ದಾರರ ಎಲ್ಲ ಕುಟುಂಬಗಳಿಗೆ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಿಸಿ ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಆಯುಷ್ಮಾನ್ ಭಾರತ್-ಆರೋಗ್ಯ ಕನಾ೯ಟಕ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಲು ಆಧಾರ್ ಕಾರ್ಡ್, ಬಿ.ಪಿ.ಎಲ್ ರೇಷನ್ ಕಾರ್ಡ್ ಅಥವಾ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಹಾಗೂ ಹೊರ ರಾಜ್ಯದ ರೋಗಿಗಳಿಗೆ ಪ್ರಧಾನಮಂತ್ರಿ ಜನ ಆರೋಗ್ಯ ಕಾರ್ಡ್(ಪಿ.ಎಂ.ಜೆ) ಹೊಂದಿರುವವರಿಗೂ ಉಚಿತ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.

ADVERTISEMENT

ತಾಲ್ಲೂಕುವಾರು ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ನೆಲಮಂಗಲ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಆಯುಷ್ಮಾನ್ ಭಾರತ್ ಕರ್ನಾಟಕ ಕಾರ್ಡ್‌ ಯೋಜನೆಯಡಿ ದಾಖಲಾಗಿದ್ದ ರೋಗಿಗಳ ಮಾಹಿತಿ ’ಆರೋಗ್ಯ ಮಿತ್ರ’ ಆ್ಯಪ್ ನಲ್ಲಿ ಸಕಾಲಕ್ಕೆ ಸರಿಯಾಗಿ ಅಪ್‌ಲೋಡ್ ಮಾಡುವಂತೆ ತಿಳಿಸಿದರು. ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕುಗಳ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಕರ್ನಾಟಕ ಕಾರ್ಡ್‌ ಯೋಜನೆಯಡಿ ದಾಖಲಾಗುವ ರೋಗಿಗಳ ದಾಖಲೆ ಸೂಕ್ತವಾಗಿ ಪರಿಶೀಲಿಸಿ, ಸಂಗ್ರಹಿಸುತ್ತಿರುವುದು ಉತ್ತಮ ಕೆಲಸವಾಗಿದೆ ಎಂದರು.

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಆಸ್ಪತ್ರೆಗಳಿಗೆ ಅನುದಾನ ಸಿಗಲಿದ್ದು, ನಿಗದಿತ ಅವಧಿಯಲ್ಲಿ ಸಮಗ್ರ ಮಾಹಿತಿ ಸಾಫ್ಟ್‌ವೇರ್‌ನಲ್ಲಿ ದಾಖಲಿಸಬೇಕು. ಜಿಲ್ಲೆಯಲ್ಲಿ ಶೇ26ರಷ್ಟು ಪ್ರಗತಿ ಸಾಧಿಸಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿ ಪ್ರಗತಿ ಪರಿಶೀಲನೆ ನಡೆಸಿ, ಜಿಲ್ಲೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳು ನಿರಂತರ‌ ಸಂಪರ್ಕ ಸಾಧಿಸಿ, ಸಹಕಾರದಿಂದ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಗೆ ಖ್ಯಾತಿ ತರುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.

ಕುಟುಂಬಗಳವಾರು ಅಂಕಿ–ಅಂಶಗಳ ಮಾಹಿತಿ ಕಲೆಹಾಕಿ ವರದಿ ನೀಡಲು ತಿಳಿಸಿದರು. ಪ್ರತಿ ವಾರ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಪ್ರಗತಿ ಕುರಿತು ಚರ್ಚೆ ನಡೆಸಲಾಗುವುದೆಂದು ತಿಳಿಸಿದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಾಂತಲ ಮಾತನಾಡಿ, 2020ರ ಡಿಸೆಂಬರ್ ಮಾಸಾಂತ್ಯಕ್ಕೆ ಸರ್ಕಾರಿ ಆಸ್ಪತ್ರೆ, ಸೇವಾ ಸಿಂಧು ಕೇಂದ್ರಗಳು ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒಟ್ಟು ಜಿಲ್ಲೆಯಲ್ಲಿ 2,67,337 ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಿಸಲಾಗಿದೆ ಎಂದು ಸಭಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ರಾಜ್ಯ ಸಂಯೋಜಕರಾದ ಡಾ.ಶಕೀಬ್, ಜಿಲ್ಲಾ ಸಂಯೋಜಕರಾದ ಡಾ.ಸುಷ್ಮಾ, ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಡಾ.ವಿದ್ಯಾ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.