ADVERTISEMENT

ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಅನುದಾನ ನೀಡಲಿ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2019, 13:46 IST
Last Updated 10 ಆಗಸ್ಟ್ 2019, 13:46 IST
ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾರತ ಜನಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ. ಮುನಿಯಪ್ಪ ಮಾತನಾಡಿದರು
ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾರತ ಜನಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ. ಮುನಿಯಪ್ಪ ಮಾತನಾಡಿದರು   

ವಿಜಯಪುರ: ರಾಜ್ಯದ ಉತ್ತರ ಭಾಗದಲ್ಲಿ ಉಂಟಾಗಿರುವ ಅತಿವೃಷ್ಟಿಯಿಂದಾಗಿ ಮುಳುಗಡೆಯಾಗಿರುವ ಪ್ರದೇಶಗಳಲ್ಲಿನ ಜನರ ಜೀವನ ಯಥಾಸ್ಥಿತಿಗೆ ಮರಳಲು ಕೇಂದ್ರ ಸರ್ಕಾರ ತಕ್ಷಣ ಅವರ ನೆರವಿಗೆ ₹ 2 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಭಾರತ ಜನಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ.ಮುನಿಯಪ್ಪ ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉತ್ತರ ಕರ್ನಾಟಕದ ಜನರು ಮಹದಾಯಿ ನೀರಾವರಿ ಹೋರಾಟದ ವಿಚಾರದಲ್ಲಿ ಸಾಕಷ್ಟು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದಾರೆ. ದುರಾದೃಷ್ಟವಶಾತ್ ಅತಿವೃಷ್ಟಿಗೆ ಒಳಗಾಗಿ ಜನರ ಜೀವನ ಅಸ್ತವ್ಯಸ್ತವಾಗಿರುವುದರ ಜೊತೆಗೆ ಕೊಟ್ಯಂತರ ರೂಪಾಯಿಗಳಷ್ಟು ಆಸ್ತಿಪಾಸ್ತಿಗಳನ್ನು ನಷ್ಟ ಮಾಡಿಕೊಂಡಿದ್ದಾರೆ ಎಂದರು.

ಅನೇಕ ಮಂದಿ ಪ್ರಾಣಗಳು ಕಳೆದುಕೊಂಡಿರುವುದರಿಂದ ಆ ಕುಟುಂಬಗಳು ಬಡವಾಗಿವೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳಕ್ಕೆ ಬರಬೇಕು. ಸ್ವತಃ ಅವರೇ ಪರಿಶೀಲನೆ ನಡೆಸಬೇಕು. ಹೆಚ್ಚಿನ ನೆರವು ಬಿಡುಗಡೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಮುಖಂಡ ಎಂ. ಮುನಿಯಪ್ಪ ಮಾತನಾಡಿ, ರಾಜ್ಯದ ಅರ್ಧ ಭಾಗ ನೀರಿನಲ್ಲಿ ಮುಳುಗಡೆಯಾಗಿದ್ದರೂ ಯಾವುದೇ ಶಾಸಕರು ಅಲ್ಲಿಗೆ ಹೋಗಿ ಅವರಿಗೆ ಧೈರ್ಯ ತುಂಬಿಸುವ ಕೆಲಸ ಮಾಡಿಲ್ಲ. ಅವರ ನೆರವಿಗೆ ಧಾವಿಸದೆ ಇರುವುದು ಶೋಚನೀಯ ಸಂಗತಿಯಾಗಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಕೇಂದ್ರದ ನೆರವಿನ ಜೊತೆಗೆ ರಾಜ್ಯ ಸರ್ಕಾರದಿಂದಲೂ ಹೆಚ್ಚಿನ ನೆರವು ನೀಡಿ, ಸಂತ್ರಸ್ತರಿಗೆ ಅಗತ್ಯವಾಗಿರುವ ಸೌಕರ್ಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಭಾರತೀಯ ಮಾನವ ಹಕ್ಕುಗಳ ಹಿತರಕ್ಷಣಾ ಸಮಿತಿಯ ತಾಲ್ಲೂಕು ಘಟಕದ ಉಪಾಧ್ಯಕ್ಷ ವೆಂಕಟರಮಣಪ್ಪ ಮಾತನಾಡಿ, ಇಂತಹ ಸಂಕಷ್ಟದ ಸಮಯದಲ್ಲಿ ರಾಜ್ಯದಲ್ಲಿರುವವರು ಮಾತ್ರವಲ್ಲದೆ, ಹೊರ ರಾಜ್ಯಗಳಲ್ಲಿರುವ ಕನ್ನಡಿಗರು ಹಾಗೂ ಹೊರದೇಶಗಳಲ್ಲಿರುವವರು ನೆರವಿನ ಹಸ್ತ ಚಾಚಬೇಕಾಗಿದೆ ಎಂದರು.

ಅವರೊಂದಿಗೆ ಸಂಘ, ಸಂಸ್ಥೆಗಳು, ಕಂಪನಿಗಳು, ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.