ADVERTISEMENT

‘ಕರ್ನಾಟಕ ಏಕೀಕರಣದ ಆಶಯ ಈಡೇರಲಿ’

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 3:26 IST
Last Updated 7 ಜನವರಿ 2021, 3:26 IST
ವಿಜಯಪುರದ ಗಾಂಧಿ ಚೌಕದ ಮಹಂತಿನಮಠದಲ್ಲಿ ಆಯೋಜಿಸಿದ್ದ 23ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಮಾರೋಪ ಸಮಾರಂಭದಲ್ಲಿ ಡಾ.ಬಸವರಮಾನಂದ ಸ್ವಾಮೀಜಿ ಅವರು ಸಾಹಿತಿಗಳನ್ನು ಅಭಿನಂದಿಸಿದರು
ವಿಜಯಪುರದ ಗಾಂಧಿ ಚೌಕದ ಮಹಂತಿನಮಠದಲ್ಲಿ ಆಯೋಜಿಸಿದ್ದ 23ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಮಾರೋಪ ಸಮಾರಂಭದಲ್ಲಿ ಡಾ.ಬಸವರಮಾನಂದ ಸ್ವಾಮೀಜಿ ಅವರು ಸಾಹಿತಿಗಳನ್ನು ಅಭಿನಂದಿಸಿದರು   

ವಿಜಯಪುರ: ‘ಕನ್ನಡ ಮಾತನಾಡುವ ಪ್ರದೇಶಗಳೆಲ್ಲ ಒಂದಾಗಬೇಕೆಂಬ ಏಕೀಕರಣದ ಪ್ರಧಾನ ಆಶಯ ಬಹುಮಟ್ಟಿಗೆ ಈಡೇರಿದ್ದರೂ ಇನ್ನೂ ಕೆಲವು ಕನ್ನಡ ಮಾತನಾಡುವ ಪ್ರದೇಶಗಳು ಬೇರೆ ರಾಜ್ಯದಲ್ಲಿಯೇ ಉಳಿದಿವೆ’ ಎಂದು ಸಾಹಿತಿ ಡಾ.ಬಸವರಮಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದ ಗಾಂಧಿಚೌಕದ ಮಹಂತಿನ ಮಠದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಜನರು ಸಾಹಿತಿಗಳ ಚರ್ಚೆ, ಚಿಂತನೆಗಳ ಮೂಲಕ ಬೌದ್ಧಿಕ ಬೆಳಕು ಪಡೆಯಲು ಬರುತ್ತಾರೆ. ಸಮ್ಮೇಳನದ ಚಿಂತನೆಗಳಿಂದ ಒಂದಿಷ್ಟು ಕಲಿಯುತ್ತಾರೆ. ಕೇರಳದ ಕಾಸರಗೋಡು ಕರ್ನಾಟಕಕ್ಕೆ ಸೇರಲಿಲ್ಲ. ಆಂಧ್ರದ ಮಡಕಶಿರಾ ಕರ್ನಾಟಕಕ್ಕೆ ಸೇರಲಿಲ್ಲ. ತಮಿಳುನಾಡಿನಲ್ಲಿರುವ ತಾಳವಾಡಿ ಫಿರ್ಕಾ, ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ ಮುಂತಾದ ಕನ್ನಡ ಪ್ರಧಾನ ಪ್ರದೇಶಗಳು ನಾಡಿನ ಭಾಗವಾಗಿಲ್ಲ ಎಂದರು.

ADVERTISEMENT

ಗೋವಾದ ಕನ್ನಡಿಗರ ಬವಣೆ ಬತ್ತಿಲ್ಲ. ಕರ್ನಾಟಕದ ಒಳನಾಡಿನವರಿಗೆ ಸಿಗುವ ಶೈಕ್ಷಣಿಕ ಮತ್ತು ಔದ್ಯೋಗಿಕ ಸೌಲಭ್ಯ ಕನ್ನಡ ಮಾಧ್ಯಮದಲ್ಲೇ ವ್ಯಾಸಂಗ ಮಾಡಿದ ಹೊರನಾಡಿನ ಕನ್ನಡಿಗರಿಗೆ ಪೂರ್ಣಪ್ರಮಾಣದಲ್ಲಿ ಸಿಗುತ್ತಿಲ್ಲ. ಅವು ಸಿಗಬೇಕು ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ. ಸುಧಾಕರ್ ಮಾತನಾಡಿ, ದೇಶ ಸ್ವಾತಂತ್ರ್ಯಗಳಿಸಿದ ನಂತರವೂ ಏಕೀಕರಣದ ಹೋರಾಟ ಮತ್ತಷ್ಟು ಪ್ರಬಲಗೊಂಡಿತು. ಕಮ್ಯೂನಿಸ್ಟರು, ಸೋಷಲಿಸ್ಟರು ತಮ್ಮ ಸಮಾನತೆಯ ಮೂಲ ಆಶಯವನ್ನಿಟ್ಟುಕೊಂಡೇ ಏಕೀಕರಣದ ಅಗತ್ಯವನ್ನು ಪ್ರತಿಪಾದಿಸಿದರು ಎಂದು ಹೇಳಿದರು.

ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಹಡಪದ್ ಮಾತನಾಡಿ, ಭಾಷೆ ಮತ್ತು ಭೂಗೋಳದ ಸಂಬಂಧವಷ್ಟೇ ಕನ್ನಡಾಭಿಮಾನವಲ್ಲ. ಭೂಗೋಳ ಮಿತಿಯ ಚಿಂತನೆಯೊಂದೇ ಕರ್ನಾಟಕದ ಮನಸ್ಸನ್ನು ಒಂದುಗೂಡಿಸುವ ಅಂತಿಮ ಸಾಧನವಾಗುವುದಿಲ್ಲ. ಸಾಮಾಜಿಕ-ಆರ್ಥಿಕ ಸಮಾನತೆಯ ಆಧಾರದಲ್ಲಿ ಅಭಿವೃದ್ಧಿಯ ಸಮತೋಲನ ಸಾಧಿಸದಿದ್ದರೆ ಕರ್ನಾಟಕದ ಒಳಗೆ ಒಡಕು ಹುಟ್ಟುತ್ತದೆ ಎಂದು ಎಚ್ಚರಿಸಿದರು.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡಕ್ಕೆ ಸಂಬಂಧಿಸಿದಂತೆ ಮಾಡಬೇಕಾದ ಕೆಲಸ ಸಾಕಷ್ಟಿದೆ. ಕನ್ನಡವನ್ನು ತಂತ್ರಜ್ಞಾನದ ಭಾಷೆಯನ್ನಾಗಿ ವಿಸ್ತರಿಸುವ ಯೋಜನೆಗಳನ್ನು ಸರ್ಕಾರ ತೀವ್ರಗತಿಯಲ್ಲಿ ಕೈಗೆತ್ತಿಕೊಳ್ಳಬೇಕಾಗಿದೆ. ಶಾಸ್ತ್ರೀಯ ಭಾಷಾ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಅಗತ್ಯವೂ ಇದೆ. ಕಂಪ್ಯೂಟರ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಬಳಕೆಯಾಗುವ ಕನ್ನಡ ಅಕ್ಷರಗಳು ಮತ್ತು ತಂತ್ರಜ್ಞಾನದ ಶಿಷ್ಟತೆಯನ್ನು ರೂಪಿಸುವುದಕ್ಕೆ ಶಾಶ್ವತ ಸಲಹಾ ಸಮಿತಿ ರಚಿಸಬೇಕು. ಇದರಲ್ಲಿ ಭಾಷಾ ತಜ್ಞರು ಜೊತೆಗೆ ತಂತ್ರಜ್ಞರು ಇರಬೇಕು ಎಂದರು.

ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ನಂಜೇಗೌಡ, ಪದಾಧಿಕಾರಿಗಳಾದ ಪುನೀತಾ ನಟರಾಜ್, ಚೌಡೇಗೌಡ, ಶ್ರೀನಿವಾಸಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.