ADVERTISEMENT

ಮತದಾನಕ್ಕೆ ಜಿಲ್ಲಾಡಳಿತ ಸಿದ್ಧತೆ

ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: 17 ಮತಗಟ್ಟೆಗಳ ಸ್ಥಾ‍ಪನೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 6:46 IST
Last Updated 18 ಅಕ್ಟೋಬರ್ 2020, 6:46 IST
ದೇವನಹಳ್ಳಿಯಲ್ಲಿ ಚುನಾವಣೆ ಸಂಬಂಧ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಾತನಾಡಿದರು
ದೇವನಹಳ್ಳಿಯಲ್ಲಿ ಚುನಾವಣೆ ಸಂಬಂಧ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಾತನಾಡಿದರು   

ದೇವನಹಳ್ಳಿ: ‘ಮತದಾರರು ಹಾಗೂ ಮತಗಟ್ಟೆ ಸಂಖ್ಯೆ ಕಡಿಮೆಯಿದ್ದರೂ ಮತದಾನ ಪ್ರಕ್ರಿಯೆ ಕಾರ್ಯ
ಮಹತ್ವದ್ದಾಗಿದೆ. ಹಾಗಾಗಿ, ಮತಗಟ್ಟೆ ಅಧಿಕಾರಿಗಳು ಅತ್ಯಂತ ಎಚ್ಚರಿಕೆ ಹಾಗೂ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್. ರವೀಂದ್ರ ಸೂಚಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಕ್ಟೋಬರ್ 28ರಂದು ಬೆಳಿಗ್ಗೆ 8ಗಂಟೆಯಿಂದ ಸಂಜೆ 5ರವರೆಗೂ ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಮತಗಟ್ಟೆಗೆ ನಿಯೋಜನೆಯಾಗುವ ಅಧಿಕಾರಿಗಳು ಚುನಾವಣಾ ಆಯೋಗದಿಂದ ಅಧಿಕೃತವಾಗಿ ಸೂಚಿಸಿರುವ ಗುರುತಿನಚೀಟಿಗಳ ಬಗ್ಗೆ ಎಚ್ಚರವಹಿಸಬೇಕು. ಮತದಾನದ ಗೌಪ್ಯತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ತಿಳಿಸಿದರು.

ADVERTISEMENT

ಗ್ರಾಮಾಂತರ ಜಿಲ್ಲೆಯಲ್ಲಿ 17 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನೆಲಮಂಗಲ ತಾಲ್ಲೂಕು 3, ದೊಡ್ಡಬಳ್ಳಾಪುರ ತಾಲ್ಲೂಕು 5, ಹೊಸಕೋಟೆ ತಾಲ್ಲೂಕು 5 ಹಾಗೂ ದೇವನಹಳ್ಳಿ ತಾಲ್ಲೂಕಿನಲ್ಲಿ 4 ಮತಗಟ್ಟೆ ತೆರೆಯಲಾಗಿದೆ. ಎಲ್ಲಾ ಮತದಾನ ಕೇಂದ್ರಗಳಲ್ಲಿ ಅವಶ್ಯ ಮೂಲಸೌಲಭ್ಯ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಕಾರ್ಯವು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಮತದಾನ ಕೇಂದ್ರಗಳಿಗೆ ಕಳುಹಿಸಲು ಹಾಗೂ ಡಿಮಸ್ಟರಿಂಗ್ ಕೇಂದ್ರಕ್ಕೆ ಕರೆತರಲು ವಾಹನಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಮತಗಟ್ಟೆ ಕಾರ್ಯಕ್ಕೆ ನಿಯೋಜಿಸಬೇಕಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮೊದಲ ಹಂತದ ತರಬೇತಿ ನೀಡಲಾಗಿದೆ. ಅಕ್ಟೋಬರ್ 20 ಹಾಗೂ 22ರಂದು ಎರಡು ಹಾಗೂ ಮೂರನೇ ಹಂತದ ತರಬೇತಿ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಮತಗಟ್ಟೆ ಅಧಿಕಾರಿಗಳು ಪಿಪಿ‌ಇ ಕಿಟ್ ಧರಿಸಿ ಕಾರ್ಯ ನಿರ್ವಹಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್ ಬಳಕೆ ಮಾಡುವುದು ಕಡ್ಡಾಯ ಎಂದರು.

ಪ್ರತಿ ಮತಗಟ್ಟೆಗೂ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಿ, ಮತಗಟ್ಟೆಗೆ ಬರುವ ಮತದಾರರ ಥರ್ಮಲ್ ಸ್ಕ್ರೀನಿಂಗ್ ನಡೆಸಬೇಕು. ಆ ಬಳಿಕವೇ ಮತದಾನ ಪ್ರಕ್ರಿಯೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದರು.

ತರಬೇತಿ ಕಾರ್ಯಕ್ರಮದಲ್ಲಿ ಮಾಸ್ಟರ್ ಟ್ರೈನರ್‌ಗಳಾದ ಡಿ.ಎನ್. ಬಾಬು ಹಾಗೂ ಕೆಂಪೇಗೌಡ, ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.