ADVERTISEMENT

ದೊಡ್ಡಬಳ್ಳಾಪುರ ನಾಗರಕೆರೆ ಪುನರುಜ್ಜೀವನ

ಫಾಕ್ಸ್‌ಕಾನ್ ಸಿಎಸ್‌ಆರ್‌ ನಿಧಿ ₹3 ಕೋಟಿ ವೆಚ್ಚದಲ್ಲಿ ಕಾಮಗಾರಿ; ಜಿಲ್ಲಾಧಿಕಾರಿ ಎ.ಬಿ ಬಸವರಾಜು

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2026, 6:40 IST
Last Updated 6 ಫೆಬ್ರುವರಿ 2026, 6:40 IST
ದೇವನಹಳ್ಳಿ ಜಿಲ್ಲಾಡಳಿತ ಭವನದಲ್ಲಿ ನಾಗರಕೆರೆ ಪುನರುಜ್ಜೀವನ ಕುರಿತು ನಡೆದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಮಾತನಾಡಿದರು
ದೇವನಹಳ್ಳಿ ಜಿಲ್ಲಾಡಳಿತ ಭವನದಲ್ಲಿ ನಾಗರಕೆರೆ ಪುನರುಜ್ಜೀವನ ಕುರಿತು ನಡೆದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಮಾತನಾಡಿದರು   

ದೇವನಹಳ್ಳಿ: ಫಾಕ್ಸ್‌ಕಾನ್ ಸಂಸ್ಥೆಯು ತನ್ನ ಸಿಎಸ್‌ಆರ್‌ ನಿಧಿ ₹3 ಕೋಟಿ ವೆಚ್ಚದಲ್ಲಿ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ನಾಗರಕೆರೆ ಪುನರುಜ್ಜೀವನಗೊಳಿಸಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಕೆರೆ ಸಂರಕ್ಷಣೆಗೆ ಸಂಬಂಧಿಸಿದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ನಾಗರಕೆರೆ ಅಭಿವೃದ್ಧಿಗೆ ಫಾಕ್ಸ್‌ಕಾನ್ ಸಂಸ್ಥೆ ಈಗಾಗಲೇ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದೆ. ಈ ಯೋಜನೆಯ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಲಾಗಿದೆ. ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಬೇಕಾದ ಕೆಲಸಗಳನ್ನು ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಸಲಹೆ ಪಡೆಯಲಾಗುವುದು ಎಂದು ತಿಳಿಸಿದರು.

ADVERTISEMENT

ಅಧಿಕಾರಿಗಳ ಸಲಹೆಗಳನ್ನು ಪಡೆದು, ಸಿಇಆರ್ ಅನುದಾನದಡಿ ಸಿದ್ಧಪಡಿಸಿರುವ ಯೋಜನಾ ವರದಿಯನ್ನು ಸಣ್ಣ ನೀರಾವರಿ ಇಲಾಖೆಯ ಮೂಲಕ ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಅನುಮೋದನೆ ದೊರೆತ ಬಳಿಕ ನಾಗರಕೆರೆ ಪುನರುಜ್ಜೀವನ ಕೆಲಸ ಆರಂಭಿಸಲಾಗುವುದು ಎಂದರು.

ಇದಲ್ಲದೆ, ದೊಡ್ಡಬಳ್ಳಾಪುರ ವ್ಯಾಪ್ತಿಯ ಕೈಗಾರಿಕೆಗಳು ಮತ್ತು ಕಾರ್ಖಾನೆಗಳಿಗೆ ಭೇಟಿ ನೀಡಿ ಅಲ್ಲಿನ ನೀರಿನ ಮೂಲಗಳು, ಮಳೆನೀರು ಸಂಗ್ರಹ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ ಘಟಕಗಳು ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳನ್ನು ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎಸ್. ರಮೇಶ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಶ್ರೀಕಾಂತ್, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಂಜುನಾಥ್, ಅಂತರ್ಜಲ ಇಲಾಖೆಯ ಹಿರಿಯ ಭೂವಿಜ್ಞಾನಿ ಪಲ್ಲವಿ, ಪರಿಸರ ಅಧಿಕಾರಿ ವಿಜಯ, ಫಾಕ್ಸ್‌ಕಾನ್ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.