ADVERTISEMENT

ಜನತಂತ್ರ ಸದೃಢಕ್ಕೆ ಮತದಾನ ಮದ್ದು: ಜಿಲ್ಲಾಧಿಕಾರಿ ಆರ್‌. ಲತಾ

ಜಿಲ್ಲೆಯಲ್ಲಿ 15 ಸಾವಿರ ಹೊಸ ಮತದಾರರ ನೋಂದಣಿ:

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 5:13 IST
Last Updated 26 ಜನವರಿ 2023, 5:13 IST
13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಅಧಿಕಾರಿಗಳು ಯುವ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು
13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಅಧಿಕಾರಿಗಳು ಯುವ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು   

ದೇವನಹಳ್ಳಿ: ‘ಉತ್ತಮ ಸಮಾಜ ಹಾಗೂ ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆಯ ನಿರ್ಮಾಣಕ್ಕೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು’ ಎಂದು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪ ಎನ್. ಸಲಹೆ ನೀಡಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ನಡೆದ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಮತದಾನ ಅಮೂಲ್ಯ ಕಾರ್ಯವಾಗಿದೆ. ಮತದಾರರು ಆಮಿಷಕ್ಕೆ ಒಳಗಾಗದೆ ಮತದಾನ ಮಾಡಬೇಕು. ನಿರ್ಲಕ್ಷ್ಯ ತೋರದೆ ಜಾಗೃತರಾಗಿ ಉತ್ತಮರನ್ನು ಆರಿಸುವ ಮೂಲಕ ಮಾದರಿ ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪಿಸಬೇಕು ಎಂದು ಹೇಳಿದರು.

ADVERTISEMENT

ಪ್ರಜಾಪ್ರಭುತ್ವದ ಪ್ರಮುಖ ಅಂಗವಾದ ಮತದಾರನನ್ನು ಗೌರವಿಸುವುದಕ್ಕೆ ಭಾರತೀಯ ಚುನಾವಣಾ ಆಯೋಗವು ತನ್ನ ಸಂಸ್ಥಾಪನಾ ದಿನವಾದ ಜ. 25 ಅನ್ನು ಮತದಾರ ದಿನವೆಂದು ಆಚರಿಸುತ್ತಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್. ಲತಾ ಮಾತನಾಡಿ, ಭಾರತೀಯ ಚುನಾವಣಾ ಆಯೋಗವು ಪ್ರತಿಯೊಬ್ಬ ಅರ್ಹ ಮತದಾರನಿಗೆ ಚುನಾವಣೆಯಲ್ಲಿ ಭಾಗವಹಿಸುವ, ಮತದಾನ ಮಾಡುವ ಹಕ್ಕು ನೀಡಿದೆ. ಅದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು.

ಪ್ರಸಕ್ತ ಸಾಲಿನ ಮತದಾರರ ದಿನವನ್ನು ‘ಮತದಾನಕ್ಕಿಂತ ಇನ್ನೊಂದಿಲ್ಲ; ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಿ ಕರ್ತವ್ಯ ಪ್ರಜ್ಞೆ ಮೆರೆಯಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ 1,000 ಪುರುಷ ಮತದಾರರಿಗೆ 1,009 ಮಹಿಳಾ ಮತದಾರರಿದ್ದಾರೆ. ಇದು ಉತ್ತಮ ಬೆಳವಣಿಗೆ. ಎಲ್ಲಾ ಮಹಿಳೆಯರು, ಅಂಗವಿಕಲರು, ಯುವ ಮತದಾರರು ಮತದಾನದಲ್ಲಿ ಭಾಗವಹಿಸಬೇಕು. ಜಿಲ್ಲೆಯಲ್ಲಿ ಅಂದಾಜು 25 ಸಾವಿರ ಹೊಸ ಮತದಾರರಿದ್ದಾರೆ. ಈ ಪೈಕಿ ಮತದಾರರ ಪಟ್ಟಿಯಲ್ಲಿ 15 ಸಾವಿರ ಮತದಾರರು ಮಾತ್ರ ನೋಂದಣಿಯಾಗಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಯಾದ ಜಿ.ಪಂ. ಸಿಇಒ ಕೆ. ರೇವಣಪ್ಪ ಮಾತನಾಡಿ, ಉತ್ತಮ ಸರ್ಕಾರ ಇದ್ದರೆ ಉತ್ತಮ ಆಡಳಿತ ಇರುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಲು ಪ್ರತಿಯೊಬ್ಬ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ನವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲು ಜಿಲ್ಲಾ ಸ್ವೀಪ್‌ ಸಮಿತಿಯಿಂದ ಕಾಲೇಜುಗಳಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಲು ಫೆಬ್ರುವರಿಯಲ್ಲಿ ಆಂದೋಲನ ನಡೆಸಲಾಗುವುದು ಎಂದು ತಿಳಿಸಿದರು.

ಯುವ ಮತದಾರರು, ಅಂಗವಿಕಲರು, ತೃತೀಯ ಲಿಂಗಿಗಳಿಗೆ ಮತದಾರರ ಗುರುತಿನ ಚೀಟಿ ವಿತರಿಸ ಲಾಯಿತು. ಮತದಾರ ದಿನಾಚರಣೆ ನಿಮಿತ್ತ ಜಿಲ್ಲೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಯೋಜಿಸಿದ್ದ ರಸಪ್ರಶ್ನೆ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರು, ಉತ್ತಮವಾಗಿ ಕಾರ್ಯ ನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ), ಚುನಾವಣಾ ಸಾಕ್ಷರತಾ ಸಮಿತಿ ಸದಸ್ಯರಿಗೆ ಪ್ರಮಾಣ ಪತ್ರ ಹಾಗೂ ಪುಸ್ತಕ ವಿತರಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್ ಸ್ವಾಗತಿಸಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ನಾಗರಾಜ ವಂದಿಸಿದರು. ಧನಂಜಯ ನಿರೂಪಿಸಿದರು. ಮುಖ್ಯ ಲೆಕ್ಕಾಧಿಕಾರಿ ಗಂಗಾಧರ್, ಚುನಾವಣಾ ತಹಶೀಲ್ದಾರ್ ರಾಜೀವಲೋಚನಾ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ತಾ.ಪಂ. ಇ.ಒ ವಸಂತಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.