ದೇವನಹಳ್ಳಿ: ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಸುಪ್ರೀಂಕೋರ್ಟ್ ತೀರ್ಪು ಅನುಷ್ಠಾನದಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಈಚೆಗೆ ತಾಲ್ಲೂಕಿನ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.
ವಿವಿಧ ಸಂಘಟನೆಗಳ ಸುಧೀರ್ಘ ಹೋರಾಟದ ಫಲವಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಆದರೆ ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸಲು ಮೀನಮೇಷ ಎಣಿಸುತ್ತಿದೆ. ಒಳ ಮೀಸಲಾತಿ ನೀಡದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಬಸವರಾಜು ಎಚ್ಚರಿಕೆ ನೀಡಿದರು.
ಸಂವಿಧಾನದ ಮೂಲ ಆಶಯ ಸಮಾನತೆಯೂ ಸಕಾರಗೊಳ್ಳಬೇಕಾದರೆ ಸಂವಿಧಾನ ದತ್ತವಾಗಿ ಗುರುತಿಸಲಾಗಿರುವ ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕು. ಎಲ್ಲರಿಗೂ ಸಮಾನ ಅವಕಾಶ ದೊರೆಯುವಂತೆ ಆಗಬೇಕು ಎಂದು ಆಗ್ರಹಿಸಿದರು.
ಮೀಸಲಾತಿ ಜಾರಿಯಾದ ಬಳಿಕವು ಅದರಿಂದ ವಂಚಿತವಾದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರೆಕಿಸಿಕೊಡುವ ಸುವರ್ಣಾವಕಾಶವನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿದೆ. ಪುನಃ ಮತ್ತೊಂದು, ಇನ್ನೊಂದು ಆಯೋಗ ರಚನೆ ಮಾಡದೇ ಕೂಡಲೇ ಒಳಮೀಸಲಾತಿ ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಎನ್.ಶಿವಶಂಕರ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಜಿಲ್ಲಾ ಸಂಘಟನಾ ಸಂಚಾಲಕ ರಾಮಮೂರ್ತಿ, ನೆಲಮಂಗಲ ತಾಲ್ಲೂಕಿನ ದಾಸನಪುರ ಹೋಬಳಿ ಸಂಘಟನಾ ಸಂಚಾಲಕ ವೀರಣ್ಣ, ದೊಡ್ಡಬಳ್ಳಾಪುರ ತಾಲ್ಲೂಕು ಸಂಘಟನಾ ಸಂಚಾಲಕ ಜಿ.ನರಸಿಂಹಮೂರ್ತಿ, ಎನ್.ನರಸಿಂಹಮೂರ್ತಿ, ಬೈಲಾಂಜಿನಮೂರ್ತಿ, ವಿ. ಮನೋಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.