ADVERTISEMENT

ವಿದ್ಯಾರ್ಥಿನಿ ಮೇಲೆ ಆತ್ಯಾಚಾರ, ಕೊಲೆಗೆ ಆಕ್ರೋಶ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 13:10 IST
Last Updated 25 ಸೆಪ್ಟೆಂಬರ್ 2019, 13:10 IST
ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾರತ ಜನಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ.ಮುನಿಯಪ್ಪ (ಬಲದಿಂದ) ಮಾತನಾಡಿದರು
ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾರತ ಜನಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ.ಮುನಿಯಪ್ಪ (ಬಲದಿಂದ) ಮಾತನಾಡಿದರು   

ವಿಜಯಪುರ: ಕಾಲೇಜು ಮುಗಿಸಿಕೊಂಡು ಬರುವ ಮಾರ್ಗದಲ್ಲಿ ವಿದ್ಯಾರ್ಥಿನಿಯೊಬ್ಬರನ್ನು ಅಪಹರಿಸಿ ಆತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಯನ್ನು ಭಾರತ ಜನ ಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ.ಮುನಿಯಪ್ಪ ತೀವ್ರವಾಗಿ ಖಂಡಿಸಿದರು.

ಇಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನಲ್ಲಿ ವಿದ್ಯಾರ್ಥಿಯ ಮೇಲೆ ಆತ್ಯಾಚಾರವೆಸಗಿರುವುದರ ಜೊತೆಗೆ ಆಕೆಯನ್ನು ಕೊಲೆ ಮಾಡಿ ಕಾಲುವೆಗೆ ಬಿಸಾಕಿ ಕ್ರೌರ್ಯ ಮೆರೆದಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಮಹಿಳೆಯರು ನಿರ್ಭೀತಿಯಿಂದ ಓಡಾಡಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿರುವ ಕಾರಣ ಮುಖ್ಯಮಂತ್ರಿ ರಾಜೀನಾಮೆ ನೀಡಲಿ ಎಂದರು.

ADVERTISEMENT

ಮುಖಂಡ ಅಶ್ವಥಪ್ಪ ಮಾತನಾಡಿ, ಕ್ರೂರವಾಗಿ ವರ್ತನೆ ಮಾಡುವಂತಹ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಉಪಚುನಾವಣೆ ನಡೆಸುವುದು, ಸರ್ಕಾರ ಉಳಿಸಿಕೊಳ್ಳುವಲ್ಲಿ ನಿರತರಾಗಿರುವ ಮುಖ್ಯಮಂತ್ರಿ ಕನಿಷ್ಠ ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವನ ಹೇಳಿಲ್ಲ ಎಂದು ಟೀಕಿಸಿದರು.

ಕೂಡಲೇ ಅವರ ಕುಟುಂಬವನ್ನು ಭೇಟಿ ಮಾಡಬೇಕು. ಪೊಲೀಸ್ ವ್ಯವಸ್ಥೆ ಬಿಗಿ ಮಾಡಬೇಕು. ಮೃತಪಟ್ಟ ವಿದ್ಯಾರ್ಥಿನಿಯ ಕುಟುಂಬಕ್ಕೆ ₹20 ಲಕ್ಷ ಪರಿಹಾರ ಒದಗಿಸಬೇಕು. ಅವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವುದರ ಜೊತೆಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಮುಖಂಡ ಎಂ.ಡಿ.ರಾಮಚಂದ್ರಪ್ಪ ಮಾತನಾಡಿ, ಸಮಾಜದಲ್ಲಿ ನಡೆಯುವಂತಹ ಇಂತಹ ಕ್ರೂರವಾದ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಎಚ್ಚರ ವಹಿಸಬೇಕು. ಈ ವ್ಯವಸ್ಥೆಯನ್ನು ಸರಿದಾರಿಗೆ ತರಲಿಕ್ಕಾಗಿ ಹೋರಾಟಗಳು ನಡೆಯಬೇಕಾಗಿರುವಂತಹ ಅನಿವಾರ್ಯತೆ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಕೆ.ಮುನಿರಾಜು, ವೆಂಕಟರಮಣಪ್ಪ, ಲೋಕೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.