ADVERTISEMENT

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 3:01 IST
Last Updated 27 ಸೆಪ್ಟೆಂಬರ್ 2020, 3:01 IST
ಸಭೆಯಲ್ಲಿ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಉಪಸ್ಥಿತರಿದ್ದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಉಪಸ್ಥಿತರಿದ್ದರು.   

ದೇವನಹಳ್ಳಿ: ‘ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ಸ್ವಚ್ಛತಾ ಸಪ್ತಾಹ ಹಮ್ಮಿಕೊಳ್ಳಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು’ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದ್ದಾರೆ.

ದೇವನಹಳ್ಳಿ ಇಲ್ಲಿನ ಜಿಲ್ಲಾಡಳಿತ ಭವನದಲ್ಲಿರುವ ಸಭಾಂಗಣದಲ್ಲಿಂದು ಮಲೇರಿಯಾ ವಿರೋಧಿ ಮತ್ತು ಡೆಂಗೀ ವಿರೋಧಿ ಮಾಸಾಚಾರಣೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಟ್ಟಡಗಳ ಸುತ್ತಮುತ್ತ ಹಾಗೂ ನಿರ್ಮಾಣಗೊಳ್ಳುತ್ತಿರುವ ಹೊಸ ಕಟ್ಟಡದ ಮೇಲ್ಭಾಗದಲ್ಲಿ ನೀರು ನಿಲ್ಲದಂತೆ ಮಾಲೀಕರಿಗೆ ಸೂಚನೆ ನೀಡಬೇಕು. ಸೊಳ್ಳೆಗಳು ಉತ್ಪತ್ತಿಯಾಗುವ ನೀರು ನಿಂತಿರುವ ಹೊಂಡಗಳಲ್ಲಿ ಹಾಗೂ ಗಣಿಗಾರಿಕೆ ಪ್ರದೇಶದ ಹೊಂಡಗಳಲ್ಲಿ ಗಪ್ಪಿ ಮೀನು ಬಿಡಲು ಕ್ರಮ ವಹಿಸಬೇಕು ಎಂದ ಅವರು, ಹೊಸಕೋಟೆ ತಾಲ್ಲೂಕು ಮತ್ತು ನೆಲಮಂಗಲ ತಾಲ್ಲೂಕು ಸೇರಿದಂತೆ ನಗರ ಪ್ರದೇಶದ ಹೊರ ಭಾಗದಲ್ಲಿ ಕಸದ ತುಂಬಿರುವುದು ಕಂಡು ಬಂದಿದ್ದು, ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸ್ವಚ್ಛತೆಯನ್ನು ಕಾಪಾಡಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ತಿಳಿಸಿದರು.

ADVERTISEMENT

‘ಸಾರ್ವಜನಿಕರಿಗೆ ಮಲೇರಿಯಾ, ಡೆಂಗಿ, ಚಿಕುನ್‌ಗುನ್ಯಾ ರೋಗ ನಿಯಂತ್ರಣಗಳ ಬಗ್ಗೆ ಮಾಹಿತಿ ನೀಡಬೇಕು. ಸ್ವಚ್ಛತೆ ಹಾಗೂ ನೈರ್ಮಲ್ಯದ ಬಗ್ಗೆ ತಾಲ್ಲೂಕುವಾರು ನಗರಸಭೆ ಮತ್ತು ಪುರಸಭೆ ಮುಖ್ಯಸ್ಥರು ಇತರ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಮೂಡಿಸಿ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮವಹಿಸಬೇಕು’ ಎಂದರು.

‘ಮನೆಗಳಲ್ಲಿ ಶೇಖರಿಸುವ ನೀರನ್ನು ವಾರಕ್ಕೊಮ್ಮೆ ಸ್ವಚ್ಛ ಮಾಡುವ ಜೊತೆಗೆ ನೀರಿನ ಟ್ಯಾಂಕ್‌ಗಳ ಮೇಲೆ ಮುಚ್ಚಳದಿಂದ ಭದ್ರಗೊಳಿಸಬೇಕು. ಜನರು ವಾಸಿಸುವ ಪ್ರದೇಶಗಳ ಸುತ್ತಮುತ್ತ ಸ್ವಚ್ಛತೆಯಿಂದ ಕಾಪಾಡುವ ಮೂಲಕ ಆರೋಗ್ಯ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ ಅವರು ಮಾತನಾಡಿ, ‘ಜಿಲ್ಲೆಯಲ್ಲಿ 3 ಮಲೇರಿಯಾ, 7 ಚಿಕುನ್ ಗುನ್ಯಾ ಹಾಗೂ 8 ಡೆಂಗಿ ಪ್ರಕರಣ ಕಂಡು ಬಂದಿದೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಮಂಜುಳಾದೇವಿ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.