ADVERTISEMENT

ಸಾಧನೆ ಅವಿಭಾಜ್ಯ ಅಂಗವಾಗಲಿ: ನಿಸರ್ಗ ನಾರಾಯಣಸ್ವಾಮಿ

‘ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಿಲ್ಲಾ ಮಟ್ಟದ ಕಾರ್ಯಾಗಾರ’ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2018, 12:42 IST
Last Updated 15 ಡಿಸೆಂಬರ್ 2018, 12:42 IST
ಕಾರ್ಯಾಗಾರ ಉದ್ಘಾಟಿಸಿದ ಶಾಸಕ ನಿಸರ್ಗ ನಾರಾಯಣಸ್ವಾಮಿ
ಕಾರ್ಯಾಗಾರ ಉದ್ಘಾಟಿಸಿದ ಶಾಸಕ ನಿಸರ್ಗ ನಾರಾಯಣಸ್ವಾಮಿ   

ದೇವನಹಳ್ಳಿ: ಶೈಕ್ಷಣಿಕ ಸಾಧನೆ ವಿದ್ಯಾರ್ಥಿಗಳಲ್ಲಿ ಅವಿಭಾಜ್ಯ ಅಂಗವಾಗಬೇಕು ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವತಿಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2018–19 ನೇ ಸಾಲಿನ ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ನಿಲಯಗಳಲ್ಲಿರುವ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ‘ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಿಲ್ಲಾ ಮಟ್ಟದ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿದರು.

‘ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಆತ್ಮಸ್ಥೈರ್ಯದ ಜತೆಗೆ ಪರಿಶ್ರಮ ಅತಿಮುಖ್ಯ. ಆರಂಭದಲ್ಲಿ ಅಡೆತಡೆ ಸಹಜ, ಮೆಟ್ಟಿ ನಿಂತಾಗ ಗುರಿ ಮುಟ್ಟಲು ಸಾಧ್ಯವಿದೆ’ ಎಂದರು.

ADVERTISEMENT

‘ಐ.ಎ.ಎಸ್ ಮತ್ತು ಕೆ.ಎ.ಎಸ್ ಸ್ಪರ್ಧೆಗಳು ಕಠಿಣವಲ್ಲ. ಪದವಿ ಶಿಕ್ಷಣದ ಆರಂಭದಿಂದ ಪ್ರತಿಯೊಂದು ವಿಷಯದ ಬಗ್ಗೆ ಗಮನಹರಿಸಬೇಕು. ಪೋಷಕರ ಕಷ್ಟಗಳನ್ನು ಅರ್ಥ ಮಾಡಿಕೊಳ್ಳಬೇಕು. ಸರ್ಕಾರ ಅನೇಕ ಉಚಿತ ಯೋಜನೆಗಳನ್ನು ನೀಡುತ್ತಿದೆ. ಇವುಗಳನ್ನು ತಿಳಿದುಕೊಳ್ಳಬೇಕು’ ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಲಕ್ಷ್ಮಣ್ ಗೌಡ ಮಾತನಾಡಿ, ‘ಶೈಕ್ಷಣಿಕ ಕ್ಷೇತ್ರ ನಿರೀಕ್ಷೆಗೂ ಮೀರಿ ಸುಧಾರಣೆಯಾಗುತ್ತಿದೆ. ಜ್ಞಾನಾರ್ಜನೆಗೆ ಪ್ರಚಲಿತ ವಿದ್ಯಮಾನಗಳ ಮಾಹಿತಿ ಅಂಗೈಯಲ್ಲಿ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಇದು ಸಹಕಾರಿಯಾಗಲಿದೆ. ಸರ್ಕಾರ ಪದವಿ ಅಂಕಗಳನ್ನು ಮಾನದಂಡವನ್ನಾಗಿ ಪರಿಗಣಿಸಿದರೆ ಉನ್ನತ ಹುದ್ದೆ ಕಡುಬಡವರಿಗೂ ಸಿಗಲಿದೆ’ ಎಂದರು.

ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ಭವ್ಯ ಮಾತನಾಡಿ, ಸರ್ಕಾರ 1972 ರಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಅರಂಭಿಸಿ ಅನೇಕ ರೀತಿಯ ಪ್ರೋತ್ಸಾಹ ನೀಡುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ 32 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ನಿಲಯಗಳಿವೆ ಎಂದರು.

ಹಿಂದುಳಿದ ವರ್ಗಗಳ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುರುಡಯ್ಯ, ತಾಲ್ಲೂಕು ಪಂಚಾಯಿತಿ ಸ್ಥಾಯಿಸಮಿತಿ ಅಧ್ಯಕ್ಷ ಮಂಜುನಾಥ್, ಸದಸ್ಯ ಮಹೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.