ADVERTISEMENT

ದೇವನಹಳ್ಳಿ: ನೈಸರ್ಗಿಕ ಅವಘಡ ತಡೆಗೆ ಮುಂಜಾಗ್ರತೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 8:48 IST
Last Updated 12 ಜೂನ್ 2020, 8:48 IST
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಉಪಸ್ಥಿತರಿದ್ದರು .
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಉಪಸ್ಥಿತರಿದ್ದರು .   

ದೇವನಹಳ್ಳಿ: ಮುಂಗಾರು ಮಳೆ ಸಂದರ್ಭದಲ್ಲಿ ಉಂಟಾಗುವ ನೈಸರ್ಗಿಕ ಅವಘಡಗಳನ್ನು ತಕ್ಷಣದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ಇಲ್ಲಿನ ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂಗಾರು ಮಳೆ ಆರಂಭವಾಗಿದ್ದು, ನೈಸರ್ಗಿಕ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

‘ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿರುವ ಚರಂಡಿ ಮತ್ತು ನಾಲಾಗಳನ್ನು ಸ್ವಚ್ಛಗೊಳಿಸಬೇಕು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ರಸ್ತೆಗಳನ್ನು ಪರಿಶೀಲಿಸಿ, ದುರಸ್ತಿಗೆ ಅಗತ್ಯತೆ ಕಂಡುಬಂದಲ್ಲಿ ಕ್ರಮಕೈಗೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

‘ತುರ್ತು ವೈದ್ಯಕೀಯ ಸೇವೆಯನ್ನು ಒದಗಿಸಲು ಆರೋಗ್ಯ ಇಲಾಖೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು. ಡೆಂಗಿ ಮತ್ತು ಚಿಕುನ್ ಗುನ್ಯಾ ದಂತಹ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಔಷಧಿ ಸಿಂಪಡಿಸಿ ಸ್ವಚ್ಛತೆ ಕಾಪಾಡಿಕೊಳಲು ಜನರಿಗೆ ಅರಿವು ಮೂಡಿಸಬೇಕು. ಮೇವು ಸಂಗ್ರಹಣೆ ಮತ್ತು ಕಾಲು ಬಾಯಿ ರೋಗದ ಲಸಿಕೆ ಸೇರಿದಂತೆ ಇತರೆ ಅಗತ್ಯತೆ ಬಗ್ಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಅಪಾಯದಲ್ಲಿರುವ ಹಳೆ ಮರಗಳನ್ನು ಹಾಗೂ ಶಿಥಿಲ ಕಟ್ಟಡಗಳನ್ನು ತೆರವುಗೊಳಿಸಬೇಕು. ಬೆಸ್ಕಾಂ ಅಧಿಕಾರಿಗಳ ಸಹಕಾರದೊಂದಿಗೆ ವಿದ್ಯುತ್ ತಂತಿ ಹಾಗೂ ಕಂಬಗಳನ್ನು ಪರಿಶೀಲಿಸಿ, ಅಪಾಯಕಾರಿಯಾದ ಕಂಬಗಳನ್ನು ತೆರವುಗೊಳಿಸುವಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಮಂಜುಳಾದೇವಿ, ಉಪ ಪೊಲೀಸ್ ಅಧೀಕ್ಷಕ ರಂಗಪ್ಪ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಸುಮಾ, ಜಿಲ್ಲಾ ವಿಪತ್ತು ತಜ್ಞೆ ವಿನೂತ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.