ADVERTISEMENT

ದೇವನಹಳ್ಳಿಯಲ್ಲಿ ಯೋಗ ದಿನಾಚರಣೆಗೆ ಸಿದ್ಧತೆ

21ರಂದು ಮೂರು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 13:28 IST
Last Updated 19 ಜೂನ್ 2019, 13:28 IST
ಶಾಲಾ ವಿದ್ಯಾರ್ಥಿಗಳು ಯೋಗ ಅಭ್ಯಾಸದಲ್ಲಿ ನಿರತರಾಗಿದ್ದರು
ಶಾಲಾ ವಿದ್ಯಾರ್ಥಿಗಳು ಯೋಗ ಅಭ್ಯಾಸದಲ್ಲಿ ನಿರತರಾಗಿದ್ದರು   

ದೇವನಹಳ್ಳಿ: ಇಲ್ಲಿ ಜೂನ್‌ 21ರಂದು ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಪದಾಧಿಕಾರಿಗಳು ತಿಳಿಸಿದರು.

ಇಲ್ಲಿನ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಆಯುಷ್ ಇಲಾಖೆ, ಪ್ರಗತಿಪರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ಹೃದಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಐದನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ. ಇದಕ್ಕಾಗಿ ಯೋಗ ಅಭ್ಯಾಸದ ಪೂರ್ವಭಾವಿ ಸಿದ್ಧತೆ ಮತ್ತು ಯೋಗ ಕುರಿತು ಜಾಗೃತಿ ಜಾಥಾ ನಡೆಸಲಾಗುತ್ತಿದೆ ಎಂದು ಪ್ರಗತಿಪರ ಸಂಘಟನೆಗಳ ವಕ್ತಾರರು ತಿಳಿಸಿದರು.

ಅಂದು ಬೆಳಿಗ್ಗೆ 5.45 ರಿಂದ 6.55 ರ ವರೆಗೆ ವಿವಿಧ ಯೋಗ ಸಂಸ್ಥೆಗಳಿಂದ ಯೋಗ ಪ್ರದರ್ಶನ ಏರ್ಪಡಿಸಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯೊಂದಿಗೆ ಬೆಳಿಗ್ಗೆ 7ರಿಂದ 7.36 ಗಂಟೆಯವರೆಗೆ ಸಾಮಾನ್ಯ ಯೋಗ ಶಿಷ್ಟಾಚಾರದಂತೆ ಯೋಗಾಭ್ಯಾಸ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಖಾಸಗಿ ಯೋಗ ಸಂಸ್ಥೆಗಳ ಯೋಗಾಸಕ್ತರು ಹಾಗೂ ಸಾರ್ವಜನಿಕರು, ಶಾಲಾ ಮಕ್ಕಳು ಸೇರಿ ಒಟ್ಟು ಮೂರು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಬಿ.ಕೆ.ಶಿವಪ್ಪ ತಿಳಿಸಿದರು.

ADVERTISEMENT

ಕಾರ್ಯಕ್ರಮದಲ್ಲಿ ಪತಂಜಲಿ ಯೋಗಶಿಕ್ಷಣ ಸಮಿತಿ, ಸಂಜೀವಿನಿ ಯೋಗಕೇಂದ್ರ, ಆರ್ಟ್ ಆಫ್ ಲಿವಿಂಗ್ ಶಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಬ್ರಹ್ಮಕುಮಾರಿ ಈಶ್ವರೀಯ ಧ್ಯಾನ ಕೇಂದ್ರ, ಅತ್ರೇಯ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ನಡೆಯಲಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್, ಶಾಸಕರಾದ ನಿಸರ್ಗ ನಾರಾಯಣಸ್ವಾಮಿ. ಟಿ.ವೆಂಕಟರಮಣಯ್ಯ, ಡಾ.ಕೆ.ಶ್ರೀನಿವಾಸಮೂರ್ತಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕನ್ಯಾಕುಮಾರಿ, ಜಿಲ್ಲಾಧಿಕಾರಿ ಕರೀಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಉಪವಿಭಾಗಾಧಿಕಾರಿ ಮಂಜುನಾಥ್, ತಹಶೀಲ್ದಾರ್ ಕೇಶವಮೂರ್ತಿ ಭಾಗವಹಿಸಲಿದ್ದಾರೆ ಎಂದು ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಸದಸ್ಯ ನಗರಗನಹಳ್ಳಿ ಶ್ರೀನಿವಾಸ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.